ಮಂಡ್ಯ: ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಶ್ರಾವಣ ಶನಿವಾರದ ಅಂಗವಾಗಿ ಜಿಲ್ಲೆಯ ವಿಷ್ಣು ದೇವಾಲಯಗಳಲ್ಲಿ ವಿಶೇಷ ಪೂಜಾ ಕಾರ್ಯಗಳು ನೆರವೇರಿದವು.
ತಾಲ್ಲೂಕಿನ ಸಾತನೂರು ಗ್ರಾಮದ ಕಂಬದ ನರಸಿಂಹಸ್ವಾಮಿ ದೇವಾಲಯದಲ್ಲಿ ಶ್ರಾವಣ ಶನಿವಾರದ ಅಂಗವಾಗಿ ಬೆಳಿಗ್ಗೆಯಿಂದಲೇ ವಿಶೇಷ ಪೂಜೆಗಳು ನಡೆದವು. ನರಸಿಂಹಸ್ವಾಮಿ ವಿಗ್ರಹಕ್ಕೆ ತರಹೇವಾರಿ ಹೂಗಳಿಂದ ವಿಶೇಷ ಅಲಂಕಾರ ಮಾಡಲಾಗಿತ್ತು. ದೇವಾಲಯದ ಒಳಾವರಣವನ್ನು ಸಹ ವಿವಿಧ ಪುಷ್ಪಗಳಿಂದ ಅಲಂಕರಿಸಲಾಗಿತ್ತು.
ಕಂಬದ ನರಸಿಂಹಸ್ವಾಮಿ ದರ್ಶನ ಪಡೆಯಲು ಭಕ್ತ ಸಾಗರವೇ ಹರಿದು ಬಂದಿತ್ತು. ದೇವಾಲಯದ ವತಿಯಿಂದ ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು. ಜೊತೆಗೆ ದಾನಿಗಳು ಸಹ ಬೆಟ್ಟದ ಕೆಳಗೆ ಪುಳಿಯೊಗರೆ, ಮೊಸರನ್ನ, ಪಾಯಸ, ಲಾಡು, ವೆಜಿಟಬಲ್ ಬಾತ್, ಚಿತ್ರಾನ್ನವನ್ನು ಬಂದ ಭಕ್ತರಿಗೆ ವಿತರಿಸಿದರು.
ನಗರದ ಪ್ರಮುಖ ದೇವಾಲಯಗಳಲ್ಲೊಂದಾದ ಲಕ್ಷ್ಮಿ ಜನಾರ್ದನಸ್ವಾಮಿ ದೇವಾಲಯ, ಶ್ರೀನಿವಾಸ ದೇವಾಲಯ, ಹೊಸಹಳ್ಳಿ ಬಡಾವಣೆಯ ಶ್ರೀನಿವಾಸ ದೇವಾಲಯ, ಬೋವಿ ಕಾಲೊನಿಯ ಲಕ್ಷ್ಮಿ ವೆಂಕಟೇಶ್ವರಸ್ವಾಮಿ ದೇವಾಲಯ, ನಗರದ ಮೈಸೂರು-ಬೆಂಗಳೂರು ಹೆದ್ದಾರಿ ಕಲ್ಲಹಳ್ಳಿಯ ಆಂಜನೇಯ ದೇವಸ್ಥಾನಕ್ಕೆ ಬೆಳಿಗ್ಗೆಯಿಂದಲೇ ಭಕ್ತರ ದಂಡು ಆಗಮಿಸಿ ವಿಶೇಷ ಪೂಜೆ ಸಲ್ಲಿಸಿ, ಪುನೀತರಾದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.