ADVERTISEMENT

ಮಂಡ್ಯ | ದೌರ್ಜನ್ಯ ಪ್ರಕರಣ: ಗಂಭೀರವಾಗಿ ಪರಿಗಣಿಸಿ–ಜಿಲ್ಲಾಧಿಕಾರಿ

ಪರಿಶಿಷ್ಟ ಸಮುದಾಯಗಳ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನ ಸಂಬಂಧ ಸಭೆ: ಡಿಸಿ ಸೂಚನೆ

​ಪ್ರಜಾವಾಣಿ ವಾರ್ತೆ
Published 27 ಫೆಬ್ರುವರಿ 2026, 7:04 IST
Last Updated 27 ಫೆಬ್ರುವರಿ 2026, 7:04 IST
ಮಂಡ್ಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ, ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನ ಸಂಬಂಧ ಗುರುವಾರ ಜಿಲ್ಲಾಧಿಕಾರಿ ಕುಮಾರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು 
ಮಂಡ್ಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ, ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನ ಸಂಬಂಧ ಗುರುವಾರ ಜಿಲ್ಲಾಧಿಕಾರಿ ಕುಮಾರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು    

ಮಂಡ್ಯ: ಪರಿಶಿಷ್ಟರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಸಂತ್ರಸ್ತರಿಗೆ ನೀಡಲಾಗುವ ಪರಿಹಾರ ಹಣ ಮತ್ತು ಇತರ ಸೌಲಭ್ಯಗಳನ್ನು ವಿಳಂಬವಿಲ್ಲದೆ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಕುಮಾರ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ, ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನ ಸಂಬಂಧ ಗುರುವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಉಪವಿಭಾಗ ಮಟ್ಟದಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಕುಂದುಕೊರತೆಗಳ ಕುರಿತು ಜಾಗೃತಿ ಉಸ್ತುವಾರಿ ಸಮಿತಿ ಸಭೆಗಳನ್ನು ಕಡ್ಡಾಯವಾಗಿ ನಡೆಸಿ ಸಭೆಗಳಲ್ಲಿ ಸಲ್ಲಿಕೆಯಾಗುವ ದೂರುಗಳನ್ನು ಸ್ಥಳೀಯ ಮಟ್ಟದಲ್ಲೇ ಬಗೆಹರಿಸಲು ಪ್ರಯತ್ನಿಸಬೇಕು ಎಂದು ಹೇಳಿದರು.

ADVERTISEMENT

ಕುಂದುಕೊರತೆಗಳ ಸಭೆಯಲ್ಲಿ ಕೈಗೊಂಡ ಕ್ರಮಗಳ ಬಗ್ಗೆ ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸಬೇಕು. ಪ್ರತಿ ತಾಲ್ಲೂಕು ಮಟ್ಟದಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಸಿ. ಶಿವಾನಂದಮೂರ್ತಿ, ಹೆಚ್ಚುವರಿ ಎಸ್ಪಿ ಗಂಗಾಧರಸ್ವಾಮಿ, ಮಂಡ್ಯ ಉಪ ವಿಭಾಗಾಧಿಕಾರಿ ಶಿವಮೂರ್ತಿ, ಪಾಂಡವಪುರ ಉಪವಿಭಾಗಧಿಕಾರಿ ಶ್ರೀನಿವಾಸ್, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು, ದಲಿತ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.

ದೌರ್ಜನ್ಯ ದೂರು; ಸ್ಥಳೀಯ ಮಟ್ಟದಲ್ಲೇ ಬಗೆಹರಿಸಿ ಮತದಾರರ ಮ್ಯಾಪಿಂಗ್‌ ಶೇ 81ರಷ್ಟು ಸಾಧನೆ  ಮತದಾರರ ಪಟ್ಟಿ: ಮನೆ– ಮನೆ ಮ್ಯಾಪಿಂಗ್‌ 

‘ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ’

ಮಂಡ್ಯ: ಭಾರತೀಯ ಚುನಾವಣಾ ಆಯೋಗವು ದೇಶದಾದ್ಯಂತ ಮತದಾರರ ಪಟ್ಟಿಯ ನೈಜತೆ ಕಾಪಾಡಲು ‘ವಿಶೇಷ ತೀವ್ರ ಪರಿಷ್ಕರಣೆ’ (ಎಸ್‌.ಐ.ಆರ್‌) ಪ್ರಕ್ರಿಯೆಯನ್ನು ಮಾಡಲು ತಿಳಿಸಿದೆ. ಮತದಾರರ ಪಟ್ಟಿಯ ಮ್ಯಾಪಿಂಗ್ ಮತ್ತು ವಿಶೇಷ ಪರಿಷ್ಕರಣೆ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕುಮಾರ ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಮತದಾರರ ಪಟ್ಟಿಯ ಮ್ಯಾಪಿಂಗ್ ಮತ್ತು ವಿಶೇಷ ಪರಿಷ್ಕರಣೆ ಸಂಬಂಧ ಗುರುವಾರ ನಡೆದ ಸಭೆಯಲ್ಲಿ ಮಾತನಾಡಿದರು. ‌ಬೂತ್ ಮಟ್ಟದ ಅಧಿಕಾರಿಗಳು ಮನೆ- ಮನೆಗೆ ಭೇಟಿ ನೀಡಿ ಮತದಾರರ ವಿವರಗಳನ್ನು ಪರಿಶೀಲಿಸಿ ಮತದಾರರ ಮ್ಯಾಪಿಂಗ್ ಪ್ರಕ್ರಿಯೆ ಮಾಡಬೇಕು ಎಂದು ತಿಳಿಸಿದರು. ಮತದಾರರ ಪಟ್ಟಿಯಲ್ಲಿರುವ ತಪ್ಪುಗಳನ್ನು ಸರಿಪಡಿಸಲು ಬೀದಿವಾರು ಮತ್ತು ಮನೆವಾರು ಮ್ಯಾಪಿಂಗ್ ಮಾಡುವಂತೆ ತಿಳಿಸಿದರು. ಮಂಡ್ಯ ಜಿಲ್ಲೆಯಲ್ಲಿ 1583368 ಮತದಾರರು ಇದ್ದು 1292681 ಮತದಾರರ ಮ್ಯಾಪಿಂಗ್ ಆಗಿದ್ದು 290687 ಮತದಾರರ ಮ್ಯಾಪಿಂಗ್ ಆಗಬೇಕಾಗಿದ್ದು ಶೇ 81.64 ಸಾಧನೆ ಮಾಡಲಾಗಿದೆ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.