
ಮಂಡ್ಯ: ‘ಬಸರಾಳು ವ್ಯಾಪ್ತಿಯ ಪ್ರದೇಶ ಇಂದಿಗೂ ನೀರಾವರಿ ಸೌಲಭ್ಯ ಪಡೆದಿಲ್ಲ. ಹೀಗಾಗಿ ಕಾವೇರಿ ನೀರನ್ನು ಬಸರಾಳು ಪ್ರದೇಶಕ್ಕೆ ತರಲು ₹1200 ಕೋಟಿಯ ಯೋಜನೆ ರೂಪಿಸಲಾಗಿದೆ. ಆರು ತಿಂಗಳೊಳಗೆ ಯೋಜನೆಯನ್ನು ಕಾರ್ಯರೂಪಕ್ಕೆ ತರಲಾಗುವುದು’ ಎಂದು ಮಂಡ್ಯ ಶಾಸಕ ಪಿ.ರವಿಕುಮಾರ್ ಹೇಳಿದರು.
ಹೊಸ ಬೂದನೂರು ಕಾಶಿ ವಿಶ್ವನಾಥಸ್ವಾಮಿ ದೇವಾಲಯದ ಹಿಂಭಾಗದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪ್ರವಾಸೋದ್ಯಮ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಭಾನುವಾರ ನಡೆದ ಬೂದನೂರು ಉತ್ಸವ -2026 ಸಮಾರೋಪ ಸಮಾರಂಭ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
6 ತಿಂಗಳೊಳಗೆ ಮಂಡ್ಯ ನಗರದ 4 ಸರ್ಕಲ್‌ಗಳನ್ನು ‘ವಿದೇಶಿ ಸರ್ಕಲ್’ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುವುದು. ಬೂದನೂರಿನಿಂದ ಇಂಡುವಾಳುವರೆಗೂ ‘ರಿಂಗ್ ರಸ್ತೆ’ ನಿರ್ಮಾಣ ಮಾಡಲು ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ₹350 ಕೋಟಿ ಯೋಜನೆ ರೂಪಿಸಲಾಗಿದೆ ಎಂದರು.
ನಾಲೆ ಅಭಿವೃದ್ಧಿಗೆ ಒತ್ತು: ಮುಂದಿನ ಐವತ್ತು ವರ್ಷಗಳ ಕಾಲ ಮಂಡ್ಯ ಜಿಲ್ಲೆಯ ಜನರಿಗೆ ನೀರಿನ ಸಮಸ್ಯೆ ಉಂಟಾಗದಂತೆ ₹250 ಕೋಟಿ ವೆಚ್ಚದಲ್ಲಿ ಮಂಡ್ಯ ನಾಲೆಗಳನ್ನು ಅಭಿವೃದ್ಧಿ ಪಡಿಸಲಾಗುವುದು ಎಂದು ಹೇಳಿದರು.
ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಮಾತನಾಡಿ, ‘ಯುವಜನರು ಬದುಕಿನಲ್ಲಿ ಸಾಧನೆ ಮಾಡಲು ಧೈರ್ಯ ಮತ್ತು ಏಕಾಗ್ರತೆ ಅಗತ್ಯ. ಸಾಮಾಜಿಕ ಜಾಲತಾಣಗಳಲ್ಲಿ ಟೀಕಿಸುವವರ ಕುರಿತು ಯೋಚನೆ ಮಾಡಬೇಡಿ. ರೈತರು ಸಾಲಕ್ಕೆ ಹೆದರಿ ಆತ್ಮಹತ್ಯೆ ಮೊರೆ ಹೋಗಬಾರದು’ ಎಂದರು.
ಐವತ್ತು ವರ್ಷಗಳಿಂದಲೂ ಬಾಕಿ ಇದ್ದ ಬೂದನೂರು ವಸತಿ ರಹಿತರಿಗೆ ಹಕ್ಕುತ್ರಗಳನ್ನು ವಿತರಿಸಲಾಯಿತು. ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ಭಾಗ್ಯಶ್ರೀಗೌಡ ಮತ್ತು ತಂಡದಿಂದ ಸಾಂಸ್ಕೃತಿಕ ಕಾರ್ಯಕ್ರಮ ಪ್ರಸ್ತುತಪಡಿಸಲಾಯಿತು. ಹಿನ್ನೆಲೆ ಗಾಯಕ ರಾಜೇಶ್ ಕೃಷ್ಣನ್ ಮತ್ತು ತಂಡದಿಂದ ರಸಮಂಜರಿ ಕಾರ್ಯಕ್ರಮ ಜನರನ್ನು ರಂಜಿಸಿತು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ, ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ್, ಎಚ್.ಡಿ. ಕೋಟೆ ಶಾಸಕ ಅನಿಲ್ ಚಿಕ್ಕಮಾದು, ಗುಂಡ್ಲುಪೇಟೆ ಶಾಸಕ ಗಣೇಶ್ ಪ್ರಸಾದ್, ನಂಜನಗೂಡು ಶಾಸಕ ದರ್ಶನ್ ಧ್ರುವನಾರಾಯಣ್, ರಾಜ್ಯ ಸಣ್ಣ ಕೈಗಾರಿಕೆಗಳ ಉಪಾಧ್ಯಕ್ಷೆ ವಿಜಯಲಕ್ಷ್ಮಿ ರಘುನಂದನ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ನಾಗೇಶ್, ಉದ್ಯಮಿ ರುದ್ರೇಗೌಡ, ಮೈಷುಗರ್ ಸಕ್ಕರೆ ಕಾರ್ಖಾನೆಯ ಮಾಜಿ ಅಧ್ಯಕ್ಷ ಶಿವಾನಂದ ಮುಂತಾದ ಗಣ್ಯರು, ಜಿಲ್ಲಾಧಿಕಾರಿ ಕುಮಾರ, ಸಿಇಒ ಕೆ.ಆರ್.ನಂದಿನಿ ಮತ್ತು ಅಧಿಕಾರಿಗಳು ಭಾಗವಹಿಸಿದ್ದರು.
‘ಹೊಸ ಕ್ರೀಡಾಂಗಣ ನಿರ್ಮಾಣ’
ಯುವ ಕ್ರೀಡಾಪಟುಗಳಿಗೆ ಉತ್ತೇಜನ ನೀಡಲು ₹6 ಕೋಟಿ ವೆಚ್ಚದಲ್ಲಿ ಹೊಸ ಕ್ರೀಡಾಂಗಣ ನಿರ್ಮಾಣ ಮಾಡಲು ಅನುದಾನ ಬಿಡುಗಡೆ ಮಾಡಲಾಗಿದೆ. ಅಂತರರಾಷ್ಟ್ರೀಯ ಕ್ರೀಡಾಕೂಟಗಳನ್ನು ಆಯೋಜನೆ ಮಾಡಲು ಸುಸಜ್ಜಿತ ಕ್ರೀಡಾಂಗಣವನ್ನು ಆರು ತಿಂಗಳ ಒಳಗಾಗಿ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದರು. ಮಂಡ್ಯ ನಗರದ ಸಂಜಯ ವೃತ್ತದಲ್ಲಿ ನಾಡಪ್ರಭು ಕೆಂಪೇಗೌಡ ಅವರ ಪ್ರತಿಮೆ ನಿರ್ಮಾಣ ಮಾಡಲು ಶೀಘ್ರವಾಗಿ ಶಿಲಾವಿನ್ಯಾಸ ನೆರವೇರಿಸಲಾಗುವುದು. ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯದ ಮಾದರಿಯಲ್ಲಿ ಕೆರಗೋಡಿನ ಪಂಚಲಿಂಗೇಶ್ವರ ದೇವಸ್ಥಾನವನ್ನು ಅಭಿವೃದ್ಧಿ ಪಡಿಸಲಾಗುವುದು ಎಂದು ಮಾಹಿತಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.