
ಮಂಡ್ಯ: ‘ಬಾಲ್ಯ ವಿವಾಹದಿಂದ ಆಗುವ ಅಪರಾಧದ ಬಗ್ಗೆ ಜನರಿಗೆ ಹೆಚ್ಚು ಅರಿವು ಮೂಡಿಸಿ, ಪೋಕ್ಸೊ ಕಾಯ್ದೆಯನ್ನು ತಿಳಿಸಬೇಕು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿ.ಜೆ. ಶೋಭಾರಾಣಿ ಸಲಹೆ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಕ್ಕಳ ರಕ್ಷಣಾ ನಿರ್ದೇಶನಾಲಯ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಬಾಲ್ಯ ವಿವಾಹ ಮುಕ್ತ ಭಾರತ ಅಭಿಯಾನ ಅಂಗವಾಗಿ ಮಂಗಳವಾರ ಆಯೋಜಿಸಿದ್ದ ಬಾಲ್ಯವಿವಾಹ, ಪೋಕ್ಸೊ ಕಾಯ್ದೆ, ದತ್ತು ಪ್ರಕ್ರಿಯೆ ಕುರಿತ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಬಾಲ್ಯವಿವಾಹ ಕುರಿತಂತೆ ಅದನ್ನು ತಡೆಗಟ್ಟುವ ಬಗ್ಗೆ ಎಷ್ಟೇ ತರಬೇತಿ ಕಾರ್ಯಾಗಾರಗಳನ್ನು ನಡೆಸಿದರೂ ಅದು ಸಾಲುವುದಿಲ್ಲ. ಜನರಿಗೆ ತಿಳಿವಳಿಕೆಯನ್ನು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ತಿಳಿಸುತ್ತಿರಬೇಕು. ಆಗ ಮಾತ್ರ ಬಾಲ್ಯವಿವಾಹ ತಡೆಗಟ್ಟಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯ ಪಟ್ಟರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ಆನಂದ್ ಮಾತನಾಡಿ, ‘ಬಾಲ್ಯವಿವಾಹ ನಡೆದ ಮೇಲೆ ಪ್ರಕರಣ ದಾಖಲಿಸುವುದಕ್ಕಿಂತ, ನಡೆಯದಂತೆ ನೋಡಿಕೊಳ್ಳುವುದು ಅಧಿಕಾರಿಗಳ ಜವಾಬ್ದಾರಿ. ವಿವಿಧ ಇಲಾಖೆಗಳ ಅಧಿಕಾರಿಗಳು ಸಮನ್ವಯ ಸಾಧಿಸಿ, ಕೆಲಸ ಮಾಡಿದರೆ ಇಂಥ ಅಪರಾಧ ಕೃತ್ಯಗಳನ್ನು ತಡೆಯಬಹುದು’ ಎಂದರು.
ಹೆಚ್ಚುವರಿ ಎಸ್ಪಿಗಳಾದ ಸಿ.ಇ. ತಿಮ್ಮಯ್ಯ, ಎಸ್.ಇ. ಗಂಗಾಧರಸ್ವಾಮಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಎಸ್.ರಶ್ಮಿ, ಸಂಪನ್ಮೂಲ ವ್ಯಕ್ತಿ ರೋಹಿತ್ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.