ADVERTISEMENT

ಸಚಿವ ಸ್ಥಾನ ಕೊಟ್ಟರೆ ಬೇಡ ಅನ್ನುವುದಿಲ್ಲ: ಶಾಸಕ ರಮೇಶ ಬಂಡಿಸಿದ್ದೇಗೌಡ

ಪಶು ವೈದ್ಯಕೀಯ ಆಸ್ಪತ್ರೆ ಕಟ್ಟಡ ನಿರ್ಮಾಣ ಕಾಮಗಾರಿಗೆ ಶುಕ್ರವಾರ ಭೂಮಿಪೂಜೆ

​ಪ್ರಜಾವಾಣಿ ವಾರ್ತೆ
Published 8 ನವೆಂಬರ್ 2025, 5:13 IST
Last Updated 8 ನವೆಂಬರ್ 2025, 5:13 IST
ಶ್ರೀರಂಗಪಟ್ಟಣ ತಾಲ್ಲೂಕಿನ ಬೆಳಗೊಳ ಗ್ರಾಮದಲ್ಲಿ ಪಶು ವೈದ್ಯಕೀಯ ಆಸ್ಪತ್ರೆ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ರಮೇಶ ಬಂಡಿಸಿದ್ದೇಗೌಡ ಶುಕ್ರವಾರ ಭೂಮಿಪೂಜೆ ನೆರವೇರಿಸಿದರು
ಶ್ರೀರಂಗಪಟ್ಟಣ ತಾಲ್ಲೂಕಿನ ಬೆಳಗೊಳ ಗ್ರಾಮದಲ್ಲಿ ಪಶು ವೈದ್ಯಕೀಯ ಆಸ್ಪತ್ರೆ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ರಮೇಶ ಬಂಡಿಸಿದ್ದೇಗೌಡ ಶುಕ್ರವಾರ ಭೂಮಿಪೂಜೆ ನೆರವೇರಿಸಿದರು   

ಪ್ರಜಾವಾಣಿ ವಾರ್ತೆ

ಶ್ರೀರಂಗಪಟ್ಟಣ: ‘ಸಚಿವ ಸ್ಥಾನ ಕೊಟ್ಟರೆ ಬೇಡ ಅನ್ನುವುದಿಲ್ಲ. ನಾನು ಮೂರನೇ ಬಾರಿಗೆ ಶಾಸಕನಾಗಿ ಆಯ್ಕೆಯಾಗಿದ್ದು, ಸಚಿವ ಸ್ಥಾನ ಸಿಕ್ಕರೆ ಸಮರ್ಥವಾಗಿ ನಿಭಾಯಿಸುತ್ತೇನೆ’ ಎಂದು ಶಾಸಕ ರಮೇಶ ಬಂಡಿಸಿದ್ದೇಗೌಡ ಹೇಳಿದರು.

ತಾಲ್ಲೂಕಿನ ಬೆಳಗೊಳ ಗ್ರಾಮದಲ್ಲಿ ₹50 ಲಕ್ಷ ವೆಚ್ಚದಲ್ಲಿ ನಿರ್ಮಿಸುತ್ತಿರುವ ಪಶು ವೈದ್ಯಕೀಯ ಆಸ್ಪತ್ರೆ ಕಟ್ಟಡ ನಿರ್ಮಾಣ ಕಾಮಗಾರಿಗೆ ಶುಕ್ರವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ‘ಸಚಿವ ಸಂಪುಟ ಪುನರ್‌ ರಚನೆ ಬಗ್ಗೆ ನನಗೆ ಸ್ಪಷ್ಟ ಮಾಹಿತಿ ಇಲ್ಲ. ಅಗತ್ಯ ಬಿದ್ದರೆ ಆ ಬಗ್ಗೆ ಪಕ್ಷದ ಹೈ ಕಮಾಂಡ್‌ ತೀರ್ಮಾನ ಕೈಗೊಳ್ಳುತ್ತದೆ. ಅದಕ್ಕೆ ಕಾಂಗ್ರೆಸ್‌ ನಾಯಕರು ಮತ್ತು ಶಾಸಕರು ಬದ್ಧರಾಗಿರುತ್ತಾರೆ’ ಎಂದು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು,

ADVERTISEMENT

ನವೆಂಬರ್‌ ಅಥವಾ ಡಿಸೆಂಬರ್‌ನಲ್ಲಿ ಯಾವ ಕ್ರಾಂತಿಯೂ ನಡೆಯುವುದಿಲ್ಲ. ಕ್ರಾಂತಿ ಎನ್ನುವುದು ಊಹಾಪೋಹ ಅಷ್ಟೆ. ಎಲ್ಲವೂ ಪ‍ಕ್ಷದ ಹೈ ಕಮಾಂಡ್ ಇಚ್ಛೆಯಂತೆ ನಡೆಯುತ್ತದೆ. ಈ ವಿಷಯದಲ್ಲಿ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರದ್ದೇ ಅಂತಿಮ ತೀರ್ಮಾನ ಎಂದರು.

‘ತಾಲ್ಲೂಕಿನ ಬೆಳಗೊಳ ಮತ್ತು ಮಹದೇವಪುರ ಗ್ರಾಮಗಳಲ್ಲಿ ನೂತನ ‍ಪಶು ವೈದ್ಯಕೀಯ ಆಸ್ಪತ್ರೆ ಕಟ್ಟಡಗಳ ನಿರ್ಮಾಣಕ್ಕೆ ಸರ್ಕಾರ ಅನುದಾನ ಮಂಜೂರು ಮಾಡಿದೆ. ಕ್ಷೇತ್ರದಲ್ಲಿ ಸಾಕಷ್ಟು ಕಾಮಗಾರಿಗಳು ಪ್ರಗತಿಯಲ್ಲಿವೆ. ದಸರಾ ಉತ್ಸವದ ಸಂದರ್ಭದಲ್ಲಿ ಅಭಿವೃದ್ಧಿ ಮಾಡಿದ ರಸ್ತೆಗಳು ಕೆಲವೆಡೆ ಗುಂಡಿ ಬಿದ್ದಿದ್ದು, ದುರಸ್ತಿ ಮಾಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಕೆಆರ್‌ಎಸ್‌ ಗ್ರಾಮದಲ್ಲಿ ಮನೆಗಳ ಹಕ್ಕು ಪತ್ರ ವಿತರಣೆ ವಿಷಯದಲ್ಲಿ ಕೆಲವರು ಗೊಂದಲ ಸೃಷ್ಟಿಸುತ್ತಿದ್ದಾರೆ. ನ್ಯಾಯಾಲಯದಲ್ಲಿ ಪ್ರಕರಣ ಬಾಕಿ ಇದೆ. ಪ್ರಕರಣ ಇತ್ಯರ್ಥಪಡಿಸಿ ಫಲಾನುಭವಿಗಳಿಗೆ ಕಾನೂನು ಬದ್ಧ ದಾಖಲೆಗಳನ್ನು ವಿತರಿಸಲಾಗುವುದು’ ಎಂದು ಹೇಳಿದರು.

‘ಒಳಾಂಗಣ ಕ್ರೀಡಾಂಗಣ ಅಭಿವೃದ್ಧಿ ಕಾಮಗಾರಿಯಲ್ಲಿ ಹಣ ದುರುಪಯೋಗ ನಡೆದಿದೆ. ಸಂಬಂಧಿಸಿದ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಮೇಲಧಿಕಾರಿಗಳಿಗೆ ತಿಳಿಸಲಾಗಿದೆ. ಸರ್ಕಾರಿ ಜಾಗ ಅತಿಕ್ರಮವಾಗಿದ್ದರೆ ತೆರವು ಮಾಡಿಸಲು ಕ್ರಮ ವಹಿಸಲಾಗುವುದು’ ಎಂದರು.

ಪಶು ವೈದ್ಯಕೀಯ ಇಲಾಖೆ ಉಪ ನಿರ್ದೇಶಕ ಡಾ.ಶಿವಲಿಂಗಯ್ಯ, ಸಹಾಯಕ ನಿರ್ದೇಶಕ ಡಾ.ಪ್ರವೀಣಕುಮಾರ್‌, ತಹಶೀಲ್ದಾರ್‌ ಚೇತನಾ ಯಾದವ್, ಗ್ರಾ.ಪಂ. ಅಧ್ಯಕ್ಷೆ ಸವಿತಾ ರವಿಕುಮಾರ್‌, ಮಾಜಿ ಅಧ್ಯಕ್ಷರಾದ ಬಿ.ವಿ. ಸುರೇಶ್, ಬಿ. ರವಿಕುಮಾರ್‌, ಎಪಿಎಂಸಿ ಮಾಜಿ ಅಧ್ಯಕ್ಷ ಬಿ.ಎಂ. ಸ್ವಾಮಿಗೌಡ ಇದ್ದರು.