ADVERTISEMENT

ಜನವಿರೋಧಿ ತಿದ್ದುಪಡಿ ಖಂಡಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 6 ಆಗಸ್ಟ್ 2020, 11:37 IST
Last Updated 6 ಆಗಸ್ಟ್ 2020, 11:37 IST
ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ದಲಿತ, ಶೋಷಿತ ಸಮಾಜ ಸಂಘರ್ಷ ಸಮಿತಿ ಸದಸ್ಯರು ಗುರುವಾರ ಜಿಲ್ಲಾಧಿಕಾರಿ ಕಚೇರಿ  ಪ್ರತಿಭಟನೆ ನಡೆಸಿದರು
ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ದಲಿತ, ಶೋಷಿತ ಸಮಾಜ ಸಂಘರ್ಷ ಸಮಿತಿ ಸದಸ್ಯರು ಗುರುವಾರ ಜಿಲ್ಲಾಧಿಕಾರಿ ಕಚೇರಿ  ಪ್ರತಿಭಟನೆ ನಡೆಸಿದರು   

ಮಂಡ್ಯ: ಕೋವಿಡ್‌ ಸಂಕಷ್ಟ ಸಮಯದಲ್ಲಿ ರಾಜ್ಯ ಬಿಜೆಪಿ ಸರ್ಕಾರ ಕಾನೂನುಗಳಿಗೆ ಜನವಿರೋಧಿ ತಿದ್ದುಪಡಿ ತಂದಿದೆ. ಜೊತೆಗೆ ಶಿಕ್ಷಣ ವ್ಯವಸ್ಥೆಯನ್ನು ಕೇಸರೀಕರಣ ಮಾಡಲು ಮುಂದಾಗಿದೆ ಎಂದು ಆರೋಪಿಸಿ ದಲಿತ, ಶೋಷಿತ ಸಮಾಜ ಸಂಘರ್ಷ ಸಮಿತಿ ಸದಸ್ಯರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಸಾಮಾಜಿಕ ನ್ಯಾಯ ಪರಿಕಲ್ಪನೆಗೆ ವಿರೋಧಿಯಾಗಿರುವ ಬಿಜೆಪಿ ಸರ್ಕಾರ ಬಂಡವಾಳಶಾಹಿಗಳ ಪರವಾಗಿ ನಿಂತಿದೆ. ಭೂಸುಧಾರಣಾ ಕಾಯ್ದೆ ‘ಉಳುವವನೇ ಭೂಮಿಯ ಒಡೆಯ’ ಎಂಬ ತತ್ವದಡಿ ರಚನೆಯಾಗಿತ್ತು. ಆದರೆ ರಾಜ್ಯ ಸರ್ಕಾರ ಆ ಕಾಯ್ದೆಗೆ ತಿದ್ದುಪಡಿ ತಂದು ‘ಉಳ್ಳವನೇ ಭೂಮಿಯ ಒಡೆಯ’ ಎಂದು ಬದಲಾವಣೆ ಮಾಡಿದೆ. ಇದರಿಂದ ರಾಜ್ಯದ ರೈತರು ಭೂಮಿ ಕಳೆದುಕೊಂಡು ಕೃಷಿ ಕಾರ್ಮಿಕರಾಗುವ ಅಪಾಯ ಎದುರಾಗಿದೆ. ಈ ತಿದ್ದುಪಡಿಯನ್ನೂ ಕೂಡಲೇ ವಾಪಸ್‌ ಪಡೆಯಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಬಹುಸಂಸ್ಕೃತಿ, ಬಹುಧರ್ಮ, ಜಾತ್ಯತೀತ ಮೌಲ್ಯಗಳನ್ನು ಪ್ರತಿಪಾದಿಸುವ ಶಿಕ್ಷಣ ವ್ಯವಸ್ಥೆಯನ್ನು ಬುಡಮೇಲು ಮಾಡಲು ಬಿಜೆಪಿ ಸರ್ಕಾರ ಯತ್ನಿಸುತ್ತಿದೆ. ಸಾಧಕರ ಪಾಠಗಳನ್ನು ಪಠ್ಯಕ್ರಮದಿಂದ ತೆಗೆದುಹಾಕುವ ಮೂಲಕ ಕೋಮುವಾದಿ ನೀತಿ ಅನುಸರಿಸುತ್ತಿದೆ. ಈ ಜನವಿರೋಧಿ ನೀತಿಯನ್ನು ತಕ್ಷಣ ಹಿಂದಕ್ಕೆ ಪಡೆಯಬೇಕು ಎಂದು ಒತ್ತಾಯಿಸಿದರು.

ADVERTISEMENT

ಕೊರೊನಾ ಸೋಂಕು ನಿಯಂತ್ರಿಸುವಲ್ಲಿ ಕೇಂದ್ರ, ರಾಜ್ಯ ಸರ್ಕಾರಗಳು ಸಂಪೂರ್ಣವಾಗಿ ಸೋತಿವೆ. ವೈದ್ಯಕೀಯ ಪರಿಕರ ಖರೀದಿಯಲ್ಲಿ ಅಪಾರ ಹಣ ಅವ್ಯವಹಾರ ನಡೆಸಿರುವುದು ಅಮಾನವೀಯವಾಗಿದೆ. ಈ ಭ್ರಷ್ಟಾಚಾರ ಪ್ರಕರಣವನ್ನು ಕೂಡಲೇ ಸಿಬಿಐ ತನಿಖೆಗೆ ಒಪ್ಪಿಸಬೇಕು. ಕೊರೊನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಸುಸಜ್ಜಿತವಾದ ಆಸ್ಪತ್ರೆ ಸೌಲಭ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸಮಿತಿಯ ಮುಖಂಡರಾದ ವೆಂಕಟಗಿರಿಯಯ್ಯ, ಡಿ.ವೆಂಕಟೇಶ್‌, ಶಿವು, ನಾಗರಾಜ್‌ ಈಚಗೆರೆ, ರಾಮಕೃಷ್ಣ ಸಂಪಹಳ್ಳಿ, ಚನ್ನಕೇಶವ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.