ADVERTISEMENT

ಮಳೆ ಅವಘಡ: ತ್ವರಿತವಾಗಿ ಸ್ಪಂದಿಸುವಂತೆ ಸಚಿವ ಚಲುವರಾಯಸ್ವಾಮಿ ಸೂಚನೆ

ಪಿಡಿಒಗಳು ಕೇಂದ್ರಸ್ಥಾನದಲ್ಲಿದ್ದು, ಜನರ ಸಮಸ್ಯೆ ನಿವಾರಿಸಿ

​ಪ್ರಜಾವಾಣಿ ವಾರ್ತೆ
Published 21 ಮೇ 2025, 14:33 IST
Last Updated 21 ಮೇ 2025, 14:33 IST
<div class="paragraphs"><p>ಗ್ರಾಮ ಪಂಚಾಯಿತಿಗಳಲ್ಲಿ ಕರ ಸಂಗ್ರಹಣೆಗಾಗಿ ಉಪಯೋಗಿಸುವ 101 ಪಿ.ಒ.ಎಸ್ ಯಂತ್ರವನ್ನು ಜಿಲ್ಲಾ ಉಸ್ತುವಾರಿ ಸಚಿವ ಎನ್‌.ಚಲುವರಾಯಸ್ವಾಮಿ ಅವರು&nbsp;ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಮಂಡ್ಯ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ವಿತರಿಸಿದರು</p></div>

ಗ್ರಾಮ ಪಂಚಾಯಿತಿಗಳಲ್ಲಿ ಕರ ಸಂಗ್ರಹಣೆಗಾಗಿ ಉಪಯೋಗಿಸುವ 101 ಪಿ.ಒ.ಎಸ್ ಯಂತ್ರವನ್ನು ಜಿಲ್ಲಾ ಉಸ್ತುವಾರಿ ಸಚಿವ ಎನ್‌.ಚಲುವರಾಯಸ್ವಾಮಿ ಅವರು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಮಂಡ್ಯ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ವಿತರಿಸಿದರು

   

ಮಂಡ್ಯ: ಪಿಡಿಒಗಳು, ಗ್ರಾಮ ಆಡಳಿತ ಅಧಿಕಾರಿಗಳು, ಕಂದಾಯ ನಿರೀಕ್ಷಕರು, ತಹಶೀಲ್ದಾರ್‌ಗಳು ಕೇಂದ್ರಸ್ಥಾನದಲ್ಲಿರಬೇಕು. ಮಳೆ ಹಾನಿ ಅವಘಡಗಳಾದರೆ ಕೂಡಲೇ ಜನರಿಗೆ ಸ್ಪಂದಿಸಬೇಕು. ತಮ್ಮ ಜವಾಬ್ದಾರಿಗಳನ್ನು ಪ್ರಾಮಾಣಿಕವಾಗಿ ನಿರ್ವಹಿಸಬೇಕು. ಈ ಬಗ್ಗೆ ಸುತ್ತೋಲೆ ಹೊರಡಿಸುವಂತೆ ಜಿಲ್ಲಾಧಿಕಾರಿಗೆ ಸಚಿವ ಎನ್‌.ಚಲುವರಾಯಸ್ವಾಮಿ ಅವರು ಸೂಚಿಸಿದರು. 

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಸವಲತ್ತುಗಳನ್ನು ಫಲಾನುಭವಿಗಳಿಗೆ ವಿತರಿಸಿ ಅವರು ಮಾತನಾಡಿದರು. 

ADVERTISEMENT

ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಯೋಜನೆಗಳ ಬಗ್ಗೆ ಸದರಿ ಸಾಲಿನಲ್ಲಿ ವಿಶೇಷ ನಿಗಾ ವಹಿಸಲಾಗುವುದು. ಪ್ರತಿ ವಾರ ಜಿಲ್ಲಾ‌ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಂದ ವರದಿ ಪಡೆಯಲಾಗುವುದು. ಅಧಿಕಾರಿಗಳು ಹಾಗೂ ಸಿಬ್ಬಂದಿ ನಿಗದಿಪಡಿಸಿರುವ ಗುರಿಯನ್ನು ಶೇ 100ರಷ್ಟು ಸಾಧನೆ ಮಾಡಲು ಕಾರ್ಯಪ್ರವೃತ್ತರಾಗಬೇಕು ಎಂದರು.

ಕೆಲವು ಪಿಡಿಒಗಳು ಕೇಂದ್ರಸ್ಥಾನದಲ್ಲಿರುವುದಿಲ್ಲ. ಕರ್ತವ್ಯ ನಿರ್ವಹಣೆಯಲ್ಲಿ ಉದಾಸೀನ ತೋರುತ್ತಾರೆ ಎಂಬ ದೂರುಗಳು ಕೇಳಿ ಬರುತ್ತಿವೆ. ಕೆಲಸದಲ್ಲಿ ಅದಕ್ಷತೆ, ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಹೆಚ್ಚುವರಿ ಪ್ರಭಾರ ಹುದ್ದೆಗಳಿದ್ದರೆ ಆದಷ್ಟೂ ಹತ್ತಿರದ ಗ್ರಾಮ ಪಂಚಾಯಿತಿಗಳಿಗೆ ಅವರನ್ನು ನಿಯೋಜಿಸಿ ಎಂದು ಸಿಇಒ ಅವರಿಗೆ ಸಚಿವರು ಸೂಚನೆ ನೀಡಿದರು. 

ನರೇಗಾ ಯೋಜನೆಯಡಿ ಜಿಲ್ಲೆಯು ಪ್ರಥಮ ಸ್ಥಾನ ಗಳಿಸಲು ಗ್ರಾಮ ಪಂಚಾಯಿತಿ ನೌಕರರು, ಸಿಬ್ಬಂದಿ ಕಾರ್ಯೋನ್ಮುಖರಾಗಬೇಕು. ಜಿಲ್ಲಾ ಪಂಚಾಯಿತಿ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಬೇಕು. ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಬೇಕು ಎಂದು ತಾಕೀತು ಮಾಡಿದರು. 

ಕಾರ್ಯಕ್ರಮದಲ್ಲಿ ಶಾಸಕ‌ ಪಿ.ರವಿ ಕುಮಾರ್, ಜಿಲ್ಲಾಧಿಕಾರಿ ಕುಮಾರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್. ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ರೂಪಶ್ರೀ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಲಕ್ಷ್ಮಿ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಪಾಲ್ಗೊಂಡಿದ್ದರು. 

ಮಂಡ್ಯ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ವಿವಿಧ ಇಲಾಖೆಗಳ ಸವಲತ್ತು ವಿತರಣಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಫಲಾನುಭವಿಗಳು ಮತ್ತು ಸಭಿಕರು 

ಸಚಿವರಿಂದ ವಿವಿಧ ಸವಲತ್ತು ವಿತರಣೆ

ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಜಿಲ್ಲಾ ಪಂಚಾಯಿತಿ ಆವರಣದಲ್ಲಿ ವಿವಿಧ ಇಲಾಖೆಗಳ ಸವಲತ್ತುಗಳನ್ನು ವಿತರಿಸಿದರು. ಜಿಲ್ಲಾ ಅಂಗವಿಕಲ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಅಂಗವಿಕಲರಿಗೆ ಯಂತ್ರ ಚಾಲಿತ ತ್ರಿಚಕ್ರ ವಾಹನ-13 ಬ್ಯಾಟರಿ ಚಾಲಿತ ವೀಲ್ ಚೇರ್- 11 ಶ್ರವಣ ಸಾಧನ- 15 ವೀಲ್ ಚೇರ್- 4 ಟ್ರೈಸೈಕಲ್-2 ಕ್ರಚಸ್೯-4 ಹಾಗೂ ವಾಕರ್- 2 ಒಟ್ಟು 50 ವಿಶೇಷ ಚೇತನರಿಗೆ ಸಾಧನ ಸಲಕರಣೆಗಳನ್ನು ವಿತರಿಸಿದರು.  ಕಟ್ಟಡ ಕಾರ್ಮಿಕರ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸೆ ನೀಡಲು ಮೂರು ಮೊಬೈಲ್ ಮೆಡಿಕಲ್ ಯುನಿಟ್ ವಾಹನಗಳು ಜಿಲ್ಲೆಗೆ ಮಂಜೂರಾಗಿದ್ದು ಸಚಿವರು ಚಾಲನೆ ನೀಡಿದರು. ಜಿಲ್ಲೆಯಲ್ಲಿ ಹೆಚ್ಚುವರಿಯಾಗಿ 255 ಗ್ರಾಮಗಳಲ್ಲಿ ಗ್ರಂಥಾಲಯವನ್ನು ಪ್ರಾರಂಭಿಸಿದ್ದು ಸಚಿವರು ಪ್ರತಿ ಗ್ರಂಥಾಲಯಕ್ಕೆ ₹2 ಲಕ್ಷ ವೆಚ್ಚದ ಪುಸ್ತಕಗಳನ್ನು ಸಾಂಕೇತಿವಾಗಿ ವಿತರಿಸಿದರು. ಗ್ರಾಮ ಪಂಚಾಯಿತಿಗಳಲ್ಲಿ ಕರ ಸಂಗ್ರಹಣೆಗಾಗಿ ಉಪಯೋಗಿಸುವ 101 ಪಿ.ಒ.ಎಸ್ ಯಂತ್ರವನ್ನು ಜಿಲ್ಲಾ ಪಂಚಾಯಿತಿ ವತಿಯಿಂದ ಖರೀದಿಸಿದ್ದು ಅವುಗಳನ್ನು ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಸಚಿವರು ವಿತರಿಸಿ ಬಿಲ್ ಕಲೆಕ್ಟರ್‌ಗಳು ಯಂತ್ರವನ್ನು ವ್ಯವಸ್ಥಿತವಾಗಿ ಉಪಯೋಗಿಸಬೇಕು ಎಂದರು.

ಮಾವು ಮೇಳ ಮೇ 26ರಿಂದ

ತೋಟಗಾರಿಕೆ ಇಲಾಖೆ ವತಿಯಿಂದ ತೋಟಗಾರಿಕೆ ಉಪನಿರ್ದೇಶಕರ ಕಚೇರಿ ಮುಂಭಾಗದಲ್ಲಿ ಮೇ 26ರಿಂದ 28ರವರೆಗೆ ಮಾವು ಮತ್ತು ಹಲಸು ಮೇಳ ಹಾಗೂ ಸಸ್ಯ ಸಂತೆ- 2025 ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಸಚಿವರು ಪೋಸ್ಟರ್ ಬಿಡುಗಡೆ ಮಾಡಿದರು. ‘ಈ ಮೇಳದಲ್ಲಿ ನೈಸರ್ಗಿಕವಾಗಿ ಮಾಗಿಸಿದ ಕಾರ್ಬೈಡ್ ಮುಕ್ತ ಮಾವು ಮತ್ತು ಹಲಸು ಮಾರಾಟ ಹಾಗೂ ರೈತರಿಂದ ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡಲಾಗುವುದು’ ಎಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ರೂಪಶ್ರೀ ತಿಳಿಸಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.