ಭಾರತೀನಗರ: ‘ಬಿಜೆಪಿಯವರಿಗೆ ಕಾಂಗ್ರೆಸ್ ಸರ್ಕಾರದ ಸಾಧನೆಯನ್ನು ಸಹಿಸಲಾರದೆ ಇಲ್ಲಸಲ್ಲದ ಹೇಳಿಕೆ ನೀಡುವ ಮೂಲಕ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಅವರಿಗೆ ಟೀಕೆ ಮಾಡುವುದನ್ನು ಬಿಟ್ಟು ಬೇರೇನೂ ಗೊತ್ತಿಲ್ಲ’ ಎಂದು ಶಾಸಕ ಕೆ.ಎಂ. ಉದಯ್ ಹೇಳಿದರು.
ಸಮೀಪದ ಯಲಾದಹಳ್ಳಿಯಲ್ಲಿ ₹95 ಲಕ್ಷ ವೆಚ್ಚದಲ್ಲಿ ರಸ್ತೆ ಡಾಂಬರೀಕರಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
‘ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ವಿಜಯೇಂದ್ರ ಅವರಿಗೆ ಕಾಂಗ್ರೆಸ್ ವಿರುದ್ಧ ಮಾತನಾಡುವ ನೈತಿಕತೆಯೇ ಇಲ್ಲ. ಅವರ ಕರ್ಮಕಾಂಡಗಳನ್ನು ಹೇಳಲು ಸಮಯವೇ ಸಾಲದು. ಹೀಗಿರುವಾಗ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳ, ಅಭಿವೃದ್ಧಿ ವಿಚಾರಗಳನ್ನು ಕುರಿತು ಟೀಕೆ ಮಾಡುತ್ತಲೇ ಇದ್ದಾರೆ. ಟೀಕೆ, ಟಿಪ್ಪಣಿ ಮಾಡುವುದನ್ನು ಬಿಟ್ಟು ರಾಜ್ಯಕ್ಕೆ ಬರಬೇಕಿರುವ ತೆರಿಗೆ ಪಾಲನ್ನು ಕೊಡಿಸುವ ಮೂಲಕ ರಾಜ್ಯ ಸರ್ಕಾರಕ್ಕೆ ಸಹಕಾರ ನೀಡಲಿ’ ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎ.ಎಸ್. ರಾಜೀವ್, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯರಾದ ದೇವೇಗೌಡ, ನಿಂಗೇಗೌಡ, ಮುಖಂಡರಾದ ಕೃಷ್ಣೇಗೌಡ, ನಾಡಗೌಡ, ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿದ್ದರಾಜು, ಬೋರೇಗೌಡ, ನಿಂಗೇಗೌಡ, ಕರಡಕೆರೆ ಮನು, ನಂಜುಂಡೇಗೌಡ, ದೇವರಾಜು, ರವಿ ಭಾಗವಹಿಸಿದ್ದರು.
ಎಸ್‌ಸಿಪಿ ಯೋಜನೆಯಡಿ ಕೊಕ್ಕರೆ ಬೆಳ್ಳೂರು ಪರಿಶಿಷ್ಟ ಜಾತಿ ಕಾಲೋನಿಗೆ ₹20 ಲಕ್ಷ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಸಿಸಿ ಚರಂಡಿ, ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.