
ಮಂಡ್ಯ: 2025-26ರ ಹಂಗಾಮಿನಲ್ಲಿ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಪೂರೈಕೆ ಮಾಡಿದ ರೈತರಿಗೆ ಕಾರ್ಖಾನೆಗಳು ಪಾವತಿಸಬೇಕಾದ ಎಫ್.ಆರ್.ಪಿ ದರ ಹೊರತುಪಡಿಸಿ ಹೆಚ್ಚುವರಿಯಾಗಿ ರಾಜ್ಯ ಸರ್ಕಾರದಿಂದ ಪ್ರತಿ ಟನ್‌ಗೆ ₹50 ಹಾಗೂ ಸಕ್ಕರೆ ಕಾರ್ಖಾನೆ ವತಿಯಿಂದಲೂ ಸಹ ಪ್ರತಿ ಟನ್‌ಗೆ ₹50 ಹಣವನ್ನು ಹೆಚ್ಚುವರಿಯಾಗಿ ಪಾವತಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಕುಮಾರ ಹೇಳಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಂಗಾಮಿನಲ್ಲಿ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಸರಬರಾಜು ಮಾಡಿದ ರೈತರಿಗೆ ನಿಗದಿಪಡಿಸಿರುವ ಹೆಚ್ಚುವರಿ ಕಬ್ಬಿನ ಬೆಲೆಯನ್ನು ಬಿಡುಗಡೆ ಮಾಡುವ ಕುರಿತು ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ರೈತರಿಗೆ ಒಟ್ಟಾಗಿ ಪ್ರತಿ ಟನ್‌ಗೆ ಹೆಚ್ಚುವರಿಯಾಗಿ ₹100 ಹಣ ಪಾವತಿ ಮಾಡಲು ಕ್ರಮ ವಹಿಸಲಾಗಿದೆ. 2025-26ನೇ ಸಾಲಿನ ಹಂಗಾಮಿ ಕಬ್ಬು ಸರಬರಾಜು ಮಾಡಿದ ರೈತರಿಗೆ ಒಟ್ಟು ₹10 ಕೋಟಿ ಆರ್ಥಿಕ ನೆರವನ್ನು ಮಂಡ್ಯ ಜಿಲ್ಲೆಯಲ್ಲಿ ಸರ್ಕಾರದ ಕಡೆಯಿಂದ ನೀಡಲಾಗುತ್ತಿದೆ ಎಂದು ಹೇಳಿದರು.
ಸದರಿ ಆದೇಶದಂತೆ ಅನುದಾನ ಬಿಡುಗಡೆ ಮಾಡಲು ಅಗತ್ಯ ಕ್ರಮವಹಿಸಲಾಗುವುದು ಎಂದು ಸಭೆಯಲ್ಲಿ ತಿಳಿಸಿದರು.
ಸಭೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕರು ಪ್ರತೀಕ್ ಹೆಗ್ಡೆ ಹಾಗೂ ಸಕ್ಕರೆ ಕಾರ್ಖಾನೆಯ ಅಧಿಕಾರಿಗಳು, ಜಿಲ್ಲಾ ಖಜಾನೆ ಅಧಿಕಾರಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.