ADVERTISEMENT

ಶ್ರೀರಂಗಪಟ್ಟಣ: ಜಾರಕಿಹೊಳಿ ಬಂಧಿಸಲು ಕಾಂಗ್ರೆಸ್‌ ಆಗ್ರಹ

ಬೆಂಗಳೂರು– ಮೈಸೂರು ಹೆದ್ದಾರಿ ವೃತ್ತದಲ್ಲಿ ನಡೆದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 30 ಮಾರ್ಚ್ 2021, 3:08 IST
Last Updated 30 ಮಾರ್ಚ್ 2021, 3:08 IST
ಡಿ.ಕೆ. ಶಿವಕಮಾರ್‌ ಅವರ ಕಾರಿನ ಮೇಲೆ ದಾಳಿ ನಡೆಸಿರುವ ರಮೇಶ ಜಾರಕಿಹೊಳಿ ಬೆಂಬಲಿಗರು ಮತ್ತು ರಮೇಶ ಜಾರಕಿಹೊಳಿ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್‌ ಕಾರ್ಯಕರ್ತರು ಸೋಮವಾರ ಶ್ರೀರಂಗಪಟ್ಟಣದ ಕುವೆಂಪು ವೃತ್ತದಲ್ಲಿ ಮಾನವ ಸರಪಳಿ ರಚಿಸಿದರು
ಡಿ.ಕೆ. ಶಿವಕಮಾರ್‌ ಅವರ ಕಾರಿನ ಮೇಲೆ ದಾಳಿ ನಡೆಸಿರುವ ರಮೇಶ ಜಾರಕಿಹೊಳಿ ಬೆಂಬಲಿಗರು ಮತ್ತು ರಮೇಶ ಜಾರಕಿಹೊಳಿ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್‌ ಕಾರ್ಯಕರ್ತರು ಸೋಮವಾರ ಶ್ರೀರಂಗಪಟ್ಟಣದ ಕುವೆಂಪು ವೃತ್ತದಲ್ಲಿ ಮಾನವ ಸರಪಳಿ ರಚಿಸಿದರು   

ಶ್ರೀರಂಗಪಟ್ಟಣ: ಡಿ.ಕೆ.ಶಿವಕಮಾರ್‌ ಅವರ ಕಾರಿನ ಮೇಲೆ ದಾಳಿ ನಡೆಸಿರುವ ರಮೇಶ ಜಾರಕಿಹೊಳಿ ಬೆಂಬಲಿಗರು ಮತ್ತು ರಮೇಶ ಜಾರಕಿಹೊಳಿ ಅವರನ್ನು ಶೀಘ್ರ ಬಂಧಿಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್‌ ಕಾರ್ಯಕರ್ತರು ಸೋಮವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.

ಇಲ್ಲಿನ ಬೆಂಗಳೂರು– ಮೈಸೂರು ಹೆದ್ದಾರಿ ವೃತ್ತದಲ್ಲಿ ಮಾನವ ಸರಪಳಿ ರಚಿಸಿದರು. ಮಾಜಿ ಶಾಸಕ ರಮೇಶ ಬಂಡಿಸಿದ್ದೇಗೌಡ ನೇತೃತ್ವದಲ್ಲಿ ಒಂದು ತಾಸು ಪ್ರತಿಭಟನೆ ನಡೆಯಿತು.

ಬಿಜೆಪಿ ಸರ್ಕಾರ, ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಸತೀಶ್‌ ಜಾರಕಿಹೊಳಿ ವಿರುದ್ಧ ಘೋಷಣೆ ಕೂಗಿದರು. ವಾಹನಗಳನ್ನು ತಡೆದು ದರಿಂದಾಗಿ ಬೆಂಗಳೂರು– ಮೈಸೂರು ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರಕ್ಕೆ ತೊಂದರೆ ಉಂಟಾಯಿತು.

ADVERTISEMENT

‘ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಮೇಲೆ ರಮೇಶ ಜಾರಕಿಹೊಳಿ ಬೆಂಲಿಗರು ಅನಾಗರಿಕರಂತೆ ದಾಳಿ ನಡೆಸಿದ್ದಾರೆ. ರಾಷ್ಟ್ರೀಯ ಪಕ್ಷವೊಂದರ ರಾಜ್ಯ ಘಟಕದ ಅಧ್ಯಕ್ಷರ ಮೇಲೆ ದೌರ್ಜನ್ಯ ನಡೆದಿದೆ. ಇಷ್ಟಾದರೂ ಸರ್ಕಾರ ಘಟನೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ. ಮುಖ್ಯಮಂತ್ರಿ ಮತ್ತು ಗೃಹ ಸಚಿವರು ಅಸಹಾಯಕರಂತೆ ವರ್ತಿಸುತ್ತಿದ್ದಾರೆ. ಜಾರಕಿಹೊಳಿ ವಿರುದ್ಧ ಗಂಭೀರ ಪ್ರಕರಣಗಳು ದಾಖಲಾಗಿದ್ದರೂ ಕ್ರಮ ಕೈಗೊಳ್ಳುವಲ್ಲಿ ಸರ್ಕಾರ ವಿಫಲವಾಗಿದೆ’ ಎಂದು ರಮೇಶ ಬಂಡಿಸಿದ್ದೇಗೌಡ ಗುಡುಗಿದರು.

ನಗರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎನ್‌.ಪ್ರಕಾಶ್‌ ಮಾತನಾಡಿ, ‘ಸಂತ್ರಸ್ತ ಯುವತಿ ರಕ್ಷಣೆ ಕೋರಿ ಹೈಕೋರ್ಟ್‌ ನ್ಯಾಯಮೂರ್ತಿಗೆ ಪತ್ರ ಬರೆದಿದ್ದಾರೆ. ರಾಜ್ಯದಲ್ಲಿ ಕಾನೂನು ಪಾಲನೆ ಆಗುತ್ತಿಲ್ಲ. ಅಧಿಕಾರಸ್ಥರು ಕಾನೂನು ಉಲ್ಲಂಘಿಸಿದ್ದರೂ ಕ್ರಮ ಕೈಗೊಳ್ಳದಿದ್ದರೆ ಏನರ್ಥ?’ ಎಂದು ಪ್ರಶ್ನಿಸಿದರು.

ಕೆಪಿಸಿಸಿ ಸದಸ್ಯ ಎನ್‌.ಗಂಗಾಧರ್‌, ಗ್ರಾಮೀಣ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮಿತ್ರ ರಮೇಶ್‌, ಯುವ ಕಾಂಗ್ರೆಸ್‌ ಅಧ್ಯಕ್ಷರಾದ ಜಯಕುಮಾರ್‌, ಸಂಜಯ್‌, ಗುಣವಂತ, ಮುಖಂಡರಾದ ಪಿ.ಎಚ್‌.ಚಂದ್ರಶೇಖರ್‌, ಎಂ.ಎಲ್‌.ದಿನೇಶ್‌, ದರ್ಶನ್‌, ಉದಯಕುಮಾರ್‌, ಅರಕೆರೆ ಶಶಾಂಕ್‌, ಪಿಕಾರ್ಡ್‌ ಮಾಜಿ ಅಧ್ಯಕ್ಷರಾದ ಗುರುಪ್ರಸಾದ್‌, ಮಹದೇವು, ಹೊಸಹಳ್ಳಿ ಕೃಷ್ಣಮೂರ್ತಿ, ತಾ.ಪಂ.ಸದಸ್ಯ ಕಾಳೇಗೌಡ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.