ADVERTISEMENT

ಮಂಡ್ಯ|3 ಬಸ್‌ಗಳ ಡಿಕ್ಕಿ:ಇಬ್ಬರು ಮಹಿಳೆಯರ ಸಾವು,75ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2025, 13:48 IST
Last Updated 19 ಅಕ್ಟೋಬರ್ 2025, 13:48 IST
   

ಮಳವಳ್ಳಿ (ಮಂಡ್ಯ ಜಿಲ್ಲೆ): ಕೆಎಸ್‌ಆರ್‌ಟಿಸಿ ಬಸ್‌ನ ಟೈರ್ ಸ್ಫೋಟಗೊಂಡು ಸಂಭವಿಸಿದ ಸರಣಿ ಅಪಘಾತದಲ್ಲಿ ಇಬ್ಬರು ಮಹಿಳೆಯರು ಮೃತಪಟ್ಟು, 75ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಭಾನುವಾರ ಸಂಜೆ ಬಾಚನಹಳ್ಳಿ ಬಳಿ ನಡೆದಿದೆ.

ಮಳವಳ್ಳಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಾಗಿದ್ದ 60 ವರ್ಷದ ಮಹಿಳೆ ಮತ್ತು 50 ವರ್ಷದ ಮತ್ತೊಬ್ಬ ಮಹಿಳೆಯು ಮಂಡ್ಯದ ಮಿಮ್ಸ್ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ.

ತಾಲ್ಲೂಕಿನ ಬಾಚನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ-948ರಲ್ಲಿ ಕೊಳ್ಳೇಗಾಲ ಕಡೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಟೈರ್ ಸ್ಫೋಟಗೊಂಡು ಚಾಲಕನ ನಿಯಂತ್ರಣ ತಪ್ಪಿ ಮಳವಳ್ಳಿ ಕಡೆಯಿಂದ ಎದುರಿಗೆ ಬರುತ್ತಿದ್ದ ಮತ್ತೊಂದು ಸಾರಿಗೆ ಬಸ್‌ಗೆ ಡಿಕ್ಕಿ ಹೊಡೆದಿದೆ.

ADVERTISEMENT

ಇದೇ ಮಾರ್ಗದಲ್ಲಿ ಬಂದ ಇನ್ನೊಂದು ಸಾರಿಗೆ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆಯಿತು.

10 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, 65ಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಗಾಯಾಳುಗಳಿಗೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ಹಲವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಾನವೀಯತೆ ಮೆರೆದ ಸಾರ್ವಜನಿಕರು

ಘಟನೆ ನಡೆದ ಕೂಡಲೇ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ತೆರಳಿ ಸಾರ್ವಜನಿಕರ ಸಹಾಯದೊಂದಿಗೆ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವಲ್ಲಿ ಯಶಸ್ವಿಯಾದರು.

ಘಟನೆಯಿಂದಾಗಿ ಒಂದು ಗಂಟೆಗೂ ಅಧಿಕ ಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಅಸ್ಥವ್ಯಸ್ಥವಾಗಿತ್ತು.

ಬಸ್‌ನಲ್ಲಿದ್ದ ಗಾಯಾಳುಗಳನ್ನು ಸ್ಥಳೀಯರು ಆಂಬುಲೆನ್ಸ್ ಹಾಗೂ ವಾಹನಗಳಲ್ಲಿ ಆಸ್ಪತ್ರೆಗೆ ಸೇರಿಸಿದರು.

ಬಸ್ ಚಾಲಕರಿಗೂ ಸಹ ತೀವ್ರವಾಗಿ ಗಾಯಗಳಾಗಿವೆ.

ಘಟನಾ ಸ್ಥಳಕ್ಕೆ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ, ಸಿಪಿಐ ಬಿ.ಎಸ್.ಶ್ರೀಧರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.