
ಮಂಡ್ಯ: 2027ರ ಜನಗಣತಿಯು ಎರಡು ಹಂತಗಳಲ್ಲಿ ನಡೆಯಲಿದ್ದು ಮೊದಲ ಹಂತದ ಮನೆಗಳ ಪಟ್ಟಿ 2026ರ ಏಪ್ರಿಲ್ 16ರಿಂದ ಸೆಪ್ಟೆಂಬರ್ 15ರವರೆಗೆ ಹಾಗೂ ಜನಸಂಖ್ಯೆ ಎಣಿಕೆ ಫೆಬ್ರುವರಿ 2027ರಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಕುಮಾರ ತಿಳಿಸಿದರು.
2027ರ ಜನಗಣತಿ ಸಿದ್ಧತೆಗಳ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು.
ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಯವರು ಮುಖ್ಯ ಜನಗಣತಿ ಅಧಿಕಾರಿಗಳಾಗಿ ಜವಾಬ್ದಾರಿ ವಹಿಸಲಿದ್ದಾರೆ. 2026ರ ಏಪ್ರಿಲ್‌ನಿಂದ ಸೆಪ್ಟೆಂಬರ್‌ವರೆಗೆ ನಡೆಯಲಿರುವ ಡಿಜಿಟಲ್ ಮನೆಗಳ ಪಟ್ಟಿ ಮತ್ತು ವಸತಿ ಗಣತಿಗಾಗಿ ಅಗತ್ಯ ಸಿಬ್ಬಂದಿ (ಶಿಕ್ಷಕರು, ನೌಕರರು) ನೇಮಕವಾಗಬೇಕು. ಈ ಸಂಬಂಧ ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು ಎಂದು ಅವರು ತಿಳಿಸಿದರು.
ಗಣತಿದಾರರು ಮತ್ತು ಮೇಲ್ವಿಚಾರಕರ ನೇಮಕಾತಿಯನ್ನು ಸಿ.ಎಂ.ಎಂ.ಎಸ್ ಪೋರ್ಟಲ್‌ನಲ್ಲಿ ಪೂರ್ಣಗೊಳಿಸಬೇಕು ಎಂದು ಅವರು ತಿಳಿಸಿದರು. ಜಿಪಿಎಸ್ ಆಧಾರಿತ ಡಿಜಿಟಲ್ ಮ್ಯಾಪಿಂಗ್ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಜನಗಣತಿ ಕಾರ್ಯವನ್ನು ಅತ್ಯಂತ ಪರಿಣಾಮಕಾರಿಯಾಗಿ ಮಾಡಲು ಮಹತ್ವದ ಸುತ್ತೋಲೆಗಳನ್ನು ಸರಿಯಾಗಿ ಅರ್ಥ ಮಾಡಿಕೊಂಡು ಅದರ ಪ್ರಕಾರ ಕೆಲಸ ಮಾಡಬೇಕು ಎಂದು ಹೇಳಿದರು.
ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎಸ್. ಶಿವಾನಂದಮೂರ್ತಿ ಮಾತನಾಡಿ, ‘ಶಿಕ್ಷಕರು ಮತ್ತು ಇತರ ಇಲಾಖೆ ಸಿಬ್ಬಂದಿ ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು. ಸರ್ಕಾರದಿಂದ ಬರುವ ಮಹತ್ವದ ಸುತ್ತೋಲೆಗಳನ್ನು ಸರಿಯಾಗಿ ಅರ್ಥ ಮಾಡಿಕೊಂಡು ಅಧಿಕಾರಿಗಳು ಹಾಗೂ ಸಿಬ್ಬಂದಿ ಕೆಲಸ ಮಾಡಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಮಂಡ್ಯ ಉಪವಿಭಾಗಾಧಿಕಾರಿ ಎಂ.ಶಿವಮೂರ್ತಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ನರಸಿಂಹಮೂರ್ತಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.