ADVERTISEMENT

ಮಳವಳ್ಳಿ| ರಸ್ತೆ ಸುರಕ್ಷತಾ ನಿಯಮ ಪಾಲನೆ ಎಲ್ಲರ ಕರ್ತವ್ಯ: ನ್ಯಾಯಾಧೀಶ ಎಂ.ಮಹೇಂದ್ರ

​ಪ್ರಜಾವಾಣಿ ವಾರ್ತೆ
Published 15 ಜನವರಿ 2026, 5:16 IST
Last Updated 15 ಜನವರಿ 2026, 5:16 IST
ಮಳವಳ್ಳಿ ಪಟ್ಟಣದ ತಾಲ್ಲೂಕು ಪಂಚಾಯಿತಿ ಆವರಣದ ಬಳಿ ರಸ್ತೆ ಸುರಕ್ಷತಾ ಜಾಗೃತಿ ಜಾಥಾಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿ.ಜೆ.ಶೋಭಾರಾಣಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ಮಹೇಂದ್ರ ಚಾಲನೆ ನೀಡಿದರು 
ಮಳವಳ್ಳಿ ಪಟ್ಟಣದ ತಾಲ್ಲೂಕು ಪಂಚಾಯಿತಿ ಆವರಣದ ಬಳಿ ರಸ್ತೆ ಸುರಕ್ಷತಾ ಜಾಗೃತಿ ಜಾಥಾಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿ.ಜೆ.ಶೋಭಾರಾಣಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ಮಹೇಂದ್ರ ಚಾಲನೆ ನೀಡಿದರು    

ಮಳವಳ್ಳಿ: ‘ಪ್ರತಿನಿತ್ಯ ಅಪಘಾತ ಪ್ರಕರಣಗಳು ಹೆಚ್ಚುತ್ತಿದ್ದು, ರಸ್ತೆ ಸುರಕ್ಷತೆಯ ಬಗ್ಗೆ ಸಾರ್ವಜನಿಕರು, ವಿದ್ಯಾರ್ಥಿಗಳು ಸೇರಿದಂತೆ ಪ್ರತಿಯೊಬ್ಬರು ಜಾಗೃತಿ ಹೊಂದುವ ಅಗತ್ಯ’ ಎಂದು ಜೆಎಂಎಫ್‌ಸಿ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ಮಹೇಂದ್ರ ಹೇಳಿದರು.

ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ತಾಲ್ಲೂಕು ಕಾನೂನು ಸಮಿತಿ, ಪೊಲೀಸ್ ಇಲಾಖೆ, ತಾಲ್ಲೂಕು ಆಡಳಿತ, ವಕೀಲರ ಸಂಘ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಬುಧವಾರ ಆಯೋಜಿಸಿದ್ದ ರಸ್ತೆ ಸುರಕ್ಷತೆ ಜಾಗೃತಿ ಮತ್ತು ರಾಷ್ಟ್ರೀಯ ಯುವ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಸಾಕಷ್ಟು ಮಂದಿಗೆ ಅರಿವಿನ ಅಗತ್ಯವಿದ್ದು, ಹೆಲ್ಮೆಟ್ ರಹಿತ ಹಾಗೂ ಕುಡಿದ ಮತ್ತಿನಲ್ಲಿ ವಾಹನ ಚಾಲನೆ, ಮೊಬೈಲ್ ಫೋನ್‌ ಬಳಕೆ, ಅತೀವೇಗದಿಂದ ಚಾಲನೆ ಮಾಡುವುದರಿಂದ ಅನೇಕ ಸಾವು ನೋವುಗಳು ಸಂಭವಿಸಲಿದೆ. ಇವುಗಳ ನಿಯಂತ್ರಣಕ್ಕೆ ಎಲ್ಲರೂ ಸಹಕಾರ ನೀಡಬೇಕು. ವಿದ್ಯಾರ್ಥಿಗಳು ವಿದ್ಯಾರ್ಥಿ ದೆಸೆಯಿಂದಲೇ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು. ಜ.19,20 ಮತ್ತು 21ರಂದು ಹೋಬಳಿ ಮಟ್ಟದಲ್ಲೂ ಜಾಗೃತಿ ಮೂಡಿಸಲಾಗುತ್ತದೆ’ ಎಂದು ಹೇಳಿದರು.

ADVERTISEMENT

ತಹಶೀಲ್ದಾರ್ ಎಸ್.ವಿ.ಲೋಕೇಶ್ ಮಾತನಾಡಿ, ‘ವಿದ್ಯಾರ್ಥಿಗಳು ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು. ಸಕರಾತ್ಮಕ ಚಿಂತನೆಗಳು ಹಾಗೂ ಅಲೋಚನೆಗಳು ಉತ್ತಮ ವ್ಯಕ್ತಿತ್ವವನ್ನು ರೂಪಿಸುತ್ತವೆ’ ಎಂದರು.

ಡಿವೈಎಸ್ಪಿ ಎಸ್.ಬಿ.ಯಶವಂತ ಕುಮಾರ್ ಮಾತನಾಡಿ, ‘ಜನರ ರಕ್ಷಣೆಗಾಗಿಯೇ ರಸ್ತೆ ಸುರಕ್ಷತಾ ನಿಯಮಗಳನ್ನು ಜಾರಿ ಮಾಡಿದ್ದು, ಎಲ್ಲರೂ ಪಾಲಿಸಬೇಕು. ಪರವಾನಗಿ ಸೇರಿದಂತೆ ಸೂಕ್ತ ದಾಖಲೆಗಳಿಲ್ಲದೇ ವಾಹನ ಚಾಲನೆ ಮಾಡಬಾರದು’ ಎಂದರು.

ಜಾಗೃತಿ ಜಾಥಾಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿ.ಜೆ.ಶೋಭಾರಾಣಿ ಚಾಲನೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಡಿ.ಎಂ.ಸುಂದರ್ ವಹಿಸಿ ಮಾತನಾಡಿದರು. ಪ್ರಧಾನ ಸಿವಿಲ್ ನ್ಯಾಯಾಧೀಶರಾದ ನಾಜಿಯಾ ಕೌಸರ್, 1ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಕಾವ್ಯಶ್ರೀ, ಸಹಾಯಕ ಸರ್ಕಾರಿ ಅಭಿಯೋಜಕರಾದ ಎಂ.ಶಂಕರಸ್ವಾಮಿ, ಟಿ.ಎಲ್.ಶಿವಕುಮಾರ, ಕೆ.ಎಸ್.ಪರಮೇಶ್, ವಕೀಲರ ಸಂಘದ ಕಾರ್ಯದರ್ಶಿ ಸಿ.ಎಂ.ನಟೇಶ್, ವಿವಿಧ ಇಲಾಖೆಯ ಅಧಿಕಾರಿಗಳಾದ ವಿ.ಇ.ಉಮಾ, ಎಂ.ಸಿ.ನಾಗರತ್ನ, ಎನ್.ಸಂತೋಷ್ ಕುಮಾರ್, ನಂಜಮಣಿ, ಪ್ರಾಂಶುಪಾಲರಾದ ಡಿ.ಯಶೋಧ, ಅನಿತಾ, ಸಿಪಿಐ ಬಿ.ಎಸ್.ಶ್ರೀಧರ್ ಪಾಲ್ಗೊಂಡಿದ್ದರು.

ಕಳೆದ ಒಂದು ವರ್ಷದಲ್ಲಿ ಜಿಲ್ಲೆಯಲ್ಲಿನ ಅಪಘಾತ ಪ್ರಕರಣಗಳಲ್ಲಿ 400ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು ಎಲ್ಲರೂ ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಅಪಘಾತ ತಡೆಗಟ್ಟಲು ಸಹಕರಿಸಿ
ವಿ.ಜೆ.ಶೋಭಾರಾಣಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.