ಪಾಂಡವಪುರ: ಪಟ್ಟಣದ ಉಪ ವಿಭಾಗೀಯ ಸಾರ್ವಜನಿಕ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವ ಜತೆಗೆ ತಾಯಿ ಮತ್ತು ಮಕ್ಕಳ ಆಸ್ಪತ್ರೆ ತೆರೆಯಲು ಕ್ರಮ ಕೈಗೊಳ್ಳಬೇಕು ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಸರ್ಕಾರವನ್ನು ಒತ್ತಾಯಿಸಿದರು.
ಈಚೆಗೆ ವಿಧಾನಸಭೆ ಅಧಿವೇಶನದಲ್ಲಿ ಚುಕ್ಕೆ ಗುರುತಿನ ಪ್ರಶ್ನೆಯಡಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರ ನೀಡಿದ ಲಿಖಿತ ಉತ್ತರದ ಮೇಲೆ ಮಾತನಾಡಿದರು.
‘ಪಾಂಡವಪುರ ಉಪ ವಿಭಾಗೀಯ ಆಸ್ಪತ್ರೆಗೆ ಹೊರ ಮತ್ತು ಒಳ ರೋಗಿಗಳ ಸಂಖ್ಯೆ ಹೆಚ್ಚಾಗಿದ್ದು, ಶೇ 50ಕ್ಕಿಂತಲೂ ಹೆಚ್ಚು ರೋಗಿಗಳನ್ನು ಮಂಡ್ಯ ಮಿಮ್ಸ್ ಮತ್ತು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ಶಿಫಾರಸು ಮಾಡಲಾಗುತ್ತಿದೆ. ಇದಕ್ಕೆ ಆಸ್ಪತ್ರೆಯ ಸಾಮರ್ಥ್ಯ ಅಥವಾ ವೈದ್ಯರ ಕೊರತೆ ಸೇರಿದಂತೆ ಇತರೆ ಕಾರಣಗಳಿರಬಹುದು. ಆಸ್ಪತ್ರೆಗೆ ಬರುವ ಪ್ರತಿ ರೋಗಿಗಳಿಗೂ ವೈದ್ಯಕೀಯ ಸೇವೆ ದೊರೆಯುವಂತಾಗಬೇಕು ಎಂಬು ನಮ್ಮ ಆಶಯ. ಈಗಿರುವ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲು ಸ್ಥಳದ ಕೊರತೆ ಇದೆ. ಹೀಗಾಗಿ ಹೊಸ ಆಸ್ಪತ್ರೆ ನಿರ್ಮಾಣದ ಜತೆಗೆ ಈಗಿರುವ ಆಸ್ಪತ್ರೆಯನ್ನು ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನಾಗಿ ಮಾರ್ಪಡಿಸಬೇಕು’ ಎಂದು ಒತ್ತಾಯಿಸಿದರು.
ಸರ್ಕಾರದ ನಿರ್ದೇಶನದಂತೆ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಮಾಸಿಕ 160 ಮಕ್ಕಳ ಹೆರಿಗೆ ಆಗಬೇಕು ಎಂಬ ನಿಯಮವಿದೆ. ಆದರೆ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಮಾಸಿಕವಾಗಿ 80 ಹೆರಿಗೆ ಮಾಡಲಾಗುತ್ತಿದೆ. ತಾಲ್ಲೂಕಿನಲ್ಲಿ ಮಾಸಿಕ 250ಕ್ಕೂ ಹೆಚ್ಚು ಮಕ್ಕಳ ಜನನವಾಗುತ್ತಿದೆ. ತಾಯಿ ಮತ್ತು ಮಕ್ಕಳ ಆಸ್ಪತ್ರೆ ನಿರ್ಮಾಣಕ್ಕೆ ಕ್ರಮವಹಿಸಬೇಕು ಎಂದು ಮನವಿ ಮಾಡಿದರು.
ಇದಕ್ಕೆ ಉತ್ತರಿಸಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ‘ಸದ್ಯಕ್ಕೆ ಪ್ರಸೂತಿ ಮತ್ತು ಅರವಳಿಕೆ ತಜ್ಞರನ್ನು ನೇಮಕ ಮಾಡಲಾಗುವುದು. ನಂತರ ಆಸ್ಪತ್ರೆ ನಿರ್ಮಾಣ ಸಂಬಂಧ ಕ್ರಮ ಕೈಗೊಳ್ಳಲಾಗುವುದು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.