ಮಂಡ್ಯ ಜಿಲ್ಲಾ ಪಂಚಾಯಿತಿಯ ಕಾವೇರಿ ಸಭಾಂಗಣದಲ್ಲಿ ಶನಿವಾರ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಥಮ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅಧ್ಯಕ್ಷತೆಯಲ್ಲಿ ನಡೆಯಿತು.
ಮಂಡ್ಯ: ‘ಸರ್ಕಾರಿ ಕಚೇರಿಗಳಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ. ರೈತರು ಮತ್ತು ಸಾರ್ವಜನಿಕರಿಂದ ಕೆಲವು ಅಧಿಕಾರಿಗಳು ಲಂಚಕ್ಕೆ ಪೀಡಿಸುತ್ತಿದ್ದಾರೆ. ಜನಪ್ರತಿನಿಧಿಗಳ ಸೂಚನೆಯನ್ನು ಪಾಲಿಸದೆ ಉದ್ಧಟತನ ತೋರುತ್ತಾ ಕರ್ತವ್ಯಲೋಪ ಎಸಗುತ್ತಿದ್ದಾರೆ’ ಎಂದು ಆಡಳಿತ ಪಕ್ಷದ ಶಾಸಕರೇ ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ನಗರದ ಜಿಲ್ಲಾ ಪಂಚಾಯಿತಿಯ ಕಾವೇರಿ ಸಭಾಂಗಣದಲ್ಲಿ ಶನಿವಾರ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಥಮ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳ ಭ್ರಷ್ಟಾಚಾರ ಮತ್ತು ಲಂಚಾವತಾರದ ವಿಷಯಗಳು ಪ್ರತಿಧ್ವನಿಸಿದವು.
ಮಳವಳ್ಳಿ ಶಾಸಕ ಪಿ.ಎಂ. ನರೇಂದ್ರಸ್ವಾಮಿ ಮಾತನಾಡಿ, ‘ಮಂಡ್ಯ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ. ಸಾರ್ವಜನಿಕರ ಕೆಲಸ ಮಾಡಿಕೊಡಲು ಕೇಸ್ ವರ್ಕರ್ ₹20 ಸಾವಿರದಿಂದ ₹1 ಲಕ್ಷದವರೆಗೆ ಲಂಚಕ್ಕೆ ಬೇಡಿಕೆ ಇಡುತ್ತಿದ್ದಾನೆ. ಎಲ್ಲ ಟೋಟಲ್ ಮಾಡಿ ಹೇಳಿದರೆ ನಾನೇ ಅವನ ಖಾತೆಗೆ ಹಣ ಹಾಕಿಸುತ್ತೇನೆ’ ಎಂದು ಖಾರವಾಗಿ ನುಡಿದರು.
ಇದಕ್ಕೆ ದನಿಗೂಡಿಸಿದ ವಿಧಾನ ಪರಿಷತ್ ಸದಸ್ಯ ಕೆ.ವಿವೇಕಾನಂದ, ‘ಶ್ರೀರಂಗಪಟ್ಟಣ ತಾಲ್ಲೂಕು ಬೆಳಗೊಳ ಗ್ರಾಮ ಆಡಳಿತಾಧಿಕಾರಿ (ವಿ.ಎ) ರೈತರಿಂದ ₹5 ಲಕ್ಷ ಲಂಚ ಕೇಳಿದ್ದಾರೆ. ಈ ಬಗ್ಗೆ ನಾನು ಪ್ರಶ್ನೆ ಮಾಡಿದರೂ ಸರಿಯಾಗಿ ಸ್ಪಂದಿಸಲಿಲ್ಲ’ ಎಂದು ದೂರಿದರು.
ಇದನ್ನು ಕೇಳಿದ ಸಚಿವ ಚಲುವರಾಯಸ್ವಾಮಿ ಅವರು ತೀವ್ರ ಬೇಸರ ವ್ಯಕ್ತಪಡಿಸಿ, ‘ಅಧಿಕಾರಿಗಳ ಕರ್ತವ್ಯಲೋಪ, ಭ್ರಷ್ಟಾಚಾರ, ಲಂಚಗುಳಿತನವನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಇಂಥ ಭ್ರಷ್ಟ ಅಧಿಕಾರಿಗಳಿಂದ ನಮ್ಮ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತದೆ. ಇಂಥವರನ್ನು ನಮ್ಮ ಜಿಲ್ಲೆಯಲ್ಲಿ ಒಂದು ಕ್ಷಣವೂ ಇಟ್ಟುಕೊಳ್ಳಬೇಡಿ’ ಎಂದು ಖಡಕ್ ಎಚ್ಚರಿಕೆ ನೀಡಿದರು.
ಶಾಸಕ ನರೇಂದ್ರಸ್ವಾಮಿ ಮಾತನಾಡಿ, ‘ನಮ್ಮ ತಾಲ್ಲೂಕಿನ ಕಂದಾಯ ಇಲಾಖೆಯಲ್ಲಿ ಭ್ರಷ್ಟಾಚಾರ ಎಸಗಿ ಅಮಾನತುಗೊಂಡ ಅಧಿಕಾರಿಗಳು ಮತ್ತೆ ತಾಲ್ಲೂಕಿನಲ್ಲಿ ಅಡ್ಡಾಡುತ್ತಿದ್ದಾರೆ. ತಾಲ್ಲೂಕಿನಲ್ಲಿ ನಕಲಿ ದಾಖಲೆ ಸೃಷ್ಟಿಸುವ ಸೈಬರ್ ಸೆಂಟರ್‌ಗಳಿವೆ. 800 ಎಕರೆ ಅಷ್ಟೇ ಅಲ್ಲ, ಒಟ್ಟು 2500 ಎಕರೆ ಸರ್ಕಾರಿ ಜಮೀನು ಖಾಸಗಿಯವರಿಗೆ ಅಕ್ರಮವಾಗಿ ಪರಭಾರೆಯಾಗಿದೆ. ಈ ಬಗ್ಗೆ ತಹಶೀಲ್ದಾರ್ ಮತ್ತು ಉಪವಿಭಾಗಾಧಿಕಾರಿ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ತಾಕೀತು ಮಾಡಿದರು.
ಜಿಲ್ಲಾಧಿಕಾರಿ ಕುಮಾರ ಮಾತನಾಡಿ, ‘ರಾಜ್ಯ ತನಿಖಾ ಸಮಿತಿ ನೀಡಿದ ವರದಿ ಆಧಾರದ ಮೇಲೆ ಈಗಾಗಲೇ ತಪ್ಪಿತಸ್ಥ ಅಧಿಕಾರಿಗಳನ್ನು ಅಮಾನತು ಮಾಡಿ, ಎಫ್‌ಐಆರ್ ದಾಖಲಿಸಲಾಗಿದೆ. ಅಕ್ರಮವಾರಿ ಪರಭಾರೆಯಾಗಿದ್ದ ಜಮೀನಿನ ಪಹಣಿಯಲ್ಲಿ ‘ಸರ್ಕಾರ’ ಎಂದು ಹೆಸರು ನಮೂದಿಸಲಾಗಿದೆ. ಸರ್ಕಾರದ ಆಸ್ತಿ ಎಂದು ನಾಮಫಲಕ ಅಳವಡಿಸಿ, ಕಾನೂನು ಪ್ರಕಾರ ಜಮೀನು ವಶಕ್ಕೆ ತೆಗೆದುಕೊಳ್ಳಲಾಗುವುದು’ ಎಂದು ಸ್ಪಷ್ಟನೆ ನೀಡಿದರು.
ಕಾರ್ಯಕ್ರಮದಲ್ಲಿ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ.ರೇವಣ್ಣ, ಮೈಸೂರು ವಿಭಾಗದ ಉಪಾಧ್ಯಕ್ಷೆ ಪುಷ್ಪಾ ಅಮರ್‌ನಾಥ್, ಶಾಸಕರಾದ ರಮೇಶ ಬಂಡಿಸಿದ್ದೇಗೌಡ, ಕೆ.ಎಂ. ಉದಯ, ಎಚ್.ಟಿ. ಮಂಜು, ಮುಡಾ ಅಧ್ಯಕ್ಷ ನಹೀಂ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್‌ಕುಮಾರ್ ಮೀನಾ, ಜಿ.ಪಂ. ಸಿಇಒ ಕೆ.ಆರ್.ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.
ಕೆಡಿಪಿ ಸಭೆಗೆ ಗೈರಾಗಿದ್ದ ಕಾವೇರಿ ನೀರಾವರಿ ನಿಗಮದ ಅಧೀಕ್ಷಕ ಎಂಜಿನಿಯರ್ ಕೆ.ರಘುರಾಮ್ ಅವರಿಗೆ ನೋಟಿಸ್ ನೀಡುವಂತೆ ಸಚಿವ ಎನ್.ಚಲುವರಾಯಸ್ವಾಮಿ ಅವರು ಜಿಲ್ಲಾಧಿಕಾರಿಗೆ ಸೂಚಿಸಿದರು. ಸಭೆಗೆ ಬರಲು ಸಾಧ್ಯವಾಗದಿದ್ದರೆ ಜಿಲ್ಲಾಧಿಕಾರಿ ಅಥವಾ ಸಿಇಒ ಅವರಿಗೆ ತಿಳಿಸಬೇಕು. ಮಾಹಿತಿ ನೀಡದೇ ಗೈರಾಗುವುದು ತಪ್ಪು. ಇಲಾಖೆ ಅಧಿಕಾರಿಗಳು ಕೆಡಿಪಿ ಸಭೆಗೆ ಕಡ್ಡಾಯವಾಗಿ ಹಾಜರಾಗಬೇಕು. ಸರಿಯಾದ ಸಿದ್ಧತೆ ಮತ್ತು ಅಗತ್ಯ ಮಾಹಿತಿಯೊಂದಿಗೆ ಬರಬೇಕು ಎಂದು ಸಚಿವರು ತಾಕೀತು ಮಾಡಿದರು.
‘ಮಂಡ್ಯಕ್ಕೆ ಕಾವೇರಿ ನೀರು ಕೊರತೆ; ತಮಿಳುನಾಡಿಗೆ ಹೆಚ್ಚುವರಿ’ ‘ಶೂನ್ಯ ದಾಖಲಾತಿ: ಜಿಲ್ಲೆಯಲ್ಲಿ 351 ಶಾಲೆಗಳಿಗೆ ಬೀಗ’ ‘ನದಿಯಲ್ಲಿ ತೆಪ್ಪದ ಸಂಚಾರ; ತಪ್ಪದ ಆತಂಕ’ ‘ಶುಂಠಿಗೆ ಬೆಂಕಿ ರೋಗ; ರೈತರು ಕಂಗಾಲು’ ‘ಸೋರುವ ಕೊಠಡಿಯಲ್ಲೇ ಕಲಿಕೆ’ ‘ಕಲ್ಲು ಗಣಿಗಾರಿಕೆಯಿಂದ ಸಂಪರ್ಕ ನಾಲೆ ಕುಸಿಯುವ ಆತಂಕ’ ಮುಂತಾದ ಪ್ರಜಾವಾಣಿ ವರದಿಗಳು ಕೆಡಿಪಿ ಸಭೆಯಲ್ಲಿ ಪ್ರತಿಧ್ವನಿಸಿದವು. ಸಚಿವರು ಪ್ರಜಾವಾಣಿ ವರದಿಗಳನ್ನು ಪ್ರಸ್ತಾಪಿಸಿ ಈ ಬಗ್ಗೆ ಏನು ಕ್ರಮ ಕೈಗೊಂಡಿದ್ದೀರಿ ಎಂದು ಪ್ರಶ್ನಿಸಿದರು. ಮಾಧ್ಯಮಗಳಲ್ಲಿ ಇಂಥ ವರದಿಗಳು ಬಂದಾಗ ಕೂಡಲೇ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ತಾಕೀತು ಮಾಡಿದರು. ಸಂಪರ್ಕ ನಾಲೆ ಕುಸಿಯುವ ಭೀತಿ ಬಗ್ಗೆ ಪ್ರಸ್ತಾಪಿಸಿ ಸ್ಥಳ ಪರಿಶೀಲನೆ ನಡೆಸಿ ಕೂಡಲೇ ವರದಿ ನೀಡುವಂತೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಪುಷ್ಪಲತಾ ಅವರಿಗೆ ಸಚಿವರು ಸೂಚಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.