ಮಂಡ್ಯ: ‘ನನಗೂ ಬೆದರಿಕೆ ಕರೆಗಳು ಬಂದಿವೆ. ಈ ಬಗ್ಗೆ ಪೊಲೀಸ್ ಅಧಿಕಾರಿಗಳಿಗೆ ತಿಳಿಸಿ, ಆರೋಪಿಗಳನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ವಿಧಾನಸಭಾಧ್ಯಕ್ಷ ಯು.ಟಿ .ಖಾದರ್ ಅವರಿಗೆ ಬೆದರಿಕೆ ಕರೆ ಬಂದಿರುವ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ, ಮುಖ್ಯಮಂತ್ರಿಯವರು ಶ್ರೀರಂಗಪಟ್ಟಣ ತಾಲ್ಲೂಕಿನ ತೂಬಿನಕೆರೆ ಹೆಲಿಪ್ಯಾಡ್‌ನಲ್ಲಿ ಶುಕ್ರವಾರ ಈ ರೀತಿ ಪ್ರತಿಕ್ರಿಯಿಸಿದರು.
ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆಯಾದ ಸ್ಥಳಕ್ಕೆ ಬಿಜೆಪಿಯವರು ಭೇಟಿ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿ, ‘ಬಿಜೆಪಿಯವರು ಯಾವಾಗಲೂ ರಾಜಕೀಯವಾಗಿ ಇಂಥ ಪ್ರಕರಣಗಳನ್ನೇ ಹುಡುಕುತ್ತಾರೆ. ಪೆಹಲ್ಗಾಮ್‌ನಲ್ಲಿ ಉಗ್ರರ ದಾಳಿಗೆ 26 ಮಂದಿ ಮೃತಪಟ್ಟರು. ಪ್ರಧಾನಿ ನರೇಂದ್ರ ಮೋದಿ ಅವರು ಆ ಸ್ಥಳಕ್ಕೆ ಭೇಟಿ ನೀಡಿದ್ದಾರೆಯೇ? ಪ್ರವಾಸಿಗರು ಸೇರುವ ಸ್ಥಳದಲ್ಲಿ ಪೊಲೀಸ್ ಆಗಲಿ, ಭದ್ರತಾ ಪಡೆಯವರನ್ನಾಗಲಿ ನಿಯೋಜಿಸಿರಲಿಲ್ಲ. ಇದು ಭದ್ರತಾ ವೈಫಲ್ಯವಲ್ಲವೇ? ಎಂದರು.
ಕೊಲೆಗೀಡಾದ ಸುಹಾಸ್ ಶೆಟ್ಟಿ ರೌಡಿಶೀಟರ್ ಆಗಿದ್ದ ಎಂದು ಪೊಲೀಸರು ತಿಳಿಸಿದ್ದು, ಎಡಿಜಿಪಿ ಅವರನ್ನು ಸ್ಥಳಕ್ಕೆ ಕಳುಹಿಸಿ ಪರಿಶೀಲಿಸಿಲು ಸೂಚಿಸಿದ್ದೇನೆ. ಮನುಷ್ಯನ ಪ್ರಾಣ ಬಹಳ ಮುಖ್ಯ. ಅಪರಾಧಿಗಳು ಯಾರೇ ಆಗಿದ್ದರೂ ಅವರನ್ನು ಪತ್ತೆ ಹಚ್ಚಿ ದಸ್ತಗಿರಿ ಮಾಡಿ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ ಎಂದರು.
ಸಾಮಾಜಿಕ ನ್ಯಾಯದಲ್ಲಿ ಬಿಜೆಪಿಗೆ ನಂಬಿಕೆ ಇಲ್ಲ
1925ರಲ್ಲಿ ಆರಂಭವಾದ ಆರ್‌ಎಸ್‌ಎಸ್ ನೂರು ವರ್ಷಗಳಿಂದ ಶೂದ್ರರು ಮತ್ತು ದಲಿತರ ಮೀಸಲಾತಿಯನ್ನು ನಿರಂತರವಾಗಿ ವಿರೋಧಿಸುತ್ತಾ ಬಂದಿದೆ. ಬಿಜೆಪಿ ಮತ್ತು ಆರ್.ಎಸ್.ಎಸ್.ಗೆ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಲ್ಲ. ಈ ಬಗ್ಗೆ ಅವರಿಗೆ ಬದ್ಧತೆಯೂ ಇಲ್ಲ ಎಂದು ಸಿಎಂ ಟೀಕಿಸಿದರು.
ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ನಡೆಸುವಂತೆ ರಾಹುಲ್ ಗಾಂಧಿ ಎರಡು ವರ್ಷಗಳಿಂದ ಒತ್ತಾಯಿಸುತ್ತಿದ್ದರು. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಇದನ್ನು ಸೇರಿಸಲು ಅವರೇ ಕಾರಣಕರ್ತರು. ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ಮೋದಿಯವರಿಗೆ ಪತ್ರವನ್ನೂ ಬರೆದಿದ್ದರು. ಈ ಎಲ್ಲರ ಹೋರಾಟ ಮತ್ತು ಒತ್ತಡದ ನಂತರ ‘ಜಾತಿಗಣತಿ’ ಮಾಡುತ್ತೇವೆ ಎಂದು ಕೇಂದ್ರ ಸರ್ಕಾರ ಹೇಳಿದೆ ಎಂದರು.
ಕೇಂದ್ರ ಸರ್ಕಾರ ಯಾವಾಗ ಎಂದು ಸಮಯ ನಿಗದಿ ಮಾಡಿಲ್ಲ. ಜನಗಣತಿಯಲ್ಲಿಯೇ ಜಾತಿ ಗಣತಿಯನ್ನು ಮಾಡುವುದಾಗಿ ಹೇಳಿದ್ದಾರೆ. ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಆಗಬೇಕು. ಸಂವಿಧಾನಕ್ಕೆ ತಿದ್ದುಪಡಿ ತಂದು ಮೀಸಲಾತಿಯ ಗರಿಷ್ಠ ಪರಿಮಿತಿಯನ್ನು ಹೆಚ್ಚು ಮಾಡಬೇಕು ಎಂದು ಒತ್ತಾಯಿಸಿದರು.
ಖಾಸಗಿ ಕ್ಷೇತ್ರದಲ್ಲಿಯೂ ಮೀಸಲಾತಿ ತರಲಿ
ಮೀಸಲಾತಿಯಲ್ಲಿ ಶೇ 50ರಷ್ಟು ಗರಿಷ್ಠ ಪರಿಮಿತಿಯನ್ನು ತೆಗೆಯಬೇಕು, ಖಾಸಗಿ ಕ್ಷೇತ್ರದಲ್ಲಿಯೂ ಮೀಸಲಾತಿಯನ್ನು ತರಬೇಕೆಂದು ಪ್ರಧಾನಿಗಳನ್ನು ಒತ್ತಾಯಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.
ನ್ಯಾಯಮೂರ್ತಿ ರೋಹಿಣಿ ಸಮಿತಿಯ ಶಿಫಾರಸುಗಳನ್ನೂ ಜಾರಿಗೊಳಿಸುವ ಜೊತೆಗೆ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯನ್ನೂ ಕೈಗೊಳ್ಳಬೇಕು ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.