ADVERTISEMENT

ಮಂಡ್ಯ: ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಸಾವು

​ಪ್ರಜಾವಾಣಿ ವಾರ್ತೆ
Published 5 ನವೆಂಬರ್ 2025, 4:06 IST
Last Updated 5 ನವೆಂಬರ್ 2025, 4:06 IST
   

ಮಂಡ್ಯ: ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ಕಾವೇರಿ ಉದ್ಯಾನದಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದ ರೈತ ಬುಧವಾರ ಬೆಳಿಗ್ಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಕೆ.ಆರ್. ಪೇಟೆ ತಾಲ್ಲೂಕು ಮೂಡನಹಳ್ಳಿ ಗ್ರಾಮದ ರೈತ ಮಂಜೇಗೌಡ ಎಂ.ಡಿ (55) ಮೃತಪಟ್ಟವರು.

ಭೂಸ್ವಾಧೀನಗೊಂಡ ಜಮೀನಿಗೆ ಹಲವಾರು ವರ್ಷಗಳಿಂದ ಪರಿಹಾರ ಸಿಕ್ಕಿಲ್ಲ. ಅರ್ಜಿ ಸಲ್ಲಿಸಿದರೂ ಅಧಿಕಾರಿಗಳು ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ, ಮಂಗಳವಾರ ಬೆಳಿಗ್ಗೆ ಆತ್ಮಹತ್ಯೆಗೆ ಯತ್ನಿಸಿದ್ದರು.

ADVERTISEMENT

ಬೆಂಕಿ ಹಚ್ಚಿಕೊಳ್ಳುತ್ತಿದ್ದಂತೆ ಸಮೀಪದಲ್ಲಿದ್ದ ಸಾರ್ವಜನಿಕರು ಬೆಂಕಿ ನಂದಿಸಿ, ನಗರದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲು ನೆರವಾಗಿದ್ದರು.

ಮಿಮ್ಸ್ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.

ದೇಹವು ಶೇ 80ರಷ್ಟು ಸುಟ್ಟು ಹೋಗಿತ್ತು ಎಂದು ವೈದ್ಯರು ತಿಳಿಸಿದ್ದಾರೆ.

ಈ ಘಟನೆ ಖಂಡಿಸಿ ಮಂಡ್ಯ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಮಂಗಳವಾರ ಸಂಜೆ ಕನ್ನಡಪರ ಮತ್ತು ರೈತಪರ ಹೋರಾಟಗಾರರು "ಹೊತ್ತಿ ಉರಿದ ರೈತನಿಗೆ ನ್ಯಾಯ ಕೊಡಿ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ" ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದ್ದರು.

ಮಂಡ್ಯ ಸೆಂಟ್ರಲ್ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.