ADVERTISEMENT

ಮಂಡ್ಯ: ಪೊಲೀಸರ ದೌರ್ಜನ್ಯ ಖಂಡಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 29 ಜುಲೈ 2020, 16:53 IST
Last Updated 29 ಜುಲೈ 2020, 16:53 IST

ಮಂಡ್ಯ: ಮಳವಳ್ಳಿ ಪಟ್ಟಣದಲ್ಲಿ ಬೀದಿಬದಿ ವ್ಯಾಪಾರಸ್ಥರ ಮೇಲೆ, ವಿವಿಧ ಸಂಘಟನೆಗಳ ಮೇಲೆ ಹಲ್ಲೆ ನಡೆಸಿದ ಪೊಲೀಸರ ದೌರ್ಜನ್ಯ ಖಂಡಿಸಿ ರಾಜ್ಯ ಬೀದಿ ಬದಿ ಮಾರಾಟಗಾರರ ಒಕ್ಕೂಟ ಜಿಲ್ಲಾ ಘಟಕದ ಸದಸ್ಯರು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಜುಲೈ 28ರಂದು ಮಳವಳ್ಳಿ ಪಟ್ಟಣದ ಪೇಟೆಬೀದಿಯಲ್ಲಿ ಬೀದಿ ಬದಿ ವ್ಯಾಪಾರಕ್ಕೆ ಅವಕಾಶ ನೀಡಬೇಕು ಎಂದು ಆಗ್ರಹಿಸಿ ಸಿಐಟಿಯು, ಜನವಾದಿ ಮಹಿಳಾ ಸಂಘಟನೆ ಮುಖಂಡರು ಪ್ರತಿಭಟನೆ ನಡೆಸುತ್ತಿದ್ದರು. ಅನವಶ್ಯಕವಾಗಿ ಪೊಲೀಸರು ಮಧ್ಯಪ್ರವೇಶಿಸಿ ಕಾರ್ಯಕರ್ತರು ಮತ್ತು ಗ್ರಾಹಕರ ಮೇಲೆ ದೌರ್ಜನ್ಯ ನಡೆಸಿರುವುದು ಖಂಡನೀಯ ಎಂದು ಆರೋಪಿಸಿದರು.

ಕೊರೊನಾ ಸಂಕಷ್ಟವನ್ನು ನೆಪ ಮಾಡಿ ಬೀದಿ ಬದಿ ವ್ಯಾಪಾರಿಗಳಿಗೆ ವ್ಯಾಪಾರ ಮಾಡಲು ಅವಕಾಶ ನೀಡುತ್ತಿಲ್ಲ. ಬೀದಿ ಬದಿ ವ್ಯಾಪಾರಸ್ಥರನ್ನು ತೆರವುಗೊಳಿಸುವ ಮುನ್ನ ಪಟ್ಟಣ ವ್ಯಾಪಾರ ಸಮಿತಿ ಸಭೆ ಕರೆದು, ಸ್ಥಳ ಬದಲಾವಣೆ ಮಾಡಬೇಕು. ಆದರೆ ಸಭೆ ಕರೆಯದೆ ಸ್ಥಳಾಂತರ ಮಾಡಿ ವ್ಯಾಪಾರಕ್ಕೆ ಅಡಚಣೆ ಉಂಟು ಮಾಡಿದ್ದಾರೆ. ಇದನ್ನು ಖಂಡಿಸಿ ಮೊದಲಿನ ಸ್ಥಳದಲ್ಲೇ ಅವಕಾಶ ನೀಡಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಮಹಿಳೆಯರನ್ನು ಪೊಲೀಸರು ಎಳೆದಾಡಿದ್ದಾರೆ ಎಂದು ಆರೋಪಿಸಿದರು.

ADVERTISEMENT

ಇದಕ್ಕೂ ಮುನ್ನ ಕಾರ್ಮಿಕ ಇಲಾಖೆಯ ಬಳಿ ಪ್ರತಿಭಟನೆ ನಡೆಸಿ ಕಾರ್ಮಿಕ ಅಧಿಕಾರಿಗೆ ಮನವಿ ಸಲ್ಲಿಸಿದರು. ಬೀದಿಬದಿ ವ್ಯಾಪಾರಿಗಳ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಸ್‌.ಬಿ. ರಾಮು, ಸಹಕಾರ್ಯದರ್ಶಿ ಚಂದ್ರಶೇಖರ್‌, ಸಿಐಟಿಯು ಜಿಲ್ಲಾ ಘಟಕದ ಅಧ್ಯಕ್ಷ ಎಂ.ಎಂ.ಶಿವಕುಮಾರ್‌, ಪ್ರಧಾನ ಕಾರ್ಯದರ್ಶಿ ಸಿ.ಕುಮಾರಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.