ADVERTISEMENT

ಸಮಾನತೆ ಸಮಾಜ ನಿರ್ಮಾಣವಾಗಲಿ: ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ

​ಪ್ರಜಾವಾಣಿ ವಾರ್ತೆ
Published 24 ಫೆಬ್ರುವರಿ 2026, 7:05 IST
Last Updated 24 ಫೆಬ್ರುವರಿ 2026, 7:05 IST
ಮದ್ದೂರಿನ ಸರ್ಕಾರಿ ಮಹಿಳಾ ಕಾಲೇಜಿನ ಆವರಣದಲ್ಲಿ ಸೋಮವಾರ ನಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ಪ್ರತಿಬಂಧ ಕಾಯ್ದೆ ಕುರಿತ ವಿಚಾರಗೋಷ್ಠಿ ಹಾಗೂ ಕಾರ್ಯಾಗಾರವನ್ನು ಸಿವಿಲ್ ನ್ಯಾಯಾಧೀಶೆ ನಳಿನ ಉದ್ಘಾಟಿಸಿದರು. ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ, ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು
ಮದ್ದೂರಿನ ಸರ್ಕಾರಿ ಮಹಿಳಾ ಕಾಲೇಜಿನ ಆವರಣದಲ್ಲಿ ಸೋಮವಾರ ನಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ಪ್ರತಿಬಂಧ ಕಾಯ್ದೆ ಕುರಿತ ವಿಚಾರಗೋಷ್ಠಿ ಹಾಗೂ ಕಾರ್ಯಾಗಾರವನ್ನು ಸಿವಿಲ್ ನ್ಯಾಯಾಧೀಶೆ ನಳಿನ ಉದ್ಘಾಟಿಸಿದರು. ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ, ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು   

ಮದ್ದೂರು: ‘ಸಮಾನತೆಯ ಸಮಾಜ ನಿರ್ಮಾಣವಾದಾಗ ಮಾತ್ರ ನೆಮ್ಮದಿಯ ಜೀವನ ಸಾಧ್ಯವಾಗಲಿದ್ದು, ಇದಕ್ಕೆ ಎಲ್ಲರ ಸಹಕಾರ ಅಗತ್ಯ’ ಎಂದು ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ ತಿಳಿಸಿದರು.

ನಗರದ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ತಾಲ್ಲೂಕು ಆಡಳಿತ, ಸಮಾಜ ಕಲ್ಯಾಣ ಇಲಾಖೆ, ತಾಲ್ಲೂಕು ಪಂಚಾಯಿತಿ ಸೇರಿದಂತೆ ಹಲವು ಇಲಾಖೆಗಳ ಸಹಯೋಗದಲ್ಲಿ ಸೋಮವಾರ ನಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ಪ್ರತಿಬಂಧ ಕಾಯ್ದೆ ಕುರಿತ ವಿಚಾರಗೋಷ್ಠಿ ಹಾಗೂ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ದೇಶದ ಸಂವಿಧಾನದಲ್ಲಿ ಏಕತೆ, ಸಮಗ್ರತೆ ಇರಬೇಕು ಎಂದಿದೆ, ಇದನ್ನು ಎಲ್ಲರೂ ಪಾಲಿಸಬೇಕು ಹಾಗೂ ಸಮಾಜದಲ್ಲಿ ಅಸ್ಪೃಶ್ಯತೆ ಒಂದು ಪಿಡುಗಾಗಿದ್ದು, ಇದು ಹೋಗಲಾಡಬೇಕು’ ಎಂದರು.

ADVERTISEMENT

‘ಕೆಲವು ಕಡೆ ಅಸ್ಪೃಶ್ಯತೆ ಈಗಲೂ ಇರುವ ಬಗ್ಗೆ ದೂರುಗಳು ಬರುತ್ತಿವೆ. ಜನತೆ ಹೆಚ್ಚು ಪ್ರಜ್ಞಾವಂತರಾಗಿದ್ದರೂ ಕೆಲವೊಂದು ಘಟನೆಗಳು ಆಗುವುದು ಬೇಸರದ ಸಂಗತಿ. ಜನರಲ್ಲಿ ಮತ್ತಷ್ಟು ಅರಿವಿನ ಅಗತ್ಯವಿದೆ’ ಎಂದು ಹೇಳಿದರು.

‘ದೇವಸ್ಥಾನ ಪ್ರವೇಶಕ್ಕೆ ನಿರ್ಬಂಧ ಹಾಕುವುದು, ಮುಟ್ಟಿಸಿಕೊಳ್ಳದಿರುವುದು, ಇತರೆ ವಿಷಯಗಳಿಗೆ ನಿರ್ಬಂಧ ವಿಧಿಸುವುದು ಸೇರಿದಂತೆ ಈ ರೀತಿಯ ಘಟನೆಗಳು ನಡೆದಲ್ಲಿ ಕೂಡಲೇ ಪೊಲೀಸರ ಗಮನಕ್ಕೆ ತರಬೇಕು, ಆಗ ಸಂಬಂಧಪಟ್ಟವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದರು.

ಕಾರ್ಯಕ್ರಮದಲ್ಲಿ ರಾಜ್ಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮೇಲ್ವಿಚಾರಕಿ ಮತ್ತು ಬಲವರ್ಧನ ಸಮಿತಿಯ ಸಂಚಾಲಕಿ ಪಿ. ಯಶೋಧಾ ಉಪನ್ಯಾಸ ನೀಡಿದರು. ಸಿವಿಲ್ ನ್ಯಾಯಾಧೀಶರಾದ ನಳಿನ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸಮಾಜ ಕಲ್ಯಾಣ ಇಲಾಖಾಧಿಕಾರಿ ನಾಗರಾಜು, ತಾ.ಪಂ ಇ.ಒ ರಾಮಲಿಂಗಯ್ಯ, ಬಿಇಒ ಧನಂಜಯ, ಸರ್ಕಲ್‌ ಇನ್‌ಸ್ಪೆಕ್ಟರ್‌ ನವೀನ್ ಕುಮಾರ್, ನಾರಾಯಣ್, ಅನಿಲ್ ಕುಮಾರ್, ಜಾಗೃತಿ ಸಮಿತಿಯ ಸದಸ್ಯ ಚಿದಂಬರ ಮೂರ್ತಿ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಹಾಜರಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.