ಮಳವಳ್ಳಿ: ಪಟ್ಟಣದ ಶಾಂತಿ ಕಾಲೇಜಿನ ಮುಂಭಾಗದ ಪುರಸಭೆಯ 33 ಎಕರೆ ಪ್ರದೇಶದಲ್ಲಿ ನಿವೇಶನ ಹಂಚಿಕೆ ಸಂಬಂಧ ಹಾಗೂ ಮೂಲಸೌಕರ್ಯ ಕಲ್ಪಿಸುವ ಬಗ್ಗೆ ರಾಜೀವ್ ಗಾಂಧಿ ವಸತಿ ನಿಗಯದ ಅಧಿಕಾರಿಗಳೊಂದಿಗೆ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಚರ್ಚಿಸಿದರು.
ರಾಜೀವ್ ಗಾಂಧಿ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪರಶುರಾಮ ಶಿನ್ನಾಳಕರ್ ಅವರೊಂದಿಗೆ ಶನಿವಾರ ಶಾಂತಿ ಕಾಲೇಜು ಮುಂಭಾಗದ ಪ್ರದೇಶಕ್ಕೆ ಭೇಟಿ ನೀಡಿದ ಪಿ.ಎಂ.ನರೇಂದ್ರಸ್ವಾಮಿ, ‘ಕಳೆದ ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ನಿವೇಶನ ಹಂಚಿಕೆ ಕಾರ್ಯಕ್ಕೆ ಮುಂದಾಗಿದ್ದು, ನಿವೇಶನ ಮತ್ತು ವಸತಿ ರಹಿತ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅತಿ ಶೀಘ್ರದಲ್ಲಿಯೇ ಹಂಚಿಕೆ ಪ್ರಕ್ರಿಯೆಗೆ ಚಾಲನೆ ದೊರೆಯಲಿದೆ. ನಿವೇಶನಗಳಿಗೆ ಅಗತ್ಯ ಮೂಲ ಸೌಕರ್ಯ ಕಲ್ಪಿಸಿ ಬಡಾವಣೆ ಅಭಿವೃದ್ಧಿಪಡಿಸಲು ಅನುದಾನ ಬಿಡುಗಡೆ ಸೇರಿದಂತೆ ಎಲ್ಲ ಕಾರ್ಯಗಳನ್ನು ಕೈಗೆತ್ತಿಗೊಳ್ಳಲು ಸೂಚಿಸಲಾಗಿದೆ’ ಎಂದು ತಿಳಿಸಿದರು.
‘ಪಟ್ಟಣದಲ್ಲಿ ವಾಸಿಸುತ್ತಿರುವ ನಿವೇಶನ ರಹಿತರಿಗೆ 33 ಎಕರೆ ಪ್ರದೇಶದಲ್ಲಿ ನಿವೇಶನ ಹಂಚಿಕೆಗೆ ಯಾವುದೇ ಕಾನೂನು ತೊಡಕು ಉಂಟಾಗದಂತೆ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಇರುವ ಸಣ್ಣಪುಟ್ಟ ಸಮಸ್ಯೆಗಳು ಶೀಘ್ರ ಬಗೆಹರಿಯಲಿವೆ. ಖಾಲಿ ನಿವೇಶನದಲ್ಲಿ ತ್ಯಾಜ್ಯ ಹಾಕಿರುವವರ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಬೇಕು’ ಎಂದು ಪುರಸಭೆ ಮುಖ್ಯಾಧಿಕಾರಿ ಎಂ.ಸಿ.ನಾಗರತ್ನ ಅವರಿಗೆ ಸೂಚಿಸಿದರು.
ಇದಕ್ಕೂ ಮುನ್ನ ಪರಶುರಾಮ ಶಿನ್ನಾಳಕರ್ ನೇತೃತ್ವದ ಅಧಿಕಾರಿಗಳ ತಂಡ ಮಾರೇಹಳ್ಳಿ ಬೀರೇಶ್ವರ ದೇವಸ್ಥಾನದ ಸಮೀಪ ಇರುವ ಬಡಾವಣೆಯನ್ನು ಪರಿಶೀಲನೆ ನಡೆಸಿ ಬಡಾವಣೆಯಲ್ಲಿ ಆಗಿರುವ ಲೋಪಗಳನ್ನು ಸರಿಪಡಿಸಿ ಅಭಿವೃದ್ಧಿ ಕಾರ್ಯಗಳನ್ನು ಮುಂದುವರೆಸುವ ಬಗ್ಗೆ ಅಧಿಕಾರಿಗಳಿಗೆ ಸೂಚಿಸಿತು.
ತಾಲ್ಲೂಕು ಪಂಚಾಯಿತಿ ಇಒ ಎಚ್.ಜಿ.ಶ್ರೀನಿವಾಸ್, ಪುರಸಭೆ ಮುಖ್ಯಾಧಿಕಾರಿ ಎಂ.ಸಿ.ನಾಗರತ್ನ ಹಾಗೂ ನಿಗಮದ ಅಧಿಕಾರಿಗಳು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.