ADVERTISEMENT

ಮಂಡ್ಯ: ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ವೆಂಕಟೇಶ್‌ ಅಮಾನತು

​ಪ್ರಜಾವಾಣಿ ವಾರ್ತೆ
Published 26 ಫೆಬ್ರುವರಿ 2026, 11:26 IST
Last Updated 26 ಫೆಬ್ರುವರಿ 2026, 11:26 IST

ಮಂಡ್ಯ: ಭ್ರಷ್ಟಾಚಾರ ಮತ್ತು ಕರ್ತವ್ಯ ಲೋಪ ಆರೋಪದ ಮೇರೆಗೆ ಪಂಚಾಯತ್‌ ರಾಜ್‌ ಎಂಜಿನಿಯರಿಂಗ್‌ ಉಪವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ವೆಂಕಟೇಶ್‌ ಅವರನ್ನು ಅಮಾನತುಗೊಳಿಸಿ, ಸರ್ಕಾರ ಆದೇಶ ಹೊರಡಿಸಿದೆ.

ಮಳವಳ್ಳಿ ಉಪವಿಭಾಗದ ಪಂಚಾಯತ್‌ ರಾಜ್‌ ಎಂಜಿನಿಯರಿಂಗ್‌ ವಿಭಾಗದಲ್ಲಿ ಸಹಾಯಕ ಎಂಜಿನಿಯರ್‌ ಆಗಿ ಕರ್ತವ್ಯ ನಿರ್ವಹಿಸುವ ಸಂದರ್ಭ ವೆಂಕಟೇಶ್‌ ವಿರುದ್ಧ 2025ರ ಸೆಪ್ಟೆಂಬರ್‌ 24ರಂದು ಮಂಡ್ಯ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು.

ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಹಲಗೂರು ಗ್ರಾ.ಪಂ. ಸದಸ್ಯರಾಗಿದ್ದ ಕೆ. ಸುರೇಂದ್ರ ದೂರು ನೀಡಿದ್ದರು. ‘ನಕಲಿ ದಾಖಲೆಗಳನ್ನು ಸೃಷ್ಟಿಸಿ, ಖಾಸಗಿ ವ್ಯಕ್ತಿಗಳ ಅಕೌಂಟ್‌ಗೆ ಚೆಕ್‌ಗಳನ್ನು ನೀಡಿ, ಸುಮಾರು ₹60 ಲಕ್ಷ ದುರುಪಯೋಗ ಮಾಡಲಾಗಿದೆ. 15ನೇ ಹಣಕಾಸು ಯೋಜನೆಯಡಿ 2023–24ನೇ ಸಾಲಿನಲ್ಲಿ ಸರ್ಕಾರದ ವಿವಿಧ ಯೋಜನೆಗಳಡಿ ಬಿಡುಗಡೆಯಾದ ಅನುದಾನದಲ್ಲಿ ನಿಯಮಬಾಹಿರವಾಗಿ ಅಕ್ರಮ ಬಿಲ್‌ ಪಾವತಿ ಮಾಡಿ ಸರ್ಕಾರಕ್ಕೆ ಆರ್ಥಿಕ ನಷ್ಟ ಉಂಟು ಮಾಡಲಾಗಿದೆ’ ಎಂದು ದೂರು ದಾಖಲಾಗಿತ್ತು.

‘ಕರ್ತವ್ಯ ಲೋಪ ಎಸಗಿರುವುದು ಮೇಲ್ನೋಟಕ್ಕೆ ಕಂಡುಬಂದಿರುವುದರಿಂದ ಇಲಾಖೆ ವಿಚಾರಣೆ ಬಾಕಿ ಇಟ್ಟು, ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತು ಮಾಡಲಾಗಿದೆ’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಚೇತನ ಎಂ. ಆದೇಶದಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.