ADVERTISEMENT

ರೈತ ಸಂಪರ್ಕ ಕೇಂದ್ರ ಬಲಿಷ್ಠಗೊಳಿಸಲು ಆದ್ಯತೆ: ಸಚಿವ

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2025, 14:27 IST
Last Updated 21 ಫೆಬ್ರುವರಿ 2025, 14:27 IST
ನಾಗಮಂಗಲ ತಾಲ್ಲೂಕಿನ ಚಿಣ್ಯ ಗ್ರಾಮದಲ್ಲಿ ₹2 ಕೋಟಿ ವೆಚ್ಚದಲ್ಲಿ ನೂತನ ರೈತ ಸಂಪರ್ಕ ಕೇಂದ್ರದ ನಿರ್ಮಾಣ ಕಾಮಗಾರಿಗೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಚಾಲನೆ ನೀಡಿದರು
ನಾಗಮಂಗಲ ತಾಲ್ಲೂಕಿನ ಚಿಣ್ಯ ಗ್ರಾಮದಲ್ಲಿ ₹2 ಕೋಟಿ ವೆಚ್ಚದಲ್ಲಿ ನೂತನ ರೈತ ಸಂಪರ್ಕ ಕೇಂದ್ರದ ನಿರ್ಮಾಣ ಕಾಮಗಾರಿಗೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಚಾಲನೆ ನೀಡಿದರು   

ನಾಗಮಂಗಲ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೇರಿದ ನಂತರ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ಎಲ್ಲಾ ಮಾಹಿತಿ ಮತ್ತು ಅಗತ್ಯ ಸೌಲಭ್ಯಗಳು ಒಂದೆಡೆಯಲ್ಲಿ ರೈತರಿಗೆ ಒದಗಿಸುವ ಉದ್ದೇಶದಿಂದ ರೈತ ಸಂಪರ್ಕ ಕೇಂದ್ರಗಳನ್ನು ಬಲಿಷ್ಠಗೊಳಿಸುವುದು ನಮ್ಮ ಸರ್ಕಾರದ ಆದ್ಯತೆಯಾಗಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.

ತಾಲ್ಲೂಕಿನ ಹೊಣಕೆರೆ ಹೋಬಳಿಯ ಚಿಣ್ಯ ಗ್ರಾಮದಲ್ಲಿ ಈಚೆಗೆ ₹2 ಕೋಟಿ ವೆಚ್ಚದ ರೈತ ಸಂಪರ್ಕ ಕೇಂದ್ರದ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.

‘ರೈತ ಸಂಪರ್ಕ ಕೇಂದ್ರಗಳ ಮೂಲಕ ರೈತರಿಗೆ ಬೆಳೆ ಪದ್ಧತಿ, ಅಧಿಕ ಇಳುವರಿ ತೆಗೆಯುವ ವಿಧಾನ ಮತ್ತು ಮಣ್ಣಿನ ಫಲವತ್ತತೆ ಸೇರಿದಂತೆ ಹಲವು ವಿಚಾರಗಳ ಕುರಿತು ರೈತರು ಮಾಹಿತಿ ಪಡೆದುಕೊಳ್ಳಬಹುದು. ರೈತರ ಹಿತವನ್ನು ಕಾಪಾಡುವುದು ರಾಜ್ಯ ಸರ್ಕಾರದ ಮೊದಲ ಅದ್ಯತೆ. ನಾನು ಕೃಷಿ ಸಚಿವನಾಗಿ ಅಧಿಕಾರ ಸ್ವೀಕರಿಸಿದ ನಂತರ ಜಿಲ್ಲೆಯಲ್ಲಿ 15 ರೈತ ಸಂಪರ್ಕ ಕೇಂದ್ರಗಳ ಕಟ್ಟಡ ನಿರ್ಮಾಣಕ್ಕೆ ಮಂಜೂರು ಮಾಡಿಸಿದ್ದೇನೆ. ಅಲ್ಲದೇ ಕೃಷಿ ಇಲಾಖೆಯ ಮೂಲಕ ರೈತರಿಗೆ ಸಬ್ಸಿಡಿ ದರದಲ್ಲಿ ಸಿಗುವ ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕಗಳು ಸೇರಿದಂತೆ ಯಂತ್ರೋಪಕರಣಗಳನ್ನು ಹೋಬಳಿ ಕೇಂದ್ರಗಳ ರೈತ ಸಂಪರ್ಕ ಕೇಂದ್ರಗಳಲ್ಲಿಯೇ ಸಿಗುತ್ತವೆ. ರೈತರು ಮಳೆ ಪ್ರಮಾಣವನ್ನು ಆಧರಿಸಿ ಕಡಿಮೆ ಮತ್ತು ದೀರ್ಘ ಅವಧಿಯಲ್ಲಿ ಬೆಳೆಯಬಹುದಾದ ಬೆಳೆಗಳ ಕುರಿತು ತಿಳಿದುಕೊಳ್ಳಬೇಕು. ಕೃಷಿಯನ್ನು ಲಾಭದಾಯಕವಾಗಿ ಮಾಡಲು ರೈತ ಸಂಪರ್ಕ ಕೇಂದ್ರಗಳು ಮಾರ್ಗದರ್ಶನ ನೀಡುವ ಕೆಲಸವನ್ನು ಮಾಡುತ್ತವೆ’ ಎಂದರು.

ADVERTISEMENT

ಕೃಷಿ ಇಲಾಖೆ ಜಂಟಿ ನಿರ್ದೇಶಕ ಅಶೋಕ್ ಕುಮಾರ್, ಪಾಂಡವಪುರ ಉಪ ವಿಭಾಗದ ಉಪ ಕೃಷಿ ನಿರ್ದೇಶಕ ಭಾನು ಪ್ರಕಾಶ್, ಸಹಾಯಕ ಕೃಷಿ ನಿರ್ದೇಶಕ ಆ‌ರ್.ಹರೀಶ್, ಕೆ.ಆರ್.ಡಿ.ಎಲ್‌ನ ಎಇಇ ಚೈತ್ರಾ, ಚಿಣ್ಯ ಗ್ರಾ.ಪಂ ಅಧ್ಯಕ್ಷೆ ಬಿ.ಕೆ.ಶ್ವೇತಾ, ಸದಸ್ಯ ವೆಂಕಟೇಶ್, ಮುಖಂಡ ಸುನಿಲ್ ಲಕ್ಷ್ಮೀಕಾಂತ್, ಟಿ.ಎ.ಪಿ.ಸಿ.ಎಂ.ಎಸ್ ಮಾಜಿ ಅಧ್ಯಕ್ಷ ಅಲ್ಪಹಳ್ಳಿ ಡಿ.ಕೃಷ್ಣೇಗೌಡ, ಹೊಣಕೆರೆ ಬಸವರಾಜು, ಕುಮಾರ್‌, ಚಿಣ್ಯ ಸತೀಶ್, ಆರ್.ಕೃಷ್ಣೇಗೌಡ, ಅಶೋಕ್, ಪಿ.ಎಲ್‌.ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಕೃಷ್ಣೇಗೌಡ, ಹರಿಪ್ರಸಾದ್, ಯುವರಾಜ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.