ಮಂಡ್ಯ: ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ ಪ್ರತಿ ಸೋಮವಾರ ಸಾರ್ವಜನಿಕರ ಕುಂದುಕೊರತೆ ಸಭೆಗಳನ್ನು ಆಯೋಜಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಒ ನಂದಿನಿ ಕೆ.ಆರ್. ಸೂಚಿಸಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಕುಂದುಕೊರತೆ ಸಭೆಯಲ್ಲಿ ಅವರು ಮಾತನಾಡಿದರು.
ಸಾರ್ವಜನಿಕರು ಸರ್ಕಾರಿ ಕೆಲಸಗಳಿಗೆ ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸುವ ಉದ್ದೇಶದಿಂದ ಹಾಗೂ ನಿಗದಿತ ಅವಧಿಯೊಳಗೆ ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಪ್ರತಿ ಸಾರ್ವಜನಿಕ ಕುಂದುಕೊರತೆ ಸಭೆಗಳನ್ನು ಆಯೋಜಿಸಬೇಕು ಎಂದು ತಿಳಿಸಿದರು.
ಕುಡಿಯುವ ನೀರು, ರಸ್ತೆ, ಬೀದಿ ದೀಪ, ಸ್ವಚ್ಛತೆ ಸೇರಿದಂತೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಇತರೆ ಎಲ್ಲ ವಿಷಯಗಳ ಬಗ್ಗೆ ಅಧಿಕಾರಿಗಳಿಗೆ ಮನವಿ ಅಥವಾ ದೂರು ಸಲ್ಲಿಸಬಹುದು. ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಈ ಕುರಿತು ನಿಗದಿತ ಕಾಲಮಿತಿಯೊಳಗೆ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ ಎಂದರು.
ಕುಂದುಕೊರತೆ ಸಭೆಗಳ ಕುರಿತು ಮೇಲ್ವಿಚಾರಣೆ ನಡೆಸಲು ಜಿಲ್ಲಾ ಪಂಚಾಯಿತಿ ಕಚೇರಿಯ ಅಧಿಕಾರಿಗಳನ್ನು ತಾಲ್ಲೂಕು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಲಾಗಿದ್ದು, ಈ ಅಧಿಕಾರಿಗಳು ತಮ್ಮ ತಾಲ್ಲೂಕು ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಕುಂದುಕೊರತೆ ಸಭೆ ಆಯೋಜಿಸಿರುವ ಬಗ್ಗೆ ಖಚಿತಪಡಿಸಿಕೊಳ್ಳಲಿದ್ದಾರೆ ಎಂದು ತಿಳಿಸಿದರು.
ಗ್ರಾಮ ಪಂಚಾಯಿತಿಗಳ ಮಾದರಿಯಲ್ಲೇ ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಕಚೇರಿಗಳಲ್ಲಿಯೂ ಪ್ರತಿ ಸೋಮವಾರ ಮಧ್ಯಾಹ್ನ 3ರಿಂದ ಸಂಜೆ 6ರವರೆಗೂ ಸಾರ್ವಜನಿಕರ ಕುಂದುಕೊರತೆ ಆಲಿಸಲು ಸಭೆ ಆಯೋಜಿಸಲಾಗುತ್ತಿದೆ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.