
ಕೆ.ಆರ್.ಪೇಟೆ: ಸೇವಾನಿರತ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಟಿಇಟಿ ಪರೀಕ್ಷೆಯನ್ನು ಕಡ್ಡಾಯಗೊಳಿಸಿರುವ ಸುಪ್ರೀಂಕೋರ್ಟ್ ತೀರ್ಪಿಗೆ ಮಾನವೀಯ ದೃಷ್ಟಿಯಿಂದ ಸೂಕ್ತ ಕಾನೂನು ತಿದ್ದುಪಡಿಯನ್ನು ತಂದು ಸೇವಾನಿರತ ಶಿಕ್ಷಕರಿಗೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿ ತಾಲ್ಲೂಕಿನಾದ್ಯಂತ ಪ್ರಾಥಮಿಕ ಶಾಲೆಗಳಲ್ಲಿ ಶಿಕ್ಷಕರು ಕಪ್ಪುಪಟ್ಟಿ ಧರಿಸಿ ಬೋಧನಾ ಕಾರ್ಯ ನಡೆಸಿದರು.
ತಾಲ್ಲೂಕಿನ ಬೂಕಿನಕೆರೆ ಹೋಬಳಿಯ ನಾಟನಹಳ್ಳಿ ಶಾಲೆಯಲ್ಲಿ ನಡೆದ ಪ್ರತಿಭಟನೆಯಲ್ಲಿ ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪೂರ್ಣಚಂದ್ರ ತೇಜಸ್ವಿ ಮಾತನಾಡಿ, ‘ಸೇವಾನಿರತ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಟಿಇಟಿ ಕಡ್ಡಾಯ ರದ್ದುಗೊಳಿಸಬೇಕು. ಕೇಂದ್ರ ಸರ್ಕಾರದ ಮಾದರಿಯಂತೆ ಶಿಕ್ಷಕರಿಗೆ ಸಮಾನ ವೇತನ ನೀಡಬೇಕು. ಹಳೆ ಪಿಂಚಣಿ ಯೋಜನೆ ಜಾರಿ ಮಾಡಬೇಕು’ ಎಂದು ಒತ್ತಾಯಿಸಿದರು.
ಮುಖ್ಯ ಶಿಕ್ಷಕ ಕಾಂತರಾಜು, ಸಹ ಶಿಕ್ಷಕಿ ಗೀತಾ ಆಶಾ ಭಾಗವಹಿಸಿದ್ದರು. ಪಟ್ಟಣದ ಶಾಲಾ ಶಿಕ್ಷಣ ಇಲಾಖೆಯ ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ನಡೆದ ತರಬೇತಿ ಶಿಬಿರದಲ್ಲಿ ಭಾಗವಹಿಸಿದ್ದ ಶಿಕ್ಷಕರು ಕಪ್ಪು ಪಟ್ಟಿ ಧರಿಸಿ ತರಬೇತಿಯಲ್ಲಿ ಪಾಲ್ಗೊಂಡಿದ್ದರು. ಶಿಕ್ಷಕರ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ಆರ್.ಕೆ.ರಮೇಶ್ ಸೇರಿದಂತೆ ಹಲವು ಶಿಕ್ಷಕರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.