ADVERTISEMENT

ತಮಿಳುನಾಡಿಗೆ ನೀರು: ಮಂಡ್ಯ ರಕ್ಷಣಾ ವೇದಿಕೆ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 21 ಜೂನ್ 2021, 14:04 IST
Last Updated 21 ಜೂನ್ 2021, 14:04 IST
ಕೆಆರ್‌ಎಸ್‌ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸಲಾಗುತ್ತಿದೆ ಎಂಬ ಹಿನ್ನೆಲೆಯಲ್ಲಿ ಮಂಡ್ಯ ರಕ್ಷಣಾ ವೇದಿಕೆ ಕಾರ್ಯಕರ್ತರು ಸೋಮವಾರ ಶ್ರೀರಂಗಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು
ಕೆಆರ್‌ಎಸ್‌ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸಲಾಗುತ್ತಿದೆ ಎಂಬ ಹಿನ್ನೆಲೆಯಲ್ಲಿ ಮಂಡ್ಯ ರಕ್ಷಣಾ ವೇದಿಕೆ ಕಾರ್ಯಕರ್ತರು ಸೋಮವಾರ ಶ್ರೀರಂಗಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು   

ಶ್ರೀರಂಗಪಟ್ಟಣ: ಕೆಆರ್‌ಎಸ್‌ ಜಲಾಶಯ ಭರ್ತಿಯಾಗುವ ಮುನ್ನವೇ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸಲಾಗುತ್ತಿದೆ ಎಂಬ ಹಿನ್ನೆಲೆಯಲ್ಲಿ ಮಂಡ್ಯ ರಕ್ಷಣಾ ವೇದಿಕೆ ಕಾರ್ಯಕರ್ತರು ಸೋಮವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.

ಇಲ್ಲಿನ ಅಂಬೇಡ್ಕರ್‌ ಭವನದ ಬಳಿ, ಕಾವೇರಿ ನದಿಯ ದಡದಲ್ಲಿ ನಿಂತು ಪ್ರತಿಭಟಿಸಿದರು. ರಾಜ್ಯ ಸರ್ಕಾರ, ಮುಖ್ಯಮಂತ್ರಿ, ಜಲ ಸಂಪನ್ಮೂಲ ಇಲಾಖೆ ಹಾಗೂ ಕಾವೇರಿ ನೀರಾವರಿ ನಿಗಮದ ವಿರುದ್ಧ ಘೋಷಣೆ ಕೂಗಿದರು. ತಮಿಳುನಾಡಿಗೆ ನೀರು ಹರಿಸುವುದನ್ನು ತಕ್ಷಣ ನಿಲ್ಲಿಸಬೇಕು ಎಂದು ವೇದಿಕೆಯ ಅಧ್ಯಕ್ಷ ಬಿ. ಶಂಕರಬಾಬು ಆಗ್ರಹಿಸಿದರು.

‘ಕೆಆರ್‌ಎಸ್‌ ಜಲಾಶಯ ತುಂಬಿಲ್ಲದ ಕಾರಣ ಮಂಗಾರು ಹಂಗಾಮು ಬೆಳೆಗೆ ಕೃಷಿ ಇಲಾಖೆ ರೈತರಿಗೆ ಬಿತ್ತನೆ ಬೀಜ ವಿತರಿಸಿಲ್ಲ. ಕೆಆರ್‌ಎಸ್‌ ಅಚ್ಚುಕಟ್ಟು ಪ್ರದೇಶದ ಕೆರೆ, ಕಟ್ಟೆಗಳಲ್ಲಿ ಕೂಡ ನೀರಿಲ್ಲ. ಜಲಾಶಯದಲ್ಲಿ 100 ಅಡಿಗಳಷ್ಟೂ ನೀರಿಲ್ಲ. ಆದರೂ ಜಲಾಶಯದಿಂದ ತಮಿಳುನಾಡಿಗೆ 10 ಸಾವಿರ ಕ್ಯುಸೆಕ್‌ಗೂ ಹೆಚ್ಚು ನೀರು ಹರಿಸಲಾಗುತ್ತಿದೆ. ರಾಜ್ಯದ ರೈತರಿಗೆ ಸರ್ಕಾರ ದ್ರೋಹ ಬಗೆಯುತ್ತಿದೆ. ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸದಿದ್ದರೆ ಪ್ರತಿಭಟನೆ ತೀವ್ರಗೊಳಿಸುತ್ತೇವೆ ಎಂದು ಎಚ್ಚರಿಸಿದರು.

ADVERTISEMENT

ವೇದಿಕೆಯ ಉಪಾಧ್ಯಕ್ಷ ಮಂಜುನಾಥ್‌, ಕೂಡಲಕುಪ್ಪೆ ಕುಮಾರ್‌, ಉಮೇಶ್‌, ರಾಜು ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.