ಮಳವಳ್ಳಿ: ‘ರಾಜ್ಯದ ರೈತರ ಪ್ರಗತಿಗೆ ಸರ್ಕಾರದ ಸಹಯೋಗದೊಂದಿಗೆ ಕೃಷಿಕ ಸಮಾಜ ತನ್ನದೆ ಕೊಡುಗೆ ನೀಡುತ್ತಿದೆ’ ಎಂದು ಕೃಷಿಕ ಸಮಾಜದ ರಾಜ್ಯ ಘಟಕದ ಅಧ್ಯಕ್ಷ ಎಸ್.ಆರ್.ಮಂಜುನಾಥಗೌಡ ಹೇಳಿದರು.
ಪಟ್ಟಣದ ಕೃಷಿ ಇಲಾಖೆಯ ಕಚೇರಿಗೆ ಮಂಗಳವಾರ ಭೇಟಿ ನೀಡಿ ತಾಲ್ಲೂಕು ಕೃಷಿಕ ಸಮಾಜದ ಕಾರ್ಯಕಾರಿ ಸಮಿತಿಯ ಸಭೆ ನಡೆಸಿ ಅವರು ಮಾತನಾಡಿದರು.
ರಾಜ್ಯದ ಎಲ್ಲೆಡೆ ಭೇಟಿ ನೀಡಿ ರೈತರ ಸಮಸ್ಯೆಗಳ ಪರಿಹಾರಕ್ಕೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗುತ್ತಿದೆ. ಕೃಷಿಕ ಸಮಾಜದ ತಾಲ್ಲೂಕು ಪದಾಧಿಕಾರಿಗಳಿಗೆ ಇಲಾಖೆಯ ಸಂಪೂರ್ಣ ಮಾಹಿತಿ ಒದಗಿಸಬೇಕು. ಅವರ ಸಲಹೆ ಪಡೆದು ರೈತರಿಗೆ ಅನುಕೂಲವಾಗುವ ಯೋಜನೆ ರೂಪಿಸಬೇಕು. ಸಂಘದಲ್ಲಿ ಯಾವುದೇ ಲೋಪವಾಗದಂತೆ ಜಾಗೃತಿ ವಹಿಸಬೇಕು ಎಂದರು.
ಕೃಷಿ ಸಚಿವರ ಸೂಚನೆಯಂತೆ ರಾಜ್ಯದ ಎಲ್ಲ ತಾಲ್ಲೂಕುಗಳಲ್ಲೂ ಕೃಷಿಕ ಸಮಾಜಕ್ಕೆ ಸ್ವಂತ ನಿವೇಶನ ಕಲ್ಪಿಸಿ ಕಟ್ಟಡ ನಿರ್ಮಿಸುವ ಗುರಿ ಹೊಂದಲಾಗಿದೆ. ಮಳವಳ್ಳಿಗೆ ಕಳೆದ ಬಾರಿ ಭೇಟಿ ನೀಡಿ ಸಂದರ್ಭದಲ್ಲಿ ಕೊಟ್ಟು ಮಾತಿನಂತೆ ಕಟ್ಟಡ ನಿರ್ಮಾಣಕ್ಕೆ ಹಣ ನೀಡಲಾಗಿದೆ ಎಂದು ತಿಳಿಸಿದರು.
ತಾಲ್ಲೂಕು ಕೃಷಿಕ ಸಮಾಜದ ಪದಾಧಿಕಾರಿಗಳು ಇಲಾಖೆ ಅಧಿಕಾರಿಗಳು ನಮ್ಮೊಂದಿಗೆ ನಿರಂತರ ಸಂಪರ್ಕದಲ್ಲಿ ಸಾಧಿಸಿದರೆ ರೈತರಿಗೆ ಸರ್ಕಾರದ ಸವಲತ್ತು ತಲುಪಿಸುವಲ್ಲಿ ಸಹಕಾರ ನೀಡುವುದಾಗಿ ಎಂದರು.
ಕೃಷಿಕ ಸಮಾಜದ ರಾಜ್ಯ ಘಟಕದ ಅಧ್ಯಕ್ಷ ಮಂಜುನಾಥ ಗೌಡ, ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ರೈತರಿಗೆ ವಿತರಣೆಗಾಗಿ ಸಿದ್ಧಪಡಿಸಲಾದ ಬಿತ್ತನೆ ಬೀಜಗಳು, ಅದರ ಗುಣಮಟ್ಟ ಮತ್ತು ಇತರೆ ಅಂಶಗಳನ್ನು ಪರಿಶೀಲಿಸಿದರು. ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜಗಳನ್ನು ವಿತರಿಸಬೇಕು ಎಂದು ಅಧಿಕಾರಿಗಳು ಸೂಚಿಸಿದರು.
ಪಟ್ಟಣದಲ್ಲಿ ಕೃಷಿಕ ಸಮಾಜದ ಕಟ್ಟಡ ನಿರ್ಮಾಣಕ್ಕೆ ₹7.5 ಲಕ್ಷ ಸಹಾಯ ಧನದ ಚೆಕ್ ಅನ್ನು ಕೃಷಿಕ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಕೆ.ಎಸ್.ಪ್ರಕಾಶ್ ಅವರಿಗೆ ಹಸ್ತಾಂತರ ಮಾಡಿದರು.
ಕೃಷಿಕ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷ ಧನಂಜಯ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ದೀಪಕ್, ಕೃಷಿಕ ಸಮಾಜದ ಪದಾಧಿಕಾರಿಗಳು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.