ADVERTISEMENT

ಅತಿವೃಷ್ಟಿ: ಸಚಿವರೇ ಸ್ಥಳ ಪರಿಶೀಲಿಸಲಿ; ಆಗ್ರಹ

​ಪ್ರಜಾವಾಣಿ ವಾರ್ತೆ
Published 26 ಅಕ್ಟೋಬರ್ 2021, 4:19 IST
Last Updated 26 ಅಕ್ಟೋಬರ್ 2021, 4:19 IST
ಶ್ರೀರಂಗಪಟ್ಟಣ ತಾಲ್ಲೂಕಿನ ಚಂದಗಿರಿಕೊಪ್ಪಲು ಗ್ರಾಮಕ್ಕೆ ಸೋಮವಾರ ಭೇಟಿ ನೀಡಿದ್ದ ಜಿಲ್ಲಾಧಿಕಾರಿ ಎಸ್‌.ಅಶ್ವತಿ ಅವರನ್ನು ಮಾಜಿ ಶಾಸಕ ರಮೇಶ ಬಂಡಿಸಿದ್ದೇಗೌಡ ಭೇಟಿ ಮಾಡಿ ಅತಿವೃಷ್ಟಿಯಿಂದ ಬೆಳೆ ಮತ್ತು ಮನೆ ಕಳೆದುಕೊಂಡ ಸಂತ್ರಸ್ತರಿಗೆ ಪರಿಹಾರ ಕೊಡಿಸುವಂತೆ ಮನವಿ ಮಾಡಿದರು
ಶ್ರೀರಂಗಪಟ್ಟಣ ತಾಲ್ಲೂಕಿನ ಚಂದಗಿರಿಕೊಪ್ಪಲು ಗ್ರಾಮಕ್ಕೆ ಸೋಮವಾರ ಭೇಟಿ ನೀಡಿದ್ದ ಜಿಲ್ಲಾಧಿಕಾರಿ ಎಸ್‌.ಅಶ್ವತಿ ಅವರನ್ನು ಮಾಜಿ ಶಾಸಕ ರಮೇಶ ಬಂಡಿಸಿದ್ದೇಗೌಡ ಭೇಟಿ ಮಾಡಿ ಅತಿವೃಷ್ಟಿಯಿಂದ ಬೆಳೆ ಮತ್ತು ಮನೆ ಕಳೆದುಕೊಂಡ ಸಂತ್ರಸ್ತರಿಗೆ ಪರಿಹಾರ ಕೊಡಿಸುವಂತೆ ಮನವಿ ಮಾಡಿದರು   

ಶ್ರೀರಂಗಪಟ್ಟಣ: ಭಾನುವಾರ ಮತ್ತು ಮೂರು ದಿನಗಳ ಹಿಂದೆ ಸುರಿದ ಮಳೆಯಿಂದ ತಾಲ್ಲೂಕಿನ ವಿವಿಧೆಡೆ ನೂರಾರು ಎಕರೆ ಬೆಳೆ ಹಾನಿಯಾಗಿದ್ದು, ಹಾನಿಯಾದ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಎಸ್‌.ಅಶ್ವತಿ ಸ್ಥಳೀಯ ಅಧಿಕಾರಿಗಳ ಜತೆ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತಾಲ್ಲೂಕಿನ ಚಂದಗಿರಿಕೊಪ್ಪಲು, ಬೆಳಗೊಳ, ನೆಲಮನೆ, ಬಲ್ಲೇನಹಳ್ಳಿ ಗ್ರಾಮಗಳಿಗೆ ಜಿಲ್ಲಾಧಿಕಾರಿ ಭೇಟಿ ನೀಡಿದ್ದರು.

ಬೆಳಗೊಳ ಗ್ರಾಮದಲ್ಲಿ ಮನೆ ಕುಸಿದಿರುವ ಸ್ಥಳಕ್ಕೆ ತೆರಳಿ ವೀಕ್ಷಿಸಿದರು. ಅಧಿಕಾರಿಗಳು, ರೈತರು, ಸ್ಥಳೀಯರಿಂದ ಮಾಹಿತಿ ಪಡೆದರು. ಮಳೆ ಸಂಪೂರ್ಣ ನಿಂತ ಮೇಲೆ ನಷ್ಟದ ಅಂದಾಜು ಸಿದ್ಧಪಡಿಸಿ ಸರ್ಕಾರದಿಂದ ಪರಿಹಾರ ಕೊಡಿಸುವ ಭರವಸೆ ನೀಡಿದರು. ಬೆಳೆ ಮತ್ತು ಮನೆ ಕಳೆದುಕೊಂಡಿರುವ ಸಂತ್ರಸ್ತರ ಪಟ್ಟಿ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ADVERTISEMENT

350 ಎಕರೆ ಬೆಳೆ ನಷ್ಟ: ತಾಲ್ಲೂಕಿನಲ್ಲಿ ಅತಿವೃಷ್ಟಿಯಿಂದ 350ರಿಂದ 400 ಎಕರೆಯಷ್ಟು ಬೆಳೆ ನಷ್ಟವಾಗಿದೆ. ಮಳೆ ಸಂಪೂರ್ಣ ನಿಂತ ಬಳಿಕ ನಷ್ಟದ ಅಂದಾಜು ಮಾಡಲಾಗುವುದು ಎಂದು ತಹಶೀಲ್ದಾರ್‌ ಶ್ವೇತಾ ಎನ್‌.ರವೀಂದ್ರ ತಿಳಿಸಿದರು. ಮನೆ ಕಳೆದುಕೊಂಡಿರುವ ಸಂತ್ರಸ್ತರಿಗೆ ರಾಜೀವ್‌ಗಾಂಧಿ ವಸತಿ ನಿಗಮದಿಂದ ಪರಿಹಾರ ಕೊಡಿಸಲು ಪೂರಕ ವರದಿ ಸಲ್ಲಿಸಲಾಗುವುದು ಎಂದು ಅವರು ಹೇಳಿದರು.

ಉಪ ವಿಭಾಗಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಚಂದ್ರಶೇಖರ್‌, ಸಹಾಯಕ ನಿರ್ದೇಶಕ ನಿಶಾಂತ್‌ ಕೀಲಾರು ಜತೆಗಿದ್ದರು.

ಸಚಿವರ ಭೇಟಿಗೆ ಆಗ್ರಹ: ಅತಿವೃಷ್ಟಿಯಿಂದಾಗಿ ತಾಲ್ಲೂಕಿನ ವಿವಿಧೆಡೆ ಬೆಳೆ ಮತ್ತು ಮನೆಗಳು ತೀವ್ರ ಹಾನಿಗೀಡಾಗಿದ್ದು, ಕಂದಾಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಸ್ಥಳಕ್ಕೆ ಭೇಟಿ ನೀಡಿ ವಸ್ತುಸ್ಥಿತಿ ಅರಿಯಬೇಕು ಎಂದು ಮಾಜಿ ಶಾಸಕ ರಮೇಶ ಬಂಡಿಸಿದ್ದೇಗೌಡ ಆಗ್ರಹಿಸಿದರು.

ಚಂದಗಿರಿಕೊಪ್ಪಲಿನಲ್ಲಿ ಜಿಲ್ಲಾಧಿಕಾರಿ ಎಸ್‌.ಅಶ್ವತಿ ಅವರನ್ನು ಸೋಮವಾರ ಭೇಟಿಯಾಗಿ ಚರ್ಚಿಸಿ ಬಳಿಕ ಮಾತನಾಡಿದ ಅವರು, ಕಬ್ಬು, ಭತ್ತ, ಬಾಳೆ, ತರಕಾರಿ, ಹೂ ಇತರ ಬೆಳೆಗಳು ಸಂಪೂರ್ಣ ಹಾಳಾಗಿವೆ. ಕೆಲವೆಡೆ ಕೃಷಿ ಭೂಮಿಯೇ ಕೊಚ್ಚಿ ಹೋಗಿದೆ. ರಸ್ತೆಗಳು ಹಾಳಾಗಿವೆ. ತಾಲ್ಲೂಕಿನಲ್ಲಿ 30ಕ್ಕೂ ಹೆಚ್ಚು ಮನೆಗಳು ಕುಸಿದು ಬಿದ್ದಿವೆ. 300 ಎಕರೆಗೂ ಹೆಚ್ಚು ಬೆಳೆ ಹಾನಿಯಾಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮನೆ ಕಳೆದುಕೊಂಡಿರುವವರು ಅತಂತ್ರ ಸ್ಥಿತಿಯಲ್ಲಿದ್ದಾರೆ. ಪ್ರಕೃತಿ ವಿಕೋಪ ಘಟನೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಸಚಿವರು ಹಾನಿಯ ಸ್ಥಳಕ್ಕೆ ಬಂದು ಪರಿಶೀಲಿಸಿ ಸಂತ್ರಸ್ತರಿಗೆ ಆದಷ್ಟು ಶೀಘ್ರ ಪರಿಹಾರ ಘೋಷಿಸಬೇಕು ಎಂದು ರಮೇಶ ಬಂಡಿಸಿದ್ದೇಗೌಡ ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.