ADVERTISEMENT

ಕೆಆರ್‌ಎಸ್‌ಗೆ ಮುತ್ತಿಗೆ ಯತ್ನ: ವಾಟಾಳ್‌ ಸೇರಿ 40 ಮಂದಿಯ ಬಂಧನ, ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2023, 15:29 IST
Last Updated 5 ಅಕ್ಟೋಬರ್ 2023, 15:29 IST
ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಅಣೆಕಟ್ಟೆಗೆ ಗುರುವಾರ ಸಂಜೆ ಮುತ್ತಿಗೆ ಹಾಕಲು ಬಂದ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್‌ ಅವರ ಭಾವಚಿತ್ರವನ್ನು ಹರಿದು ಆಕ್ರೋಶ ವ್ಯಕ್ತಪಡಿಸಿದರು
ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಅಣೆಕಟ್ಟೆಗೆ ಗುರುವಾರ ಸಂಜೆ ಮುತ್ತಿಗೆ ಹಾಕಲು ಬಂದ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್‌ ಅವರ ಭಾವಚಿತ್ರವನ್ನು ಹರಿದು ಆಕ್ರೋಶ ವ್ಯಕ್ತಪಡಿಸಿದರು   

ಶ್ರೀರಂಗಪಟ್ಟಣ: ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಕೆಆರ್‌ಎಸ್‌ ಅಣೆಕಟ್ಟೆಗೆ ಮುತ್ತಿಗೆ ಹಾಕಲು ಯತ್ನಿಸಿದ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಸೇರಿ 40 ಮಂದಿಯನ್ನು ಪೊಲೀಸರು ಗುರುವಾರ  ಬಂಧಿಸಿದರು.

ಕೆಆರ್‌ಎಸ್‌ ಅಣೆಕಟ್ಟೆಯ ದಕ್ಷಿಣ ದ್ವಾರದ ಬಳಿ ಪ್ರತಿಭಟನೆ ನಡೆಸಿ ಅಣೆಕಟ್ಟೆಯತ್ತ ತೆರಳುತ್ತಿದ್ದ ವಾಟಾಳ್‌ ನಾಗರಾಜ್‌, ಕನ್ನಡ ಸೇನೆ ರಾಜ್ಯ ಘಟಕದ ಅಧ್ಯಕ್ಷ ಕೆ.ಆರ್‌. ಕುಮಾರ್‌, ದಲಿತ ಸಂಘರ್ಷ ಸಮಿತಿಯ ಎ.ಎನ್‌. ಮೂರ್ತಿ, ರೂಪೇಶ್‌ ರಾಜಣ್ಣ, ಗಿರೀಶ್‌ಗೌಡ, ಪಾರ್ಥಸಾರಥಿ ಇತರರನ್ನು ಪೊಲೀಸರು ವಶಕ್ಕೆ ಪಡೆದರು. ತಮ್ಮನ್ನು ಬಂಧಿಸಲು ಮುಂದಾದ ಪೊಲೀಸರ ವಿರುದ್ಧ ವಾಟಾಳ್‌ ನಾಗರಾಜ್‌ ಹರಿಹಾಯ್ದರು. ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್‌ ಅವರ ಬಾವಚಿತ್ರವನ್ನು ಹರಿದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರ ಮತ್ತು ತಮಿಳುನಾಡು ಸರ್ಕಾರಗಳ ವಿರುದ್ಧ ಘೋಷಣೆ ಕೂಗಿದರು. ಪ್ರತಿಭಟನಾಕಾರರನ್ನು ಕೆಆರ್‌ಎಸ್‌ ಪೊಲೀಸ್‌ ಠಾಣೆಗೆ ಕರೆದೊಯ್ದು ನಂತರ ಬಿಡುಗಡೆ ಮಾಡಲಾಯಿತು. ಕೃಷಿ ಮತ್ತು ಕುಡಿಯಲು ಕಾವೇರಿ ನೀರನ್ನೇ ನೆಚ್ಚಿಕೊಂಡಿರುವ ಜನರು ತಮಗೆ ಆಗುತ್ತಿರುವ ಅನ್ಯಾಯವನ್ನು ವಿರೋಧಿಸಿ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೂ ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಹರಿಸುತ್ತಲೇ ಇದೆ. ಇದು ಅಕ್ಷಮ್ಯ ಎಂದು ವಾಟಾಳ್‌ ನಾಗರಾಜ್‌ ಟೀಕಿಸಿದರು.

ADVERTISEMENT

ಇದಕ್ಕೂ ಮುನ್ನ ಕೆಆರ್‌ಎಸ್‌ ಅಣೆಕಟ್ಟೆ ಬಳಿ ಬಂದ ವಾಟಾಳ್‌ ನಾಗರಾಜ್ ಮತ್ತು ಇತರರನ್ನು ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎ.ಎಲ್‌. ಕೆಂಪೂಗೌಡ ನೇತೃತ್ವದ ರೈತ ಸಂಘದ ಪದಾಧಿಕಾರಿಗಳು ಸ್ವಾಗತಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.