
ಮಂಡ್ಯ: ‘ನಗರದಲ್ಲಿ ಹೆಚ್ಚಿನ ವಾಹನ ದಟ್ಟಣೆ ಇರುವುದರಿಂದ ಮಂಡ್ಯ ದಕ್ಷಿಣ ಭಾಗಕ್ಕೆ ಬೈಪಾಸ್ ‘ರಿಂಗ್ ರೋಡ್’ ಪ್ರಸ್ತಾವ ಇರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ವಾಹನ ದಟ್ಟಣೆಯ ಕುರಿತು ಅಧ್ಯಯನ ನಡೆಸಿ ವರದಿ ನೀಡಲು ಎಫ್.ಪಿ. ಪ್ರಾಜೆಕ್ಟ್ ಮ್ಯಾನೇಜ್‌ಮೆಂಟ್ ಸಂಸ್ಥೆಗೆ ಸೂಚಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಕುಮಾರ ಹೇಳಿದರು.
ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ರಾಷ್ಟ್ರೀಯ ಹೆದ್ದಾರಿ ರಿಂಗ್ ರೋಡ್ ಸಂಬಂಧ ಶುಕ್ರವಾರ ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಎಫ್.ಪಿ ಪ್ರಾಜೆಕ್ಟ್ ಮ್ಯಾನೇಜ್‌ಮೆಂಟ್ ಸಂಸ್ಥೆಯವರು ನಗರದಲ್ಲಿ 5 ಕಡೆ ಸಿ.ಸಿ.ಟಿ.ವಿ. ಕ್ಯಾಮೆರಾ ಅಳವಡಿಸಿ ಪ್ರತಿನಿತ್ಯ ನಗರದಲ್ಲಿ ಸಂಚರಿಸುವ ವಾಹನಗಳ ದಟ್ಟಣೆಯ ಕುರಿತು ಮಾಹಿತಿ ಮತ್ತು ಅಂಕಿಅಂಶಗಳನ್ನು ಸಂಗ್ರಹಿಸಿರುತ್ತಾರೆ ಎಂದು ತಿಳಿಸಿದರು.
ನಗರದಲ್ಲಿನ ವಾಹನ ದಟ್ಟಣೆಯನ್ನು ಕಡಿಮೆ ಮಾಡಲು ‘ರಿಂಗ್ ರೋಡ್’ ನಿರ್ಮಿಸುವ ಕುರಿತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಸದರಿ ವಾಹನ ದಟ್ಟಣೆ ವರದಿಗೆ ಅನುಮೋದನೆ ದೊರೆತ ಕೂಡಲೇ ವಿಸ್ತೃತ ಯೋಜನಾ ವರದಿ (ಡಿಪಿಆರ್) ತಯಾರಿಸಲು ಸೂಚಿಸಿದರು.
ವಾಹನ ದಟ್ಟಣೆ ವರದಿ ಅನುಮೋದನೆಗೊಂಡ ನಂತರ ಡಿ.ಪಿ.ಆರ್. ಸಿದ್ಧಪಡಿಸಿ. ರಿಂಗ್ ರೋಡ್ ನಿರ್ಮಿಸಿದ ಪಕ್ಷದಲ್ಲಿ ಶೇಕಡಾ ಎಷ್ಟು ಪ್ರಮಾಣದಲ್ಲಿ ನಗರದ ಸಂಚಾರ ದಟ್ಟಣೆ ಆಗಲಿದೆ ಹಾಗೂ ರಸ್ತೆಯ ಉದ್ದ ಅಗಲದ ಕುರಿತು ಮಾಹಿತಿ ಸಂಗ್ರಹ ಮಾಡಲು ಜಿಲ್ಲಾ ಮಟ್ಟದ ಸಮಿತಿಯನ್ನು ರಚಿಸಿ ಎಂದು ಹೇಳಿದರು.
ಸಭೆಯಲ್ಲಿ ಉಪವಿಭಾಗಾಧಿಕಾರಿ ಶಿವಮೂರ್ತಿ, ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಕೃಷ್ಣಕುಮಾರ್, ತಹಶೀಲ್ದಾರ್ ವಿಶ್ವನಾಥ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.