
ಮಳವಳ್ಳಿ: ‘ಸಂವಿಧಾನದ ತಿದ್ದುಪಡಿ ಕುರಿತು ಮಾತನಾಡಿದ ಬಿಜೆಪಿ ಸಂಸದ ಅನಂತ ಕುಮಾರ್ ಹೆಗಡೆ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು’ ಎಂದು ದಲಿತ ಸಂಘಟನೆಗಳ ಸದಸ್ಯರು ಪ್ರತಿಭಟನೆ ನಡೆಸಿದರು.
ಪಟ್ಟಣದ ಪ್ರವಾಸಿ ಮಂದಿರದ ಮುಂಭಾಗದ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಪ್ರತಿಭಟನಾಕಾರರು ಮೆರವಣಿಗೆ ಮೂಲಕ ತಾಲ್ಲೂಕು ಕಚೇರಿ ಮುಂದೆ ಜಮಾಯಿಸಿದರು. ನಂತರ, ಅನಂತ ಕುಮಾರ್ ಹೆಗಡೆ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ವಕೀಲ ಜಗದೀಶ್ ಮಾತನಾಡಿ, ‘ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 400ಕ್ಕೂ ಹೆಚ್ಚು ಸ್ಥಾನ ಗೆದ್ದರೆ ಸಂವಿಧಾನವನ್ನು ತಿದ್ದುಪಡಿ ಮಾಡುತ್ತೇವೆ ಎಂದು ಬಾಯಿಗೆ ಬಂದಂತೆ ಮಾತಾಡುವ ಅನಂತ ಕುಮಾರ್ ಹೆಗಡೆ ಅವರ ಹೇಳಿಕೆ ಬಿಜೆಪಿಯ ಕೋಮುವಾದವನ್ನು ಪ್ರತಿಬಿಂಬಿಸುತ್ತದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇಂಥ ಮಾತುಗಳು ಖಂಡನೀಯ. ಅವರನ್ನು ಚುನಾವಣೆಗೆ ಸ್ಪರ್ಧಿಸದಂತೆ ನಿರ್ಬಂಧಿಸಬೇಕು’ ಎಂದು ಒತ್ತಾಯಿಸಿದರು.
ಮುಖಂಡರಾದ ಸಿ.ಮಾಧು, ಪ್ರಭುಲಿಂಗ, ಬಸವರಾಜು, ಕೆಂಪಣ್ಣ, ಶಾಂತರಾಜು, ಯತೀಶ್, ಕೃಷ್ಣ, ಪ್ರಕಾಶ್, ಸುರೇಶ್, ಮಹದೇವಸ್ವಾಮಿ, ಜಯರಾಜು, ಶಿವಕುಮಾರ್, ಮಹೇಶ್, ಕಿರಣ್ ಶಂಕರ್, ಚಿಕ್ಕಸ್ವಾಮಿ, ರವೀಂದ್ರ, ಸಂತೋಷ್, ಪ್ರಸಾದ್ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.