ADVERTISEMENT

ಎಸ್.ಸಿ, ಎಸ್.ಟಿ ಅನುದಾನ ಖರ್ಚು ಮಾಡದಿದ್ದರೆ ಕ್ರಮ: ಜಿಲ್ಲಾಧಿಕಾರಿ ಎಚ್ಚರಿಕೆ

ಜಿಲ್ಲಾ ಜಾಗೃತಿ ಉಸ್ತುವಾರಿ ಸಮಿತಿ ಸಭೆ: ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್‌ ಅಧಿಕಾರಿಗಳಿಗೆ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2021, 14:19 IST
Last Updated 4 ಫೆಬ್ರುವರಿ 2021, 14:19 IST
ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಜಾಗೃತಿ ಉಸ್ತುವಾರಿ ಸಮಿತಿ ಸಭೆಯಲ್ಲಿ ಡಾ.ಬಾಬು ಜಗಜೀವನರಾಮ್‌ ಭಾವಚಿತ್ರ ಅನಾವರಣಗೊಳಿಸಲಾಯಿತು
ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಜಾಗೃತಿ ಉಸ್ತುವಾರಿ ಸಮಿತಿ ಸಭೆಯಲ್ಲಿ ಡಾ.ಬಾಬು ಜಗಜೀವನರಾಮ್‌ ಭಾವಚಿತ್ರ ಅನಾವರಣಗೊಳಿಸಲಾಯಿತು   

ಮಂಡ್ಯ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸಮುದಾಯಕ್ಕೆ ಮೀಸಲಿಟ್ಟ ಅನುದಾನವನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಎಲ್ಲಾ ಇಲಾಖೆಯ ಅಧಿಕಾರಿಗಳು ಹಣವನ್ನು ನಿಗದಿತ ಸಮಯದೊಳಗೆ ಖರ್ಚು ಮಾಡಬೇಕು. ಸಮರ್ಪಕವಾಗಿ ಹಣ ಖರ್ಚು ಮಾಡದಿದ್ದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು’ ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್‌ ಎಚ್ಚರಿಕೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಡೆದ ಮಂಡ್ಯ ಜಿಲ್ಲಾ ಜಾಗೃತಿ ಉಸ್ತುವಾರಿ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

‘ಎಸ್‌ಸಿ, ಎಸ್‌ಟಿ ಸಮುದಾಯಗಳಿಗೆ ಮೀಸಲಿಟ್ಟ ಅನುದಾನವನ್ನು ಯಾವುದೇ ಕಾರಣಕ್ಕೂ ಅನ್ಯ ಉದ್ದೇಶಕ್ಕೆ ಬಳಸಕೂಡದು. ಆಯಾಯ ವರ್ಷದಲ್ಲಿ ಅನುದಾನವನ್ನು ಖರ್ಚುಮಾಡುವಂತೆ ಎಲ್ಲಾ ಇಲಾಖೆಯ ಅಧಿಕಾರಿಗಳು ಕ್ರಮ ವಹಿಸಬೇಕು. ಜಿಲ್ಲಾ ಕೇಂದ್ರದ ಡಾ.ಬಿ.ಆರ್ ಅಂಬೇಡ್ಕರ್ ಭವನದ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಬೇಕು. ಕಾಮಗಾರಿ ಪೂರ್ಣಗೊಳಿಸಲು ಬಾಕಿ ಇರುವ ಅನುದಾನವನ್ನು ಸದುಪಯೋಗಪಯೋಗ ಮಾಡಿಕೊಳ್ಳಬೇಕು’ ಎಂದು ಸೂಚಿಸಿದರು.

ADVERTISEMENT

‘ತಾಲ್ಲೂಕು ಕೇಂದ್ರಗಳಲ್ಲಿ ಡಾ. ಬಾಬು ಜಗಜೀವನರಾಂ ಭವನ ನಿರ್ಮಾಣ ಸಂಬಂಧ ಸರ್ಕಾರದಿಂದ ಬಿಡುಗಡೆಯಾಗಿರುವ ಅನುದಾನ ಸದ್ಬಳಕೆ ಮಾಕೊಳ್ಳಬೇಕು. ಬಗರ್ ಹುಕುಂ ಸಾಗುವಳಿ ಜಮೀನನ್ನು ಸಕ್ರಮಗೊಳಿಸುವ ಬಗ್ಗೆ ಪರಿಶಿಷ್ಟರಿಗೆ ಯಾವುದೇ ತೊಂದರೆ ಆಗದಂತೆ ಕ್ರಮವಹಿಸಬೇಕು. ಗ್ರಾಮ ಪಂಚಾಯಿತಿ, ಪುರಸಭೆ, ನಗರಸಭೆ ವ್ಯಾಪ್ತಿಯ ಅನುದಾನಗಳನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಬೇಕು’ ಎಂದರು.

‘ಉಪವಿಭಾಗ ಮಟ್ಟದಲ್ಲಿ, ತಾಲ್ಲೂಕು ಮಟ್ಟದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಜನರ ಕುಂದುಕೊರತೆ ಸಭೆಯನ್ನು 3 ತಿಂಗಳಿಗೊಮ್ಮೆ ಕಡ್ಡಾಯವಾಗಿ ನಡೆಸಬೇಕು. ದೌರ್ಜನ್ಯ ಪ್ರಕರಣದಡಿ ನೊಂದ ಸಂತ್ರಸ್ತರಿಗೆ ಪರಿಹಾರ ಮಂಜೂರು ಮಾಡಲು ನಿಯಮಾನುಸಾರ ಕ್ರಮವಹಿಸಬೇಕು. ಜಿಲ್ಲೆಯ ಪ್ರತಿ ಗ್ರಾಮದಲ್ಲಿ ಸ್ಮಶಾನ ಭೂಮಿ ಮಂಜೂರಾಗಿರುವ, ಒತ್ತುವರಿ ತೆರವುಗೊಳಿಸುವ, ಅಭಿವೃದ್ಧಿಗೊಳಿಸುವ ಬಗ್ಗೆ ಆದ್ಯತೆ ನೀಡಬೇಕು. ಸ್ಮಶಾನ ಜಾಗದಲ್ಲಿ ಮೂಲ ಸೌಕರ್ಯ ಇರುವಂತೆ ನೋಡಿಕೊಳ್ಳಬೇಕು. ಲ್ಲಾ ಗ್ರಾಮಗಳಲ್ಲೂ ಸ್ಮಶಾನ ಭೂಮಿ ಲಭ್ಯವಿರುವಂತೆ ನೋಡಿಕೊಳ್ಳಬೇಕು’ ಎಂದರು.

‘ಡಾ.ಬಾಬು ಜಗಜೀವನರಾಮ್‌ ಭಾವಚಿತ್ರ ಎಲ್ಲಾ ಇಲಾಖೆಯ ಕಚೇರಿಗಳಲ್ಲಿ ಕಡ್ಡಾಯವಾಗಿ ಅಳವಡಿಸಬೇಕು. ಜಯಂತಿ ಸಮಾರಂಭಗಳನ್ನು ತಪ್ಪದೇ ನಡೆಸಬೇಕು. ಸಮುದಾಯದ ರಕ್ಷಣೆಗೆ ಪ್ರಮುಖ ಆದ್ಯತೆ ನೀಡಬೇಕು’ ಎಂದು ತಿಳಿಸಿದರು.

ಜಿ.ಪಂ ಸಿಇಒ ಜುಲ್ಪಿಕರ್ ಉಲ್ಲಾ ರವರು , ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್‌, ಸಮಾಜ ಕಲ್ಯಾಣಾಧಿಕಾರಿ ರಂಗೇಗೌಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.