
ಮಂಡ್ಯ: ‘ಇಲ್ಲಿನ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿಗಾಗಿ ಯಾವುದೇ ಪಕ್ಷ ಭೇದ ಮಾಡುತ್ತಿಲ್ಲ. ಒಟ್ಟಿನಲ್ಲಿ ಮನೆ ಬಾಗಿಲಿಗೆ ಸರ್ಕಾರಿ ಸೇವೆ ಒದಗಿಸುವುದು ನಮ್ಮ ಆದ್ಯತೆಯಾಗಿದೆ’ ಎಂದು ಶಾಸಕ ಪಿ.ರವಿಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.
ತಾಲ್ಲೂಕಿನ ಆಲಕೆರೆ ಗ್ರಾಮದಲ್ಲಿ ಮಂಗಳವಾರ ನಡೆದ ‘ಜನತಾ ದರ್ಶನ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಒಟ್ಟು 53 ಇಲಾಖೆಗಳ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಇಲ್ಲಿ ದೂರು ಸಲ್ಲಿಸಬಹುದಾಗಿದೆ. ಸ್ವತಃ ಅರ್ಜಿ ಸ್ವೀಕರಿಸಿ ಸಮಸ್ಯೆಗಳನ್ನು ಸರಿಪಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಅಭಿವೃದ್ಧಿ ಕೆಲಸವೇ ನಮ್ಮ ಗುರಿಯಾಗಿದ್ದು ಅಪಪ್ರಚಾರಕ್ಕೆ ಕಿವಿಗೊಡಬಾರದು ಎಂದು ಮನವಿ ಮಾಡಿದರು.
ಈಗಾಗಲೇ ಕೆಲವು ಗ್ರಾಮಗಳಲ್ಲಿ ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಸೇರಿದಂತೆ ಹಲವು ಜನಪ್ರಿಯ ಕಾರ್ಯಕ್ರಮಗಳನ್ನು ಮಾಡಿಕೊಂಡು ಬರಲಾಗುತ್ತಿದೆ. ಇತಿಹಾಸದಲ್ಲಿ ₹35 ಕೋಟಿ ಹಣವನ್ನು ಆಲಕೆರೆ ಗ್ರಾ.ಪಂ. ವ್ಯಾಪ್ತಿಗೆ ಕೊಡಲಾಗಿದೆ. ನಾಲೆ, ರಸ್ತೆ ಅಭಿವೃದ್ಧಿ, ಗ್ರಾಮಾಭಿವೃದ್ದಿ ಸೇರಿ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ ಎಂದರು.
ಶಾಸಕರಿಗೆ ಅದ್ದೂರಿ ಸ್ವಾಗತ: ಗ್ರಾಮಕ್ಕೆ ಆಗಮಿಸಿದ ಶಾಸಕ ಪಿ.ರವಿಕುಮಾರ್ ಅವರಿಗೆ ಪೂರ್ಣಕುಂಭದೊಂದಿಗೆ ಸ್ವಾಗತಿಸಿದ ಗ್ರಾಮಸ್ಥರು, ಪಟಾಕಿ ಸಿಡಿಸಿ ನಂತರ ಜನತಾ ದರ್ಶನದ ವೇದಿಕೆವರೆಗೂ ಮೆರವಣಿಗೆಯಲ್ಲಿ ಕರೆತಂದರು. ಆಯಾ ಇಲಾಖೆಗಳಿಗೆ ಸಂಬಂಧಿಸಿದಂತೆ ಕೌಂಟರ್ ತೆರೆದು ಅರ್ಜಿ ಸ್ವೀಕಾರ ಮಾಡಲಾಯಿತು. ಕೆಲವು ಅರ್ಜಿಗಳನ್ನು ಸ್ಥಳದಲ್ಲಿಯೇ ಬಗೆಹರಿಸಿಕೊಡಲಾಯಿತು.
ಕಾರ್ಯಕ್ರಮದಲ್ಲಿ ಉಪವಿಭಾಗಾಧಿಕಾರಿ ಶಿವಮೂರ್ತಿ, ತಹಶೀಲ್ದಾರ್ ವಿಶ್ವನಾಥ್ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.