
ಮಂಡ್ಯ: ‘ವಿದ್ಯಾರ್ಥಿಗಳು ಕೇವಲ ಪಠ್ಯ ಪುಸ್ತಕಗಳಿಗೆ ಸೀಮಿತವಾಗದೆ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು. ಸುಪ್ತವಾಗಿರುವ ಪ್ರತಿಭೆಯನ್ನು ಅನಾವರಣಗೊಳಿಸಿದಾಗ ಉತ್ತಮ ಸಾಧನೆ ಮಾಡಲು ಸಾಧ್ಯವಾಗುತ್ತದೆ’ ಎಂದು ಶಾಸಕ ಪಿ.ರವಿಕುಮಾರ್ ಹೇಳಿದರು.
ನಗರದ ಸಂತ ಜೋಸೆಫರ ಪ್ರೌಢಶಾಲೆ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಮಂಗಳವಾರ ಆಯೋಜಿಸಿದ್ದ 2025-26ನೇ ಸಾಲಿನ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಉತ್ತಮ ವ್ಯಾಸಂಗ ಮಾಡಿ ಐಎಎಸ್, ಐಪಿಎಸ್, ಐಎಫ್‌ಎಸ್‌ನಂತಹ ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು. ಜನಸೇವಕರಾಗಲು ರಾಜಕೀಯ ಪ್ರವೇಶ ಮಾಡಬೇಕು. ಭಾರತ ಯುವ ಪೀಳಿಗೆಯ ಮೇಲೆ ನಿಂತಿದೆ. ಮಕ್ಕಳು ದೊಡ್ಡ ಕನಸು ಕಾಣಬೇಕು ಮತ್ತು ಅದರ ಸಾಕಾರಕ್ಕೆ ಶ್ರಮಪಡಬೇಕು ಎಂದು ಕಿವಿಮಾತು ಹೇಳಿದರು.
ಜಿಲ್ಲಾ ಪಂಚಾಯಿತಿ ಸಿಇಒ ಕೆ.ಆರ್. ನಂದಿನಿ ಮಾತನಾಡಿ, ‘ಪ್ರತಿಭಾ ಕಾರಂಜಿ ವೈಯಕ್ತಿಕವಾಗಿ ನನ್ನ ಜೀವನದ ಅವಿಭಾಜ್ಯ ಅಂಗವಾಗಿದೆ. ಕಲಿಕಾ ದಿನಗಳಲ್ಲಿ ನಮ್ಮ ಶಾಲೆಯನ್ನು ಪ್ರತಿನಿಧಿಸಿ ವಿವಿಧ ಸ್ಪರ್ಧೆಗಳಲ್ಲಿ ಭಾಗಿಯಾಗುತ್ತಿದ್ದೆ. ಪ್ರತಿಭೆಗಳ ಸಮ್ಮಿಲನ ಮತ್ತು ಅನಾವರಣಕ್ಕೆ ಪ್ರತಿಭಾ ಕಾರಂಜಿ ಒಂದು ಉತ್ತಮ ವೇದಿಕೆಯಾಗಿದೆ’ ಎಂದರು.
ಮಕ್ಕಳಿಗೆ ಆತ್ಮವಿಶ್ವಾಸ ತುಂಬುವ ಕೆಲಸ ಮಾಡಬೇಕು. ಮಕ್ಕಳ ಪ್ರತಿಭೆಯನ್ನು ಗುರುತಿಸಿದಾಗ ಮಾತ್ರ ಅವರು ಎತ್ತರಕ್ಕೆ ಬೆಳೆಯುತ್ತಾರೆ ಎಂದು ನಂದಿನಿ ಹೇಳಿದರು.
ಪ್ರತಿಭಾ ಕಾರಂಜಿಯಲ್ಲಿ ವಿವಿಧ ಶಾಲೆಗಳ ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿದರು.
ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕೆ.ನಾಗೇಶ್, ಜೆ.ವೈ.ಮಂಜುನಾಥ್, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಪುಟ್ಟರಾಜಯ್ಯ, ಡಯಟ್ ಉಪನಿರ್ದೇಶಕ ಎಚ್.ಎನ್.ಯೋಗೇಶ್, ಡಿಡಿಪಿಐ ಜಿ.ಎ.ಲೋಕೇಶ್, ದಕ್ಷಿಣ ವಲಯ ಬಿಇಒ ಮಹದೇವ್, ಉತ್ತರ ವಲಯ ಕ್ಷೇತ್ರ ಬಿಇಒ ಕೆ.ಟಿ.ಸೌಭಾಗ್ಯಾ ಪಾಲ್ಗೊಂಡಿದ್ದರು.
ಪ್ರತಿಯೊಂದು ಮಗುವಿನಲ್ಲೂ ವಿಶೇಷ ಪ್ರತಿಭೆ ಇರುತ್ತದೆ. ಸೂಕ್ತ ವೇದಿಕೆ ಸಿಗದಿದ್ದರೆ ಅವರ ಪ್ರತಿಭೆ ಕಮರಿ ಹೋಗುತ್ತದೆ. ಪ್ರತಿಭೆಯ ಆನಾವರಣಕ್ಕೆ ಅವಕಾಶ ಕಲ್ಪಿಸುವುದು ನಮ್ಮೆಲ್ಲರ ಜವಾಬ್ದಾರಿ– ಕುಮಾರ, ಜಿಲ್ಲಾಧಿಕಾರಿ ಮಂಡ್ಯ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.