ಪಾಂಡವಪುರ: ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಹರಿಸಬಾರದು. ಒಂದು ವೇಳೆ ನೀರು ಹರಿಸಲು ಮುಂದಾದರೆ ಜಿಲ್ಲೆಯ ರೈತರೊಂದಿಗೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಜೆಡಿಎಸ್ ಮುಖಂಡ ಸಿ.ಎಸ್. ಪುಟ್ಟರಾಜು ಹೇಳಿದರು.
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಕಾವೇರಿ ವಿಚಾರದಲ್ಲಿ ಮಧ್ಯಸ್ಥಿಕೆ ವಹಿಸಿ ಸಮಸ್ಯೆ ಬಗೆಹರಿಸುವಂತೆ ಸಲಹೆ ನೀಡಿರುವ ಕಾಂಗ್ರೆಸ್ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿ, ‘ಒಕ್ಕೂಟ ವ್ಯವಸ್ಥೆ ಹಾಗೂ ಕಾನೂನು ಚೌಕಟ್ಟು ವ್ಯವಸ್ಥೆಯಲ್ಲಿ ಕುಮಾರಸ್ವಾಮಿ ಅವರು ಸಮಸ್ಯೆ ಬಗೆಹರಿಸುವ ವಿಶ್ವಾಸವಿದೆ’ ಎಂದರು.
‘ಜಿಲ್ಲೆಯ ಜನರಿಗೆ ತೊಂದರೆ ಆಗದ ರೀತಿಯಲ್ಲಿ ಕುಮಾರಸ್ವಾಮಿ ನಡೆದುಕೊಳ್ಳುತ್ತಾರೆ. ಹೀಗಾಗಿ ಯಾವುದೇ ಕಾರಣಕ್ಕೂ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಬಾರದು. ರೈತರ ಜಮೀನಿನಲ್ಲಿ ನೀರಿಲ್ಲದೆ ತೆಕ್ಕಲು ಬೆಳೆದು ನಿಂತಿದೆ. ಯಾವ ಜವಾಬ್ದಾರಿಯನ್ನು ಯಾರು ನಿರ್ವಹಿಸಬೇಕು ಎನ್ನುವುದನ್ನು ಡಾ.ಬಿ.ಆರ್.ಅಂಬೇಡ್ಕರ್ ಸಂವಿಧಾನದಲ್ಲಿ ಬರೆದಿಟ್ಟಿದ್ದಾರೆ. ನಾವು ರೈತರ ಪರ ಇದ್ದೇವೆ. ಕಾನೂನು ಚೌಕಟ್ಟಿನಲ್ಲಿ ತೀರ್ಮಾನ ತೆಗೆದುಕೊಳ್ಳುತ್ತಾರೆ. ಮೋದಿ ಅವರನ್ನು ಭೇಟಿ ಮಾಡಿ ಕಾವೇರಿ ಸಮಸ್ಯೆ ಬಗ್ಗೆ ಚರ್ಚೆ ಮಾಡುತ್ತಾರೆ’ ಎಂದು ಕೈ ನಾಯಕರಿಗೆ ತಿರುಗೇಟು ನೀಡಿದರು.
ಬಾಕ್ಸ್: ಎಚ್.ಡಿ.ಕುಮಾರಸ್ವಾಮಿ ಅವರ ಜನತಾ ದರ್ಶನ ಸಭೆಗೆ ಅಧಿಕಾರಿಗಳು ಬಾರದ ರೀತಿ ಒತ್ತಡ ಹಾಕಿದರು. ಕೇಂದ್ರ ಸಚಿವರನ್ನು ಯಾವ ರೀತಿ ನಡೆಸಿಕೊಂಡರು? ಜಿಲ್ಲಾ ಉಸ್ತುವಾರಿ ಸಚಿವರು ಕುಮಾರಸ್ವಾಮಿ ಅವರ ಕಾರ್ಯಕ್ರಮಕ್ಕೆ ಒಬ್ಬ ಅಧಿಕಾರಿಗಳು ಬಾರದ ರೀತಿ ಮಾಡಿದರು. ಜನರಿಗೆ ನ್ಯಾಯ ಕೊಡಿಸಲು ಕುಮಾರ ಸ್ವಾಮಿ ಮುಂದಾಗಿದ್ದಾರೆ. ಚಾಮರಾಜನಗರದಲ್ಲಿ ಮುಖ್ಯಮಂತ್ರಿಗಳಿಗೆ ಕೊಟ್ಟ ಅರ್ಜಿಗಳನ್ನು ಕಸದ ಬುಟ್ಟಿಗೆ ಹಾಕಿದ್ದಾರೆ. ಎಚ್.ಡಿ. ಕುಮಾರಸ್ವಾಮಿ ಅಂಥಹ ನಾಯಕರಲ್ಲ ಜನರ ಸಮಸ್ಯೆ ನಿವಾರಿಸುತ್ತಾರೆ. ರೈತರ ಪರ ಇದ್ದಾರೆ.
ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಡಿ.ರಮೇಶ್, ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಮಲ್ಲೇಶ್, ಮುಖಂಡರಾದ ಕೆ.ಅನ್ನದಾನಿ, ಮುಖಂಡ ಎಚ್.ಮಂಜುನಾಥ್, ಸಿ.ಅಶೋಕ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.