ಮಂಡ್ಯ: ಪ್ಲಾಸ್ಟಿಕ್ ವಸ್ತುಗಳು ಪರಿಸರಕ್ಕೆ ಹಾನಿಕಾರಕವಾಗಿದ್ದು, ಸಾಧ್ಯವಾದಷ್ಟು ಇದರ ಬಳಕೆ ಮಾಡುವುದನ್ನು ನಿಲ್ಲಿಸುವ ಮೂಲಕ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಜಿಲ್ಲಾ ಪರಿಸರ ಅಧಿಕಾರಿ ಬಿ.ಪಿ. ಗೀತಾ ಮನವಿ ಮಾಡಿದರು.
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಪರಿಸರ ರೂರಲ್ ಡೆವಲಪ್‌ಮೆಂಟ್ ಸೊಸೈಟಿ ಸಹಯೋಗದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರಿನ ಕಾವೇರಿ ವನದಲ್ಲಿ ಬುಧವಾರ ನಡೆದ ಚಿತ್ರಕಲಾ ಸ್ಪರ್ಧೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
‘ಪ್ಲಾಸ್ಟಿಕ್ ಮಾಲಿನ್ಯ ತಡೆಗಟ್ಟುವ ಸಂಕಲ್ಪದಿಂದ ವಿಶ್ವ ಸಂಸ್ಥೆಯ ‘ಪ್ಲಾಸ್ಟಿಕ್ ಮಾಲಿನ್ಯ ತಡೆಗಟ್ಟಿ’ ಎಂಬ ಘೋಷವಾಕ್ಯದಡಿಯಲ್ಲಿ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆ ಆಯೋಜನೆ ಮಾಡಲಾಗಿದೆ. ಪರಿಸರಕ್ಕೆ ಪೂರಕ ವಾಗಿರುವ ವಸ್ತುಗಳು ಹಾಗೂ ಜಲಮೂಲಗಳ ಸಂರಕ್ಷಣೆಗೆ ಮೊದಲ ಆದ್ಯತೆ ನೀಡಬೇಕು’ ಎಂದು ಸಲಹೆ ನೀಡಿದರು.
ಪರಿಸರ ರೂರಲ್ ಡೆವಲಪ್‌ಮೆಂಟ್ ಸೊಸೈಟಿ ಅಧ್ಯಕ್ಷ ಮಂಗಲ ಎಂ.ಯೋಗೀಶ್ ಮಾತನಾಡಿದರು. ವಿದ್ಯಾರ್ಥಿಗಳಿಗೆ ಪ್ಲಾಸ್ಟಿಕ್ ಮಾಲಿನ್ಯ ತಡೆಗಟ್ಟುವ ಕುರಿತು ಚಿಕ್ಕಮಂಡ್ಯ ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ದೇವರಾಜು ಪ್ರತಿಜ್ಞಾವಿಧಿ ಭೋದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.