
ಮಂಡ್ಯ: ‘ಹೆಣ್ಣು– ಗಂಡು ಎನ್ನುವ ಭೇದ ಭಾವ ಮಾಡದೆ ಸಮಾಜದಲ್ಲಿ ಎಲ್ಲರೂ ಕೂಡ ಒಂದೇ ಎನ್ನುವ ಭಾವನೆಯನ್ನು ಬೆಳೆಸಿಕೊಳ್ಳಬೇಕು. ಆಗ ಮಾತ್ರ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮಕ್ಕೆ ಅರ್ಥ ಬರುತ್ತದೆ’ ಎಂದು ಮಂಡ್ಯ ಜಿಲ್ಲಾ ಪಂಚಾಯಿತಿ ಸಿಇಒ ಕೆ.ಆರ್.ನಂದಿನಿ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಂಡ್ಯ, ಜಿಲ್ಲಾ ಮಹಿಳಾ ಸಬಲೀಕರಣ ಘಟಕ, ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಸಂಯುಕ್ತ ಆಶ್ರಯದಲ್ಲಿ ‘ಬೇಟಿ ಬಚಾವೋ ಬೇಟಿ ಪಡಾವೋ’ ಯೋಜನೆಯಡಿ ಶನಿವಾರ ನಡೆದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಹೆಣ್ಣು ಮಕ್ಕಳ ಶಿಕ್ಷಣ, ಕೌಶಲ ಅಭಿವೃದ್ಧಿ, ಆರೋಗ್ಯ ರಕ್ಷಣೆ ಮತ್ತು ಸುರಕ್ಷತೆಗೆ ಆದ್ಯತೆ ನೀಡಬೇಕು. ‘ಹೆಣ್ಣು ಮಗುವಿನ ಘನತೆ, ಅವಕಾಶ ಮತ್ತು ಭರವಸೆಯ ಜೀವನ ನಡೆಸುವಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಬಾಲ್ಯವಿವಾಹ, ಹೆಣ್ಣು ಭ್ರೂಣ ಹತ್ಯೆ ಮತ್ತು ಲಿಂಗ ಅಸಮಾನತೆಯಂತಹ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸಲು ಈ ದಿನವನ್ನು ಆಚರಿಸಲಾಗುತ್ತದೆ ಎಂದರು.
ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯ ವೆಂಕಟೇಶ್ ಮಾತನಾಡಿ, ‘ಮಕ್ಕಳು ದೇಶದ ದೊಡ್ಡ ಸಂಪತ್ತು. ಹೆಣ್ಣು ಮಕ್ಕಳ ರಕ್ಷಣೆ ಬಹಳ ಮುಖ್ಯ. 2026ರ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯು ಇತ್ತೀಚಿನ ವರ್ಷಗಳಲ್ಲಿ ಹೆಣ್ಣು ಮಕ್ಕಳ ಶಿಕ್ಷಣ, ಆರೋಗ್ಯ, ಲಿಂಗ ಸಮಾನತೆ ಮತ್ತು ಸಬಲೀಕರಣದ ಮೇಲೆ ಕೇಂದ್ರೀಕರಿಸಲಾಗಿದೆ. 2026ನೇ ಸಾಲಿನಲ್ಲಿ ‘ಉಜ್ವಲ ಭವಿಷ್ಯಕ್ಕಾಗಿ ಹೆಣ್ಣುಮಕ್ಕಳನ್ನು ಸಬಲೀಕರಣಗೊಳಿಸುವುದು’ ಎಂಬ ಆಶಯ ಹೊಂದಲಾಗಿದೆ’ ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಆಶಾ ಮಾತನಾಡಿದರು. ಪ್ರಾಂಶುಪಾಲ ಬಸವಗೌಡ, ಬಿಇಒ ಮಹದೇವ್, ಮಹಿಳಾ ಸಬಲೀಕರಣ ಘಟಕದ ಸಿಬ್ಬಂದಿ, ಕಾಲೇಜು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.