
ಮಂಡ್ಯ: ‘ಸರ್ಕಾರಿ ಶಾಲೆ ಉಳಿಸಲು ಜ.26ರ ಗಣರಾಜ್ಯೋತ್ಸವದ ದಿನ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ‘ಕಪ್ಪು ಬಾವುಟ’ ಪ್ರದರ್ಶಿಸಲಾಗುವುದು’ ಎಂದು ಕರ್ನಾಟಕ ರಾಜ್ಯ ರೈತಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಇಂಡುವಾಳು ಚಂದ್ರಶೇಖರ್ ತಿಳಿಸಿದರು.
‘ಮ್ಯಾಗ್ನೆಟ್ ಶಾಲೆ ಮತ್ತು ಕೆಪಿಎಸ್ ಶಾಲೆ ಹೆಸರಿನಲ್ಲಿ 40 ಸಾವಿರ ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸುವುದನ್ನು ಖಂಡಿಸುತ್ತೇವೆ. ಶಾಶ್ವತವಾಗಿ ಸರ್ಕಾರಿ ಶಾಲೆಗಳಿಗೆ ಬೀಗ ಹಾಕಿ, ಖಾಸಗಿ ಶಿಕ್ಷಣ ಸಂಸ್ಥೆಗಳ ಪರ ದಲ್ಲಾಳಿಯಾಗಿರುವ ಸರ್ಕಾರವು ಸಮಾಜ ಹಾಗೂ ಸಂವಿಧಾನ ವಿರೋಧಿ ಕೆಲಸ ಮಾಡುತ್ತಿದೆ’ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.
‘ರಾಜ್ಯದಲ್ಲಿ ಏಕರೂಪ ಶಿಕ್ಷಣ ನೀತಿಯನ್ನು ಜಾರಿಗೊಳಿಸಬೇಕು. ರಾಜಕಾರಣಿಗಳು ಮತ್ತು ಸರ್ಕಾರಿ ನೌಕರರ ಮಕ್ಕಳಿಗೆ ಸಿಗುತ್ತಿರುವ ಗುಣಮಟ್ಟದ ಶಿಕ್ಷಣ ಬಡವರ ಮಕ್ಕಳಿಗೂ ಸಿಗಬೇಕು ಎಂಬ ಬೇಡಿಕೆಯೊಂದಿಗೆ ರಾಜ್ಯವ್ಯಾಪಿ ಹೋರಾಟ ರೂಪಿಸುತ್ತಿದ್ದೇವೆ’ ಎಂದರು.
‘ರಾಜ್ಯದ 41,905 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಎಲ್‌ಕೆಜಿಯಿಂದ 5ನೇ ತರಗತಿಯವರೆಗೆ ದ್ವಿಭಾಷೆಯಲ್ಲಿ ಸಿಬಿಎಸ್‌ಇ ಶಿಕ್ಷಣ ಮತ್ತು ಮೂಲಸೌಕರ್ಯ ಒದಗಿಸಬೇಕು. ಪ್ರತಿಯೊಂದು ಗ್ರಾಮ ಪಂಚಾಯಿತಿಯಲ್ಲೂ 6ನೇ ತರಗತಿಯಿಂದ 12ನೇ ತರಗತಿವರೆಗೆ ನವೋದಯ ಮಾದರಿ ಸಿಬಿಎಸ್‌ಇ ವಸತಿ ಶಾಲಾ ಶಿಕ್ಷಣ ನೀಡಬೇಕು’ ಎಂದು ಒತ್ತಾಯಿಸಿದರು.
ಹಸಿರು ಸೇನೆಯ ತಾಲ್ಲೂಕು ಘಟಕದ ಅಧ್ಯಕ್ಷ ಸಂತೋಷ್ ಗೌಡ ಮಾತನಾಡಿ, ‘ಸರ್ಕಾರಿ ನೌಕರರ ಮಕ್ಕಳು ಕಡ್ಡಾಯವಾಗಿ ಸರ್ಕಾರಿ ಶಾಲೆಗಳಲ್ಲೇ ಕಲಿಯಬೇಕು ಎಂದು ಸರ್ಕಾರ ಆದೇಶಿಸಿದರೆ ಸಮಸ್ಯೆಯೇ ಇಲ್ಲದಂತಾಗುತ್ತದೆ. ಬೇಡಿಕೆಗಳನ್ನು ಈಡೇರಿಸದಿದ್ದರೆ, ಗಣರಾಜ್ಯೋತ್ಸವದ ದಿನ ಬಲಗೈಯಲ್ಲಿ ರಾಷ್ಟ್ರಧ್ವಜ ಮತ್ತು ಎಡಗೈಯಲ್ಲಿ ಕಪ್ಪು ಬಾವುಟ ಹಿಡಿದು ಪ್ರತಿಭಟಿಸುತ್ತೇವೆ’ ಎಂದು ಎಚ್ಚರಿಕೆ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಶಿವಳ್ಳಿ ಚಂದ್ರಶೇಖರ್, ಬೂದನೂರು ಪುಟ್ಟಸ್ವಾಮಿ, ತಗ್ಗಹಳ್ಳಿ ಅನಿಲ್‌ಕುಮಾರ್ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.