ಮಂಡ್ಯ: ಕಾರ್ಮಿಕರನ್ನು ಗುಲಾಮಗಿರಿಗೆ ತಳ್ಳಲಿರುವ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಪಡಿಸಬೇಕು, ಕನಿಷ್ಠ ವೇತನ ₹36 ಸಾವಿರ ನಿಗದಿಗೊಳಿಸಬೇಕು, ಜೀವನಾವಶ್ಯಕ ವಸ್ತುಗಳ ಬೆಲೆ ಏರಿಕೆ ನಿಯಂತ್ರಿಸಬೇಕು ಎಂದು ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆಸಿಟಿಯು) ಮತ್ತು ಸಂಯುಕ್ತ ಹೋರಾಟ, ಕರ್ನಾಟಕ (ಎಸ್‌ಕೆಎಂ) ಮಂಡ್ಯ ಜಿಲ್ಲಾ ಸಮಿತಿಗಳ ವತಿಯಿಂದ ಪ್ರತಿಭಟನೆ ನಡೆಯಿತು.
ನಗರದ ಜೆ.ಸಿ.ವೃತ್ತದಲ್ಲಿ ಒಗ್ಗೂಡಿದ ಕಾರ್ಮಿಕ ಸಂಘಟನೆಗಳ ಮುಖಂಡರು ಮತ್ತು ಸದಸ್ಯರು ರೈತ, ಕಾರ್ಮಿಕ, ಕೂಲಿಕಾರರ ವಿರೋಧಿ ಕಾನೂನುಗಳ ರದ್ದತಿಗಾಗಿ, ದುಡಿಯುವ ಜನರ ಹಕ್ಕುಗಳ ಉಳಿವಿಗಾಗಿ ಘೋಷಣೆಗಳನ್ನು ಮೊಳಗಿಸಿದರು.
ಕೇಂದ್ರ ಸರ್ಕಾರ ಕಾರ್ಪೊರೇಟ್ ಬಂಡವಾಳದ ಪರ ರೂಪಿಸಿರುವ ಕಾರ್ಮಿಕ ವಿರೋಧಿ ನಾಲ್ಕು ಸಂಹಿತೆಗಳಾದ ವೇತನ ಸಂಹಿತೆ–2019, ಕೈಗಾರಿಕಾ ಸಂಬಂಧಗಳ ಕಾಯ್ದೆ–2020, ವೃತ್ತಿ ಆಧಾರಿತ ಸುರಕ್ಷತೆ, ಆರೋಗ್ಯ ಮತ್ತು ಕೆಲಸದ ಪರಿಸ್ಥಿತಿಗಳ ಸಂಹಿತೆ–2020 ಹಾಗೂ ಸಾಮಾಜಿಕ ಸುರಕ್ಷತಾ ಸಂಹಿತೆ–2020 ಇವುಗಳನ್ನು ರದ್ದುಪಡಿಸಬೇಕು. ಕೃಷಿ ಬೆಳೆಗಳಿಗೆ ಲಾಭದಾಯಕ ಬೆಂಬಲ ಬೆಲೆ ಖಾತ್ರಿಪಡಿಸುವ ಶಾಸನ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.
ಇಂದಿನ ಬೆಲೆಗಳಿಗೆ ಅನುಗುಣವಾಗಿ ಎಲ್ಲ ಸಂಘಟಿತ, ಅಸಂಘಟಿತ, ಗುತ್ತಿಗೆ ಕಾರ್ಮಿಕರು ಮತ್ತು ಸ್ಕೀಂ ನೌಕರರಿಗೆ ರಾಷ್ಟ್ರವ್ಯಾಪಿ ₹26 ಸಾವಿರ ಮತ್ತು ರಾಜ್ಯವ್ಯಾಪಿ ₹36 ಸಾವಿರ ಕನಿಷ್ಠ ವೇತನ ನಿಗದಿಪಡಿಸಬೇಕು. ಗುತ್ತಿಗೆ, ಹೊರ ಗುತ್ತಿಗೆ ಅವಧಿಯ ಉದ್ಯೋಗ, ಅಪ್ರೆಂಟಿಸ್, ಟ್ರೈನಿ ಮುಂತಾದ ಹೆಸರಿನಲ್ಲಿ ಕಾರ್ಮಿಕರ ನೇಮಕ ನಿಲ್ಲಿಸಬೇಕು. ಗುತ್ತಿಗೆ ಮುಂತಾದ ಕಾರ್ಮಿಕರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ತಕ್ಷಣ ಜಾರಿ ಮಾಡಬೇಕು ಎಂದು ಆಗ್ರಹಿಸಿದರು.
‘ರೈತರ ಒಪ್ಪಿಗೆ ಇಲ್ಲದೆ ಬಲವಂತದ ಭೂಸ್ವಾಧೀನ ಹಾಗೂ ಎಪಿಎಂಸಿ ಕಾಯ್ದೆ ತಿದ್ದುಪಡಿ ಸೇರಿದಂತೆ 3 ಕರಾಳ ಕೃಷಿ ಕಾಯ್ದೆ ತಿದ್ದುಪಡಿಗಳನ್ನು ರಾಜ್ಯ ಸರ್ಕಾರ ವಾಪಸ್ ಪಡೆಯಬೇಕು. ಉದ್ಯೋಗದ ಹಕ್ಕನ್ನು ಮೂಲಭೂತ ಹಕ್ಕಾಗಿಸಬೇಕು. ಖಾಲಿಯಿರುವ ಹುದ್ದೆಗಳ ಭರ್ತಿ ಮಾಡಬೇಕು. ಉದ್ಯೋಗ ಖಾತ್ರಿ ಯೋಜನೆಯಡಿ ವಾರ್ಷಿಕ 200 ದಿನ ಕೆಲಸ ಮತ್ತು ದಿನಕ್ಕೆ ₹600 ಕೂಲಿ ನಿಗದಿಪಡಿಸಬೇಕು’ ಎಂದು ಒತ್ತಾಯಿಸಿದರು.
‘ವಿದ್ಯುತ್ ಖಾಸಗೀಕರಣ ಮತ್ತು ಸ್ಮಾರ್ಟ್ ಮೀಟರ್ ಅಳವಡಿಕೆ ನಿಲ್ಲಿಸಬೇಕು, ಆಹಾರ ಭದ್ರತೆಯನ್ನು ಖಾತರಿಪಡಿಸಬೇಕು, ಹಳೆಯ ಪಿಂಚಣಿ ಯೋಜನೆ ಜಾರಿಗೊಳಿಸಬೇಕು, ಇಎಸ್‌ಐ, ಪಿಎಫ್, ಬೋನಸ್ ಪಾವತಿಗಿರುವ ಎಲ್ಲ ವೇತನ ಮಿತಿಯನ್ನು ತೆಗೆಯಬೇಕು. ಗ್ರಾಚ್ಯುಟಿ ಪರಿಹಾರ 90 ದಿನಕ್ಕೆ ಹೆಚ್ಚಿಸಬೇಕು’ ಎಂದು ಮನವಿ ಮಾಡಿದರು.
ಕಾರ್ಮಿಕ ಸಂಘಟನೆಗಳ ಮುಖಂಡರಾದ ಸಿ.ಕುಮಾರಿ, ಟಿ.ಎಲ್. ಕೃಷ್ಣೇಗೌಡ, ಎಂ.ಎಂ. ಶಿವಕುಮಾರ್, ವಿಶ್ವನಾಥ್, ಶಿವಮಲ್ಲು, ಎ.ಬಿ.ಶಶಿಕಲಾ, ಆನಂದರಾವ್ ಕೆ.ಎನ್ ಸೇರಿದಂತೆ ಹಲವಾರು ಮುಖಂಡರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.