ADVERTISEMENT

ಮಂಡ್ಯ: ವೇತನ ಜಮಾ ಮಾಡಲು ಆಗ್ರಹ

ಗ್ರಾಮ ಪಂಚಾಯಿತಿ ನೌಕರರ ಸಂಘದ ಜಿಲ್ಲಾ ಘಟಕದ ಸದಸ್ಯರ ಪ್ರತಿಭಟನೆ; ಒತ್ತಾಯ

​ಪ್ರಜಾವಾಣಿ ವಾರ್ತೆ
Published 16 ಜುಲೈ 2021, 3:12 IST
Last Updated 16 ಜುಲೈ 2021, 3:12 IST
ಗ್ರಾ.ಪಂ ನೌಕರರ ಸಂಘ (ಸಿಐಟಿಯು ಸಂಯೋಜಿತ) ಜಿಲ್ಲಾ ಘಟಕದ ಸದಸ್ಯರು ಗುರುವಾರ ಮಂಡ್ಯದ ಜಿಲ್ಲಾ ಪಂಚಾಯಿತಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು
ಗ್ರಾ.ಪಂ ನೌಕರರ ಸಂಘ (ಸಿಐಟಿಯು ಸಂಯೋಜಿತ) ಜಿಲ್ಲಾ ಘಟಕದ ಸದಸ್ಯರು ಗುರುವಾರ ಮಂಡ್ಯದ ಜಿಲ್ಲಾ ಪಂಚಾಯಿತಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು   

ಮಂಡ್ಯ: ವಾಟರ್‌ಮನ್‌, ಸ್ವೀ‍ಪರ್‌ಗಳಿಗೆ ಕೂಡಲೇ 20 ತಿಂಗಳ ವೇತನ ಜಮಾ ಮಾಡಬೇಕು ಎಂದು ಒತ್ತಾಯಿಸಿ ಗ್ರಾಮ ಪಂಚಾಯಿತಿ ನೌಕರರ ಸಂಘ (ಸಿಐಟಿಯು ಸಂಯೋಜಿತ) ಜಿಲ್ಲಾ ಘಟಕದ ಸದಸ್ಯರು ಗುರುವಾರ ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಗ್ರಾಮ ಪಂಚಾಯಿತಿ ಬಿಲ್‌ ಕಲೆಕ್ಟರ್‌/ ಗುಮಾಸ್ತ ಹುದ್ದೆಯಿಂದ ಗ್ರೇಡ್‌–2 ಕಾರ್ಯದರ್ಶಿ/ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ಹುದ್ದೆಗೆ ಆಯ್ಕೆ ಮೂಲಕ ನೇರ ನೇಮಕಾತಿಯ ಸರ್ಕಾರದ ಆದೇಶವನ್ನು ಹಿಂಪಡೆಯಬೇಕು. ಇಲ್ಲದೆ ಇದ್ದರೆ 20–25 ವರ್ಷಗಳಿಂದ ಸೇವೆ ಮಾಡಿ ನಿವೃತ್ತಿಯ ಅಂಚಿನಲ್ಲಿರುವ ಸಾವಿರಾರು ನೌಕರರಿಗೆ ತೀವ್ರ ಅನ್ಯಾಯವಾಗಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

15ನೇ ಹಣಕಾಸಿನಲ್ಲಿ ವಾಟರ್‌ ಮ್ಯಾನ್‌/ ಸ್ವೀಪರ್‌ಗಳಿಗೆ ವೇತನ ಪಾವತಿಸುವಂತೆ ಸರ್ಕಾರ ಆದೇಶ ಮಾಡಿದ್ದರೂ ಗ್ರಾಮ ಪಂಚಾಯಿತಿಗಳಲ್ಲಿ ವೇತನ ಪಾವತಿಯಾಗುತ್ತಿಲ್ಲ. 18–20 ತಿಂಗಳ ವೇತನ ಬಾಕಿ ಇದ್ದು, ಕೂಡಲೇ ಸಿಬ್ಬಂದಿ ಖಾತೆಗೆ ಜಮಾ ಮಾಡಬೇಕು ಎಂದು ಆಗ್ರಹಿಸಿದರು.

ADVERTISEMENT

25–30ವರ್ಷ ಸೇವೆ ಸಲ್ಲಿಸಿದ್ದರೂ ಯಾವುದೇ ಸೇವಾ ನಿಯಮಾವಳಿಗಳಿಲ್ಲ. ಅನಾರೋಗ್ಯಕ್ಕೆ ತುತ್ತಾದರೆ, ಅಕಾಲಿಕ ಮರಣವಾದರೆ ಯಾವುದೇ ಸವಲತ್ತುಗಳಿರುವುದಿಲ್ಲ. ಆದೇಶಗಳಿದ್ದರೂ ಪಂಚಾಯಿತಿ ಅಧಿಕಾರಿಗಳು ಅದನ್ನು ಜಾರಿ ಮಾಡುತ್ತಿಲ್ಲ. ನಿವೃತ್ತಿಯಾದರೆ ಬರಿಗೈನಲ್ಲಿ ಕಳುಹಿಸಲಾಗುತ್ತಿದೆ. ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ತರುವಾಗ ಗ್ರಾಮಪಂಚಾಯಿತಿ ಎಲ್ಲ ಸಿಬ್ಬಂದಿಯನ್ನು ಒಳಪಡಿಸಬೇಕು. ಗ್ರಾಮ ಪಂಚಾಯಿತಿಯಲ್ಲಿ ಅಕ್ಟೋಬರ್‌ 2017ರವರೆಗೆ ಕೆಲಸ ಮಾಡುತ್ತಿದ್ದ ಎಲ್ಲ ಸಿಬ್ಬಂದಿಯನ್ನು ಇಎಫ್‌ಎಂಎಸ್‌ಗೆ ಒಳಪಡಿಸಬೇಕು ಎಂಬ ಆದೇಶವಿದ್ದರೂ ಇನ್ನೂ ಸಾವಿರಾರು ಸಿಬ್ಬಂದಿಯನ್ನು ಸೇರಿಸಿಲ್ಲ. ಕೂಡಲೇ ಸಿಬ್ಬಂದಿಯನ್ನು ಇಎಫ್‌ಎಂಎಸ್‌ಗೆ ಸೇರಿಸಬೇಕು ಎಂದು ಆಗ್ರಹಿಸಿದರು.

ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ನಾಗರಾಜು, ಕಾರ್ಯದರ್ಶಿ ಎಂ.ಎಂ.ಶಿವಕುಮಾರ್‌, ಸಿಐಟಿಯು ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಸಿ. ಕುಮಾರಿ, ಜಿ.ಆರ್.ರಾಮು, ರಮೇಶ್, ಮಂಜು, ಸಿದ್ದರಾಮು, ನಾಗೇಶ್, ಬಸವರಾಜು ಪಾಲ್ಗೊಂಡಿದ್ದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.