
ನಾಗಮಂಗಲ: ತಾಲ್ಲೂಕಿನ ಪುರಾಣ ಪ್ರಸಿದ್ಧ ಆದಿಚುಂಚನಗಿರಿ ಕ್ಷೇತ್ರದ ಜಾತ್ರಾ ಮಹೋತ್ಸವದ ಮೂರನೇ ದಿನ ಮಲ್ಲೇಶ್ವರಸ್ವಾಮಿ ರಥೋತ್ಸವ ಅತ್ಯಂತ ಶ್ರದ್ಧಾ ಭಕ್ತಿಯಿಂದ ಗುರುವಾರ ರಾತ್ರಿ ಜರುಗಿತು.
ರಥೋತ್ಸವದ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರ ಆದಿಚುಂಚನಗಿರಿಯಲ್ಲಿ ಮುಂಜಾನೆಯ ಶುಭ ಬ್ರಾಹ್ಮೀ ಮುಹೂರ್ತದಲ್ಲಿ ಕ್ಷೇತ್ರಾದಿ ದೇವರುಗಳಾದ ಕಾಲಭೈರವೇಶ್ವರ ಹಾಗೂ ಗಂಗಾಧರೇಶ್ವರ ಸ್ವಾಮಿಗೆ ವಿಶೇಷ ಪೂಜಾ ಕೈಂಕರ್ಯಗಳೂ ಸೇರಿದಂತೆ ಹಲವು ಧಾರ್ಮಿಕ ಮತ್ತು ಆಧ್ಯಾತ್ಮಿಕ ಕಾರ್ಯಕ್ರಮಗಳು ಜರುಗಿದವು.
ರಾತ್ರಿ ಸರ್ವಾಲಂಕೃತಗೊಂಡ ಮಲ್ಲೇಶ್ವರ ಸ್ವಾಮಿಯ ರಥೋತ್ಸವಕ್ಕೆ ನಿರ್ಮಲಾನಂದನಾಥ ಸ್ವಾಮೀಜಿ ಪೂಜೆ ಸಲ್ಲಿಸಿ ಚಾಲನೆ ನೀಡಿದರು. ಅಪಾರ ಆಸ್ತಿಕ ಸಮೂಹದೊಂದಿಗೆ ರಥ ಬೀದಿಯಲ್ಲಿ ಮಲ್ಲೇಶ್ವರ ಸ್ವಾಮಿಯ ರಥೋತ್ಸವ ಅತ್ಯಂತ ಶ್ರದ್ಧಾ ಭಕ್ತಿಗಳೊಂದಿಗೆ ಸಾಗಿ ಭಕ್ತರ ಕಣ್ಮನ ಸೆಳೆಯಿತು.
ರಥೋತ್ಸವಕ್ಕೆ ಮಠದ ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ, ಚೈತನ್ಯನಾಥ ಸ್ವಾಮೀಜಿ ಸೇರಿದಂತೆ ವಿವಿಧ ಶಾಖಾ ಮಠಗಳ ಸ್ವಾಮೀಜಿ ಗಳು ಅಪಾರ ಭಕ್ತ ಸಮೂಹ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.