
ಮಂಡ್ಯ: ‘ಡಿ.21ರಿಂದ 24ರವರೆಗೆ ಗ್ರಾಮೀಣ ಪ್ರದೇಶದಲ್ಲಿ 3 ದಿನ ಹಾಗೂ ನಗರ ಪ್ರದೇಶದಲ್ಲಿ 4 ದಿನ ಪಲ್ಸ್ ಪೋಲಿಯೊ ಅಭಿಯಾನ ನಡೆಸಲಾಗುತ್ತಿದ್ದು, ಪ್ರತಿಯೊಬ್ಬರೂ ಕಡ್ಡಾಯವಾಗಿ 5 ವರ್ಷದೊಳಗಿನ ಎಲ್ಲ ಮಕ್ಕಳಿಗೂ ಲಸಿಕೆ ಹಾಕಿಸಿ’ ಎಂದು ಶಾಸಕ ಪಿ. ರವಿಕುಮಾರ್ ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಜಿಲ್ಲಾಡಳಿತ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ನೇತೃತ್ವದಲ್ಲಿ ನಗರದ ಕಲ್ಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ನಡೆದ ಪಲ್ಸ್ ಪೋಲಿಯೊ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು. ‘ಎರಡು ಹನಿ ಅಮೂಲ್ಯ, ಪೋಲಿಯೊ ಮುಕ್ತ ಭವಿಷ್ಯ’ ಎಂದು ಹೇಳಿದರು.
ಲಸಿಕೆ ಹಾಕಿಸುವ ಮೂಲಕ ಮಕ್ಕಳನ್ನು ಶಾಶ್ವತವಾಗಿ ಅಂಗ ವೈಕಲ್ಯದಿಂದ ಮುಕ್ತ ಮಾಡಬಹುದು. ಸರ್ಕಾರದೊಂದಿಗೆ ಕೈ ಜೋಡಿಸಿ ಪಲ್ಸ್ ಪೋಲಿಯೊ ಅಭಿಯಾನ ಯಶಸ್ವಿಗೊಳಿಸಿ ಎಂದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್. ನಂದಿನಿ ಮಾತನಾಡಿ, ‘ಹುಟ್ಟಿದ ಮಗುವಿನಿಂದ 5 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಪಲ್ಸ್ ಪೋಲಿಯೊ ಲಸಿಕೆ ಹಾಕಿಸುವುದು ಎಲ್ಲರ ಜವಾಬ್ದಾರಿಯಾಗಿದೆ’ ಎಂದರು.
‘ಭಾರತ ಈಗಾಗಲೇ ಪೋಲಿಯೊ ಮುಕ್ತ ದೇಶವಾಗಿದ್ದು, ಆದರೆ ಇತರೆ ದೇಶಗಳಲ್ಲಿ ಪೋಲಿಯೊ ಸೋಂಕು ಇರುವುದರಿಂದ ಮಕ್ಕಳ ಹಿತಾಸಕ್ತಿಗಾಗಿ ಸರ್ಕಾರ ಪೋಲಿಯೊ ಅಭಿಯಾನ ನಡೆಸಿಕೊಂಡು ಬರುತ್ತಿದೆ. ಎರಡು ಹನಿ ಅಂಗವೈಕಲ್ಯವನ್ನು ತಪ್ಪಿಸಿ ಮಕ್ಕಳ ಸರ್ವತೋಮುಖ ಹಾಗೂ ಸರ್ವಾಂಗೀಣ ಬೆಳವಣಿಗೆಗೆ ಕಾರಣವಾಗುತ್ತದೆ’ ಎಂದು ಹೇಳಿದರು.
ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಧ್ಯಕ್ಷ ಬಿ.ಪಿ ಪ್ರಕಾಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ. ಮೋಹನ್, ಮಿಮ್ಸ್ ನಿರ್ದೇಶಕ ಡಾ. ಪಿ.ನರಸಿಂಹಸ್ವಾಮಿ, ಆರ್.ಸಿ.ಹೆಚ್ ಅಧಿಕಾರಿ ಡಾ.ಕೆ.ಪಿ ಅಶ್ವತ್ಥ್, ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ಸೋಮಶೇಖರ್, ತಾಲ್ಲೂಕು ಆರೋಗ್ಯ ವೈದ್ಯಾಧಿಕಾರಿ ಡಾ.ಜವರೇಗೌಡ, ನಗರಸಭೆ ಪೌರಾಯುಕ್ತೆ ಪಂಪಾಶ್ರೀ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.