ADVERTISEMENT

ರೈತರ ಅನುಕೂಲಕ್ಕಾಗಿಯೇ ಸೋಲಾರ್ ಪ್ಲಾಂಟ್ ಯೋಜನೆ: ಶಾಸಕ ದರ್ಶನ್ ಪುಟ್ಟಣ್ಣಯ್ಯ

​ಪ್ರಜಾವಾಣಿ ವಾರ್ತೆ
Published 22 ಜನವರಿ 2026, 5:21 IST
Last Updated 22 ಜನವರಿ 2026, 5:21 IST
ಪಾಂಡವಪುರ ತಾಲ್ಲೂಕಿನ ಟಿ.ಎಸ್.ಛತ್ರ ಗ್ರಾಮದಲ್ಲಿ ₹50ಲಕ್ಷ ವೆಚ್ಚದ ಕಾಂಕ್ರೀಟ್ ರಸ್ತೆ ಮತ್ತು ಚರಂಡಿ ನಿರ್ಮಾಣಕ್ಕೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಭೂಮಿಪೂಜೆ ನೆರವೇರಿಸಿದರು 
ಪಾಂಡವಪುರ ತಾಲ್ಲೂಕಿನ ಟಿ.ಎಸ್.ಛತ್ರ ಗ್ರಾಮದಲ್ಲಿ ₹50ಲಕ್ಷ ವೆಚ್ಚದ ಕಾಂಕ್ರೀಟ್ ರಸ್ತೆ ಮತ್ತು ಚರಂಡಿ ನಿರ್ಮಾಣಕ್ಕೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಭೂಮಿಪೂಜೆ ನೆರವೇರಿಸಿದರು    

ಪಾಂಡವಪುರ: ‘ತಾಲ್ಲೂಕಿನ ಕನಗನಹಳ್ಳಿ ಗ್ರಾಮದಲ್ಲಿ ಸೋಲಾರ್ ಪ್ಲಾಂಟ್ ಅಳವಡಿಕೆ ವಿಚಾರದಲ್ಲಿ ಯಾವುದೇ ರಾಜಕಾರಣ ಇಲ್ಲ. ರೈತರ ಅನುಕೂಲಕ್ಕಾಗಿ ಸ್ಥಳೀಯವಾಗಿ ವಿದ್ಯುತ್ ಉತ್ಪಾದಿಸಲು ಈ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದ್ದು, ಇದಕ್ಕೆ ಆಕ್ಷೇಪ ವ್ಯಕ್ತಪಡಿಸುವುದು ಸರಿಯಲ್ಲ’ ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಹೇಳಿದರು.

ತಾಲ್ಲೂಕಿನ ಟಿ.ಎಸ್.ಛತ್ರ ಗ್ರಾಮದಲ್ಲಿ ಎಸ್‌ಇಪಿ ಅನುದಾನದಲ್ಲಿ ₹50ಲಕ್ಷ ವೆಚ್ಚದ ಕಾಂಕ್ರೀಟ್ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗೆ ಬುಧವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

‘ಕೇಂದ್ರ ಸರ್ಕಾರದ ಪಿಎಂ ಕುಸುಮ್ ಯೋಜನೆಯಡಿ ರಾಜ್ಯ ಸರ್ಕಾರದ ಅನುದಾನದೊಂದಿಗೆ ತಾಲ್ಲೂಕಿನ ಕನಗನಹಳ್ಳಿಯಲ್ಲಿ ಸೋಲಾರ್ ಪ್ಲಾಂಟ್ ಅಳವಡಿಸಲಾಗುತ್ತಿದೆ. ಪಿ.ಎಂ ಕುಸುಮ್ ಯೋಜನೆಯ ಅಧಿಕಾರಿಗಳು ಯೋಜನೆಯ ಅಗತ್ಯವಿರುವ ಜಾಗವನ್ನು ಗುರುತಿಸಿದ್ದಾರೆ. ಇದಕ್ಕೆ ಸ್ಥಳೀಯರು ಕೂಡ ಒಮ್ಮತ ಸೂಚಿಸಿ, ನಿಗಧಿಯಾಗಿರುವ ಸ್ಥಳದಲ್ಲೇ ಯೋಜನೆ ಅನುಷ್ಠಾನಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಜತೆಗೆ ಇ–ಪ್ರೊಕ್ಯೂರ್‌ಮೆಂಟ್ ಮೂಲಕ ಗುತ್ತಿಗೆದಾರರು ಕಾಮಗಾರಿ ಪಡೆದುಕೊಂಡಿದ್ದಾರೆ. ಟೆಂಡರ್‌ಗೂ ಮೊದಲೇ ಗುತ್ತಿಗೆದಾರರು ಯಾವ ರಾಜ್ಯದವರು ಎಂದು ನಮಗೇನು ಗೊತ್ತು. ಇದಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ’ ಎಂದು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅವರ ಆರೋಪಗಳಿಗೆ ಪ್ರತಿಕ್ರಿಯಿಸಿದರು.

ADVERTISEMENT

ರೈತರ ಪಂಪ್‌ಸೆಟ್‌ಗಳಿಗೆ ರಾತ್ರಿ ವೇಳೆ ವಿದ್ಯುತ್ ಪೂರೈಕೆಯಾಗುವುದರಿಂದ ರೈತರು ಸಾಕಷ್ಟು ಸಮಸ್ಯೆ ಅನುಭವಿಸುತ್ತಿದ್ದಾರೆ. ಮೇಲುಕೋಟೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಮಳೆಯಾಧಾರಿತ ಪ್ರದೇಶಗಳಲ್ಲಿ ತರಕಾರಿ, ಹೂವು ಬೆಳೆಯುವ ರೈತರ ಅನುಕೂಲಕ್ಕಾಗಿ ಚಿನಕುರಳಿ, ಮೇಲುಕೋಟೆ ಮತ್ತು ದುದ್ದ ಸೇರಿದಂತೆ ಮೂರು ಹೋಬಳಿಗಳಲ್ಲಿ ಸೋಲಾರ್ ಪ್ಲಾಂಟ್ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ನೀರಾವರಿ ಪ್ರದೇಶಗಳಿಗೆ ಈ ಯೋಜನೆ ಅಗತ್ಯವಿಲ್ಲ. ಚಿನಕುರಳಿ ಭಾಗಕ್ಕೆ 5 ಮೆಗಾವ್ಯಾಟ್ ವಿದ್ಯುತ್ ಅವಶ್ಯಕತೆಯಿದ್ದು, ಈ ಯೋಜನೆಯಿಂದ ಈ ಸಮಸ್ಯೆಗೆ ಪರಿಹಾರ ದೊರೆಯಲಿದೆ ಎಂದರು.

‘ಸೋಲಾರ್ ಪ್ಲಾಂಟ್ ಕಾಮಗಾರಿ ಭೂಮಿ ವೇಳೆ ಶಿಷ್ಠಾಚಾರ ಉಲ್ಲಂಘನೆಯಾಗಿಲ್ಲ. ಕಾರ್ಯಕ್ರಮಕ್ಕೆ ತಹಶೀಲ್ದಾರ್, ತಾ.ಪಂ.ಇಒ, ಪಿಡಿಒ, ಸೆಸ್ಕ್ ಮತ್ತು ಕುಸುಮ್ ಯೋಜನೆ ಅಧಿಕಾರಿಗಳನ್ನು ಒಳಗೊಂಡಂತೆ ಎಲ್ಲರೂ ಬಂದಿದ್ದರು. ಕಾರ್ಯಕ್ರಮದ ಬಗ್ಗೆ ಗ್ರಾ.ಪಂ.ಅಧ್ಯಕ್ಷರು ಮತ್ತು ಸದಸ್ಯರಿಗೆ ಪಿಡಿಒ ಮಾಹಿತಿ ನೀಡಿರುತ್ತಾರೆಂದು ಭಾವಿಸಿದ್ದೆ. ಅವರು ಮಾಹಿತಿ ಕೊಟ್ಟಿದ್ದಾರೋ ಇಲ್ಲವೋ ನನಗೆ ಗೊತ್ತಿಲ್ಲ’ ಎಂದು ಹೇಳಿದರು.

ಜಾಗ ಗುರುತಿಸಲಾಗಿದೆ: ತಾಲ್ಲೂಕಿನ ಕ್ಯಾತನಹಳ್ಳಿ ವಿದ್ಯುತ್ ಉಪ ಕೇಂದ್ರ ನಿರ್ಮಿಸಲು ಜಯಂತಿ ನಗರ ಬಳಿಯ ಶಂಭುಲಿಂಗೇಶ್ವರ ಎಜುಕೇಷನ್ ಟ್ರಸ್ಟ್ ಸಮೀಪ ಜಾಗ ಗುರುತಿಸಲಾಗಿದೆ. ಇದಕ್ಕೆ ಸಲ್ಲಿಕೆಯಾಗಿದ್ದ ಪ್ರಸ್ತಾವನೆಯಂತೆ ಸರ್ಕಾರ ಅಗತ್ಯವಿರುವ ಹಣ ಬಿಡುಗಡೆ ಮಾಡಿದೆ ಹಾಗೂ ಜಿಲ್ಲಾಧಿಕಾರಿಗಳು ಜಾಗಕ್ಕೆ ಸಂಬಂಧಿಸಿದಂತೆ ಅಗತ್ಯವಿರುವ ದಾಖಲೆಗಳನ್ನು ಸಿದ್ದಪಡಿಸಿ ಮಂಜೂರು ಮಾಡಿಕೊಟ್ಟಿದ್ದಾರೆ. ಯಾರಿಗಾದರೂ ಈ ಬಗ್ಗೆ ಅನುಮಾನವಿದ್ದರೆ ಇದಕ್ಕೆ ಸಂಬಂಧಿಸಿದ ದಾಖಲೆಗಳನ್ನು ನೀಡಲಾಗುವುದು ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.