
ಶ್ರೀರಂಗಪಟ್ಟಣ: ‘ಕಳೆದ ಲೋಕಸಭೆ ಚುನಾವಣೆಯಲ್ಲಿ ಗೆಲ್ಲಿಸಿ ಕೇಂದ್ರ ಸಚಿವನಾಗಲು ಕಾರಣರಾದ ಜಿಲ್ಲೆಯ ಜನರ ನಿರೀಕ್ಷೆ ಹುಸಿಯಾದಂತೆ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ’ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
ಮೈಸೂರಿಗೆ ತೆರಳುವ ಮಾರ್ಗಮಧ್ಯೆ ಪಟ್ಟಣದ ಕುವೆಂಪು ವೃತ್ತದಲ್ಲಿ ಮಂಗಳವಾರ ಜೆಡಿಎಸ್ ಕಾರ್ಯಕರ್ತರನ್ನು ಉದ್ದೇಶಿಸಿ ಅವರು ಮಾತನಾಡಿದರು.
‘ಜಿಲ್ಲೆಯಲ್ಲಿ ಕೈಗಾರಿಕೆ ಆರಂಭಿಸುವ ಚಿಂತನೆ ಇದೆ. ಆದರೆ ಬಂಡವಾಳ ಹೂಡುವವರನ್ನು ಜಿಲ್ಲೆಗೆ ಆಕರ್ಷಿಸಬೇಕಾದರೆ ಮೂಲ ಸೌಕರ್ಯ ಕಲ್ಪಿಸಬೇಕು. ಕೈಗಾರಿಕೆಗಳನ್ನು ಸ್ಥಾಪಿಸಲು ಅಗತ್ಯವಾದ ಭೂಮಿ, ನೀರು, ವಿದ್ಯುತ್ ಒದಗಿಸುವ ಜವಾಬ್ದಾರಿ ರಾಜ್ಯ ಸರ್ಕಾರದ ಮೇಲಿದೆ. ಆದರೆ ಕೆಲವರು ಪತ್ರಿಕಾ ಹೇಳಿಕೆ ಮೂಲಕ ವಿರೋಧಾಭಾಸದ ಮಾತುಗಳನ್ನಾಡುತ್ತಿದ್ದಾರೆ’ ಎಂದು ಟೀಕಿಸಿದರು.
‘ಜನರ ಆಶೀರ್ವಾದದಿಂದ ಇನ್ನೂ ಜನರ ನಡುವೆ ಇದ್ದೇನೆ. ಜಿಲ್ಲೆಯ ಜನರ ಪ್ರಾರ್ಥನೆ ಮತ್ತು ಅಭಿಮಾನಕ್ಕೆ ತಲೆಬಾಗುತ್ತೇನೆ. ಜನರ ಋಣ ತೀರಿಸುವ ಹೊಣೆ ನನ್ನ ಮೇಲಿದ್ದು, ವಿಶ್ವಾಸವಿರಲಿ’ ಎಂದರು.
‘ನೇರ ನಡೆ ನುಡಿಯ ರವೀಂದ್ರ ಶ್ರೀಕಂಠಯ್ಯ ಅವರ ಮೇಲೆ ನಿಮ್ಮ ಆಶೀರ್ವಾದ ಇರಲಿ’ ಎಂದು ಹೇಳಿದರು.
ಎಚ್.ಡಿ. ಕುಮಾರಸ್ವಾಮಿ ಅವರ ಜನ್ಮದಿನದ ನಿಮಿತ್ತ ಜೆಡಿಎಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಡಿ. ರಮೇಶ್, ಮಾಜಿ ಶಾಸಕರಾದ ರವೀಂದ್ರ ಶ್ರೀಕಂಠಯ್ಯ, ಸಿ.ಎಸ್. ಪುಟ್ಟರಾಜು, ಸುರೇಶಗೌಡ, ಮುಖಂಡರಾದ ರಾಮಚಂದ್ರು, ತಿಲಕ್‌ಕುಮಾರ್, ನಗುವನಹಳ್ಳಿ ಶಿವಸ್ವಾಮಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎ.ಆರ್. ಮರೀಗೌಡ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.