ಮದ್ದೂರು: ಪಟ್ಟಣದ ಹೊರವಲಯದ ತಿಮ್ಮದಾಸ್ ಹೋಟೆಲ್ ಬಳಿ ಜು.28 ರಂದು ಸಾಧನಾ ಸಮಾವೇಶವು ನಡೆಯುವ ಹಿನ್ನೆಲೆಯಲ್ಲಿ ಶಾಸಕ ಕೆ.ಎಂ.ಉದಯ್ ಹಾಗೂ ಜಿಲ್ಲಾಧಿಕಾರಿ ಕುಮಾರ ನೇತೃತ್ವದಲ್ಲಿ ಶನಿವಾರ ಸ್ಥಳ ಪರಿಶೀಲನೆ ನಡೆಸಿದರು.
ಶಾಸಕ ಕೆ.ಎಂ.ಉದಯ್ ಮಾತನಾಡಿ, ಕಾಂಗ್ರೆಸ್ ಸರ್ಕಾರದ ಸಾಧನೆ ಕುರಿತು ಸಾಧನಾ ಸಮಾವೇಶ ಹಾಗೂ ತಾಲ್ಲೂಕಿನಲ್ಲಿ ನಡೆದಿರುವ ₹1,300 ಕೋಟಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕು ಸ್ಥಾಪನೆ ಹಾಗೂ ಕಾಮಗಾರಿ ಪೂರ್ಣಗೊಂಡಿರುವ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೆರವೇರಿಸುವರು ಎಂದರು.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿ ಹಲವು ಸಚಿವರು ಸಮಾವೇಶದಲ್ಲಿ ಭಾಗವಹಿಸುವರು. ಈ ಸಮಾವೇಶದ ಬಗ್ಗೆ ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಸಮಾವೇಶದ ರೂಪುರೇಷೆ ಸಿದ್ಧಪಡಿಸಲಾಗುವುದು. ತಾಲ್ಲೂಕಿನ ಸಮಗ್ರ ಅಭಿವೃದ್ಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ₹1,300 ಕೋಟಿಗೂ ಅಧಿಕ ಅನುದಾನ ನೀಡಿರುವುದರಿಂದ ಅಭಿನಂದಿಸಲಾಗುವುದು ಎಂದರು.
ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಡಿವೈಎಸ್ಪಿ ಕೃಷ್ಣಪ್ಪ, ಉಪ ವಿಭಾಗಧಿಕಾರಿ ಶಿವಾನಂದ, ತಹಶೀಲ್ದಾರ್ ಡಾ.ಸ್ಮಿತಾರಾಮು, ಪುರಸಭಾಧ್ಯಕ್ಷೆ ಕೋಕಿಲ ಅರುಣ್, ಮುಖ್ಯಾಧಿಕಾರಿ ಮೀನಾಕ್ಷಿ, ಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ.ಸಂದರ್ಶ, ಮನ್‌ಮುಲ್ ನಿರ್ದೇಶಕ ಹರೀಶ್ ಬಾಬು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.