ADVERTISEMENT

ಪೆಟ್ರೋಲ್‌ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ

ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ, ಬೆಲೆ ಇಳಿಕೆ ಮಾಡುವಂತೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 11 ಜೂನ್ 2021, 12:28 IST
Last Updated 11 ಜೂನ್ 2021, 12:28 IST
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪರಿಶಿಷ್ಟ ವಿಭಾಗ ಜಿಲ್ಲಾ ಘಟಕದ ಸದಸ್ಯರು ಪ್ರತಿಭಟನೆ ನಡೆಸಿದರು
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪರಿಶಿಷ್ಟ ವಿಭಾಗ ಜಿಲ್ಲಾ ಘಟಕದ ಸದಸ್ಯರು ಪ್ರತಿಭಟನೆ ನಡೆಸಿದರು   

ಮಂಡ್ಯ: ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪರಿಶಿಷ್ಟ ವಿಭಾಗ ಜಿಲ್ಲಾ ಘಟಕದ ಸದಸ್ಯರು ಶುಕ್ರವಾರ ನಗರದ ಜೆ.ಸಿ ವೃತ್ತ ಸಮೀಪದ ಪೆಟ್ರೋಲ್‌ ಬಂಕ್‌ ಬಳಿ ಪ್ರತಿಭಟನೆ ನಡೆಸಿದರು.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಕಡಿಮೆಯಾಗಿದ್ದರೂ ಲೀಟರ್‌ ಪೆಟ್ರೋಲ್‌ ಬೆಲೆ ₹ 100 ಗಡಿ ತಲುಪಿರುವುದನ್ನು ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಕೋವಿಡ್‌ ಸಂಕಷ್ಟ ಸಮಯದಲ್ಲಿ ಬಿಜೆಪಿ ಸರ್ಕಾರ ಬಡವರ ಬದುಕಿಗೆ ಬರೆ ಹಾಕುತ್ತಿದೆ. ನಿರಂತರವಾಗಿ ತೆರಿಗೆ ಹೆಚ್ಚಳ ಮಾಡುವ ಮೂಲಕ ಪೆಟ್ರೋಲ್‌, ಡೀಸೆಲ್‌ ಬೆಲೆ ಹೆಚ್ಚಳ ಮಾಡಲಾಗಿದೆ. ಇದರಿಂದ ಅಗತ್ಯ ವಸ್ತುಗಳ ಬೆಲೆಯೂ ಹೆಚ್ಚಳವಾಗಿದೆ. ಕೇಂದ್ರ ಸರ್ಕಾರಕ್ಕೆ ಮಾನವೀಯತೆ ಇಲ್ಲವಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಕೆಪಿಸಿಸಿ ಪರಿಶಿಷ್ಟ ವಿಭಾಗದ ಉಪಾಧ್ಯಕ್ಷ ಎಂ.ಡಿ.ಜಯರಾಂ ಮಾತನಾಡಿ ‘ಪೆಟ್ರೋಲ್‌, ಡೀಸೆಲ್‌ ಬೆಲೆಯ ನಿರಂತರ ಏರಿಕೆಯಿಂದಾಗಿ ಬಡಜನರು ಬದುಕು ನಡೆಸುವುದು ದುಸ್ತರವಾಗಿದೆ. ಪೆಟ್ರೋಲ್‌ ಬೆಲೆ ₹ 100 ತಲುಪಿದ್ದು ಜನರು ವಾಹನಗಳನ್ನು ತ್ಯಜಿಸುವಂತಾಗಿದೆ. ತೈಲ ಬೆಲೆ ಏರಿಕೆಯಿಂದಾಗಿ ಉಂಟಾಗುವ ಪರಿಣಾಮಗಳು ಬಡವರಿಗೆ ಮಾರಕವಾಗಿವೆ. ಅಚ್ಛೆ ದಿನ್‌ ಎನ್ನುತ್ತಾ ಅಧಿಕಾರ ಹಿಡಿದ ಕೇಂದ್ರ ಸರ್ಕಾರ ಬಡವರನ್ನು ಕಷ್ಟದ ಕೂಪಕ್ಕೆ ತಳ್ಳಿದೆ’ ಎಂದು ಆರೋಪಿಸಿದರು.

ADVERTISEMENT

‘ಕಾಂಗ್ರೆಸ್‌ ಸರ್ಕಾರ ಅಧಿಕಾರದಲ್ಲಿದ್ದಾಗ ಕಚ್ಚಾ ತೈಲದ ಬೆಲೆಗೆ ಅನುಗುಣವಾಗಿ ಪೆಟ್ರೋಲ್‌, ಡೀಸೆಲ್‌ ಬೆಲೆ ಇಳಿಸಿತ್ತು. ಡಾ.ಮನಮಮೋಹನ ಸಿಂಗ್‌ ಅವರ ನೇತೃತ್ವದ ಸರ್ಕಾರ ಪೆಟ್ರೋಲ್‌, ಡೀಸೆಲ್‌ ವಿಚಾರವಾಗಿ ಬಡವರ ಪರ ಕೆಲಸ ಮಾಡಿತ್ತು. ಆದರೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬಡವರ ಹಿತ ಕಾಯುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಮುಂದೆ ಜನರು ಬಿಜೆಪಿ ಸರ್ಕಾರಕ್ಕೆ ತಕ್ಕ ಪಾಠ ಕಲಿಸುತ್ತಾರೆ’ ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ನಗರಸಭೆ ಸದಸ್ಯ ಶ್ರೀಧರ್‌, ಮುಖಂಡರಾದ ಎಸ್‌.ಬಿ.ಸುರೇಶ್‌, ದೀಪಕ್‌, ಲವ, ಶಿವರಾಂ ಇದ್ದರು.

ಕಿಸಾನ್ ಕಾಂಗ್ರೆಸ್ ಘಟಕ: ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡಿಸಿ ಜಿಲ್ಲಾ ಕಿಸಾನ್ ಕಾಂಗ್ರೆಸ್ ಘಟಕದ ಸದಸ್ಯರು ಸ್ವರ್ಣಸಂದ್ರದಲ್ಲಿರುವ ಪೆಟ್ರೋಲ್ ಬಂಕ್ ಮುಂದೆ ಪ್ರತಿಭಟನೆ ನಡೆಸಿದರು.

ಜಿಲ್ಲಾ ಘಟಕದ ಅಧ್ಯಕಕ್ಷ ದೇಶಹಳ್ಳಿ ಮೋಹನ್ ಕುಮಾರ್ ಮಾತನಾಡಿ ‘ಕಾಂಗ್ರೆಸ್‌ ವರಿಷ್ಠರ ಸೂಚನೆಯಂತೆ 5 ದಿನಗಳ ಕಾಲ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಬಿಜೆಪಿ ಸರ್ಕಾರ ದೇಶದ ಜನರನ್ನು ಮತ್ತಷ್ಟು ಬಡವರನ್ನಾಗಿಸಲು ಹೊರಟಿದೆ’ ಎಂದರು.

‘ಕೊವಿಡ್ ಸಂಕಷ್ಟದ ನಡುವೆಯೂ ಕೇಂದ್ರ ಬಿಜೆಪಿ ಸರ್ಕಾರ ತೈಲ ಬೆಲೆ ಹೆಚ್ಚಳ ಮಾಡುವ ಮೂಲಕ ಸಂಕಷ್ಟಕರ ಜೀವನ ಸೃಷ್ಟಿಮಾಡಿದೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ತೈಲ ಬೆಲೆ ಇಳಿಕೆ ಆಗಲಿದೆ ಎಂದೇ ಜನರ ಭಾವನೆಯಾಗಿತ್ತು. ಆದರೆ ಜನರ ನಂಬಿಕೆ ಹುಸಿಯಾಗಿದೆ’ ಎಂದು ದೂರಿದರು.

ಮುಖಂಡರಾದ ಕೆ.ಕುಬೇರ್, ಬಿ.ಜೆ. ಸ್ವಾಮಿ, ಶಿವರಾಜು, ಚಂದ್ರಶೇಖರ್, ಗುಣಶೇಖರ್ ಆನಂದಪ್ಪ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.