
ಮಂಡ್ಯ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಕಾಲೇಜಿಗೆ ಸಂಬಂಧಿಸಿದಂತೆ ಅವೈಜ್ಞಾನಿಕವಾಗಿ ಹೊರಡಿಸಿರುವ ಆದೇಶ ಹಿಂಪಡೆಯಬೇಕೆಂದು ಆಗ್ರಹಿಸಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು ಮತ್ತು ಉಪನ್ಯಾಸಕರ ಸಂಘದ ಸದಸ್ಯರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಸರ್‌ಎಂವಿ ಪ್ರತಿಮೆ ಎದುರು ನೆರೆದ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿದರು. ಜಿಲ್ಲಾಧಿಕಾರಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಕಾಲೇಜುಗಳಿಗೆ ಪೂರಕವಲ್ಲದ ಆದೇಶಗಳು ಬರುತ್ತಿರುವುದು ನಮ್ಮ ದೈನಂದಿನ ಚಟುವಟಿಕೆಗಳ ಮೇಲೆ ದುಷ್ಪರಿಣಾಮ ಬೀರುತ್ತಿವೆ. ಜೊತೆಗೆ ಪ್ರಾಂಶುಪಾಲರು ಮತ್ತು ಉಪನ್ಯಾಸಕರ ಆತ್ಮಸ್ಥೆರ್ಯ ಕುಗ್ಗಿಸುತ್ತಿವೆ. ಇದರ ಪರಿಣಾಮವಾಗಿ ಕಾಲೇಜುಗಳ ಭವಿಷ್ಯ ಡೋಲಾಯಮಾನ ಸ್ಥಿತಿಗೆ ತಲುಪುತ್ತಿವೆ ಎಂದು ಆರೋಪಿಸಿದರು.
ಪರೀಕ್ಷಾ ಮಂಡಳಿಯನ್ನು ಪದವಿ ಪೂರ್ವ ಇಲಾಖೆಯಿಂದ ಪ್ರತ್ಯೇಕಿಸಿದ ನಂತರ ದೇಶದಲ್ಲಿ ಮಾದರಿಯಾಗಿದ್ದ ಪದವಿ ಪೂರ್ವ ಶಿಕ್ಷಣ ತನ್ನ ಅಸ್ತಿತ್ವ ಕಳೆದುಕೊಳ್ಳುತ್ತಿದೆ. ಇತ್ತೀಚೆಗೆ ಪದವಿ ಪೂರ್ವ ಶಿಕ್ಷಣಕ್ಕೆ ಸಂಬಂಧನೇ ಇಲ್ಲದ ಡಯಟ್ ಉಪನ್ಯಾಸಕರನ್ನು ಪದವಿ ಪೂರ್ವ ಕಾಲೇಜುಗಳ ಸ್ಥಿತಿಗತಿಗಳ ದತ್ತಾಂಶ ಕ್ರೂಢೀಕರಿಸುವ ನೆಪದಲ್ಲಿ ಕಾಲೇಜುಗಳನ್ನು ಪರಿಶೀಲನೆಗೊಳಪಡಿಸಲು ಹೊರಟಿರುವುದು ದುರಂತ ಎಂದು ಕಿಡಿಕಾರಿದರು.
ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಹಾಗೂ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಸಂಸ್ಥೆ ಜಂಟಿ ಸುತ್ತೋಲೆಯನ್ನು ಹಿಂಪಡೆಯಬೇಕು. ಪದವಿ ಪೂರ್ವ ಶಿಕ್ಷಣ ಇಲಾಖೆಯ ಪ್ರಸ್ತುತ ವೃಂದ ಮತ್ತು ನೇಮಕಾತಿ ನಿಯಮಗಳನ್ನು ತಿದ್ದುಪಡಿ ಮಾಡಲು ಇಪಿ-55 ಎಸ್‌ಎಚ್‌ಎಚ್ ಭಾಗ-1 ಮತ್ತು ಭಾಗ-2 ರಲ್ಲಿ ಒಂಬತ್ತು ಮತ್ತು ಎಸ್‌ಎಸ್‌ಎಲ್‌ಸಿ, ಪ್ರಥಮ ಪಿಯುಸಿ ಹಾಗೂ ದ್ವಿತೀಯ ಪಿಯುಸಿ ತರಗತಿಗಳಿಗೆ ಬೋಧನೆ ಮಾಡುವ ಸಂಬಂಧ ಕಡತವನ್ನು ಶಿಕ್ಷಣ ಸಚಿವರ ಅನುಮೋದನೆಗಾಗಿ ಸಲ್ಲಿಸಿದ್ದು, ಇದನ್ನು ತಿರಸ್ಕರಿಸಬೇಕು ಎಂದು ಆಗ್ರಹಿಸಿದರು.
2024-25ನೇ ಸಾಲಿನ ದ್ವಿತೀಯ ಪಿಯುಸಿ ಉತ್ತರ ಪತ್ರಿಕೆ ಹಾಗೂ ಸಂಭಾವನೆ ಬಾಕಿ ಇರುವ ₹13.5 ಕೋಟಿಯನ್ನು ಕೂಡಲೇ ಬಿಡುಗಡೆ ಮಾಡಿ ವಿತರಿಸಬೇಕು. ಸರ್ಕಾರಿ, ಅನುದಾನಿತ ಪದವಿಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಉಪನ್ಯಾಸಕರು ಮತ್ತು ಪ್ರಾಂಶುಪಾಲರ ಹುದ್ದೆ ಕಾಲಮಿತಿಯಲ್ಲಿ ಭರ್ತಿ ಮಾಡಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಪ್ರಾಂಶುಪಾಲರ ಸಂಘ ಜಿಲ್ಲಾ ಘಟಕದ ಅಧ್ಯಕ್ಷ ಹನುಮಂತಯ್ಯ, ಉಪನ್ಯಾಸಕರ ಸಂಘದ ಅಧ್ಯಕ್ಷ ಆರ್.ಎಂ.ಚನ್ನಕೃಷ್ಣಯ್ಯ, ಮುಖಂಡರಾದ ಶಿವಲಿಂಗಯ್ಯ, ಕೃಷ್ಣೇಗೌಡ, ವೀಣಾ, ರೂಪಾ, ಜಗದಾಂಭ, ಮಾಲತಿ, ಮಮತಾ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.