ಮಂಡ್ಯ: ‘ಗ್ರಂಥಾಲಯಗಳು ಜ್ಞಾನ ಸಾಗರವಾದರೆ, ಗ್ರಂಥಪಾಲಕರು ಜ್ಞಾನ ಸಾಗರದ ನಾವಿಕರಂತೆ ಕಾರ್ಯನಿರ್ವಹಿಸಬೇಕು’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ನಂದಿನಿ ಕೆ.ಆರ್. ಅವರು ಗ್ರಾಮ ಪಂಚಾಯಿತಿ ಗ್ರಂಥಾಲಯಗಳ ಮೇಲ್ವಿಚಾರಕರಿಗೆ ಕಿವಿಮಾತು ಹೇಳಿದರು.
ಜಿಲ್ಲಾ ಪಂಚಾಯಿತಿಯ ಕಾವೇರಿ ಸಭಾಂಗಣದಲ್ಲಿ ಬುಧವಾರ ನಡೆದ ಗ್ರಂಥಪಾಲಕರ ದಿನಾಚರಣೆ ಹಾಗೂ ಗ್ರಾಮ ಪಂಚಾಯಿತಿ ಗ್ರಂಥಾಲಯಗಳ ಮೇಲ್ವಿಚಾರಕರ ಕುಂದುಕೊರತೆ ಸಭೆಯಲ್ಲಿ ಅವರು ಮಾತನಾಡಿದರು.
ಗ್ರಂಥಾಲಯಗಳನ್ನು ಸ್ಥಾಪನೆ ಮಾಡುವಷ್ಟೇ ಮುಖ್ಯವಾದುದು ಗ್ರಂಥಾಲಯಗಳನ್ನು ನಿರ್ವಹಣೆ ಮಾಡುವುದಾಗಿರುತ್ತದೆ. ಈ ನಿಟ್ಟಿನಲ್ಲಿ ಗ್ರಂಥಾಲಯ ಮೇಲ್ವಿಚಾರಕರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಅಭಿಪ್ರಾಯಪಟ್ಟರು.
ಗ್ರಂಥಾಲಯ ಮೇಲ್ವಿಚಾರಕರಿಗೆ ಮಾಸಿಕ ವೇತನ ಮತ್ತು ಇತರ ಭತ್ಯೆಗಳನ್ನು ಕಾಲಕಾಲಕ್ಕೆ ಬಿಡುಗಡೆ ಮಾಡಲು ಕ್ರಮವಹಿಸಲಾಗುತ್ತಿದೆ. ಹೊಸ ಗ್ರಂಥಾಲಯಗಳನ್ನು ಸ್ಥಾಪಿಸಿ ಅವುಗಳಿಗೆ ಅಗತ್ಯ ಪೀಠೋಪಕರಣಗಳನ್ನು ಒದಗಿಸಲಾಗಿದೆ. ಗ್ರಂಥಾಲಯಗಳಿಗೆ ಅಗತ್ಯವಿರುವ ಪುಸ್ತಕಗಳನ್ನು ನೀಡಲಾಗಿದ್ದು, ಗ್ರಂಥಾಲಯಗಳಿಗೆ ಮೂಲಸೌಕರ್ಯಗಳನ್ನು ಕಲ್ಪಿಸಲು ಸಹ ಕ್ರಮವಹಿಸಲಾಗಿದೆ ಎಂದು ತಿಳಿಸಿದರು.
ಭಾರತದ ಗ್ರಂಥಾಲಯ ಚಳವಳಿಯ ಪಿತಾಮಹ ಎಸ್.ಆರ್. ರಂಗನಾಥನ್ ಅವರ ಜನ್ಮದಿನದ ಅಂಗವಾಗಿ ಆಗಸ್ಟ್ 12ರಂದು ಗ್ರಂಥಪಾಲಕರ ದಿನಾಚರಣೆ ಆಚರಿಸಲು ಉದ್ದೇಶಿಸಲಾಗಿತ್ತು. ಆದರೆ, ಆ ಸಂದರ್ಭದಲ್ಲಿ ಜಿಲ್ಲೆಯ ಕೆಲವು ಗ್ರಂಥಾಲಯ ಮೇಲ್ವಿಚಾರಕರಿಗೆ ತರಬೇತಿ ಇದ್ದ ಕಾರಣ ಇಂದು ಗ್ರಂಥಪಾಲಕರ ದಿನಾಚರಣೆ ಆಚರಿಸಲಾಗುತ್ತಿದೆ ಎಂದು ನಂದಿನಿ ತಿಳಿಸಿದರು.
ಬೇಸಿಗೆ ಶೀಬಿರ ಆಯೋಜನೆ ಮತ್ತು ಗ್ರಂಥಾಲಯಗಳಲ್ಲಿ ವಿವಿಧ ವಿನೂತನ ಕಾರ್ಯಕ್ರಮಗಳ ಆಯೋಜನೆ ಆಧಾರದಲ್ಲಿ ಪ್ರತಿ ತಾಲ್ಲೂಕಿನ 3 ಗ್ರಂಥಪಾಲಕರಿಗೆ ಅಭಿನಂದನಾ ಪತ್ರವನ್ನು ವಿತರಿಸಲಾಯಿತು.
ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಲಕ್ಮಿ ಪಿ, ಸಹಾಯಕ ಕಾರ್ಯದರ್ಶಿಗಳಾದ ಚಂದ್ರು, ರವೀಂದ್ರ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಸುಷ್ಮಾ, ವೀಣಾ, ಶ್ರೀನಿವಾಸ್, ಲೋಕೇಶ್ ಮೂರ್ತಿ, ವೇಣು ಹಾಜರಿದ್ದರು.
ಎಲ್ಲ ಗ್ರಂಥಪಾಲಕರು ಈ ಹಿಂದೆ ನಡೆದ ಬೇಸಿಗೆ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಿದ್ದು ಅದರಂತೆ ಪ್ರತೀ ತಿಂಗಳು ವಿನೂತನ ಚಟುವಟಿಕೆಗಳನ್ನು ಆಯೋಜಿಸಿ ಅನುಷ್ಠಾನಗೊಳಿಸುವಂತೆ ಸಿಇಒ ನಂದಿನಿ ಕೆ.ಆರ್. ಸೂಚಿಸಿದರು. ಸೆಪ್ಟೆಂಬರ್‌ನಲ್ಲಿ ಮಾದಕ ಮುಕ್ತ ಕರ್ನಾಟಕ ಅಭಿಯಾನ ಹಮ್ಮಿಕೊಳ್ಳಲಾಗುತ್ತಿದ್ದು ಈ ಅಭಿಯಾನದಲ್ಲಿ ಗ್ರಂಥಪಾಲಕರು ಗ್ರಾಮ ಪಂಚಾಯಿತಿಗಳಿಗೆ ಸಹಕರಿಸಿ ಅಭಿಯಾನವನ್ನು ಯಶಸ್ವಿಗೊಳಿಸಲು ಸೂಚಿಸಿದರು. ನಿರುದ್ಯೋಗಿ ಯುವಕ– ಯುವತಿಯರು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಜ್ಜುಗೊಳ್ಳಲು ಹಾಗೂ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸಕ್ಕೆ ಅನುಕೂಲ ಆಗುವಂತೆ ಗ್ರಂಥಾಲಯಗಳು ಕಾರ್ಯನಿರ್ವಹಿಸಬೇಕು. ಇದರಿಂದ ಉತ್ತಮ ಸಮಾಜ ನಿರ್ಮಾಣ ಮಾಡಬಹುದಾಗಿರುತ್ತದೆ ಎಂದು ಅಭಿಪ್ರಾಯಪಟ್ಟರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.