ಮಂಡ್ಯ: ಚಾಮರಾಜ ನಗರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಸೋಮವಾರ ಮದ್ದೂರಿನ ರುದ್ರಾಕ್ಷಿ ಪುರದ ಹತ್ತಿರ ಚಾಲಕನ ನಿಯಂತ್ರಣ ತಪ್ಪಿ, ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.
ಬಸ್ ನಲ್ಲಿದ್ದ 33 ಪ್ರಯಾಣಿಕರಿಗೆ ಗಾಯವಾಗಿದ್ದು, ಗಾಯಗೊಂಡಿರುವ ಎಲ್ಲ ಪ್ರಯಾಣಿಕರಿಗೆ ಮದ್ದೂರು ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಮತ್ತು ಜಿಲ್ಲಾಧಿಕಾರಿ ಕುಮಾರ ಅವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.
ತುರ್ತು ಚಿಕಿತ್ಸೆ ಅವಶ್ಯವಿದ್ದವರಿಗೆ ಮಂಡ್ಯದ ಮಿಮ್ಸ್ ಆಸ್ಪತ್ರೆ ಮತ್ತು ಖಾಸಗಿ ಆಸ್ಪತ್ರೆಗೆ ಸ್ಥಳಾಂತರ ಮಾಡಿ ಚಿಕಿತ್ಸೆ ಕೊಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಒಂದು ವೇಳೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಲ್ಲಿ, ಅದರ ಖರ್ಚು ವೆಚ್ಚವನ್ನು ಕೆ ಎಸ್ ಆರ್ ಟಿಸಿ ವತಿಯಿಂದ ಭರಿಸುವಂತೆ ನಿರ್ದೇಶನ ನೀಡಿದರು.
ಮೂವರು ಗಂಭೀರ ಗಾಯಗೊಂಡಿದ್ದು, ಅವರನ್ನು ಮಿಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲು ವೈದ್ಯಾಧಿಕಾರಿಗೆ ಸೂಚಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಮೋಹನ್, ಕೆ.ಎಸ್.ಆರ್.ಟಿಸಿ ಜಿಲ್ಲಾ ನಿಯಂತ್ರಕ ನಾಗರಾಜು ಸೇರಿದಂತೆ ಇನ್ನಿತರೆ ಅಧಿಕಾರಿಗಳು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.