
ಕೆ.ಆರ್.ಪೇಟೆ: ಮಹಿಳೆಯರ ಸ್ವಾವಲಂಬಿ ಮತ್ತು ಸ್ವಾಭಿಮಾನಿ ಬದುಕಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನ ವಿಕಾಸ ಕಾರ್ಯಕ್ರಮಗಳು ಸಹಕಾರಿಯಾಗಿವೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಯೋಗೇಶ್ ತಿಳಿಸಿದರು.
ತಾಲ್ಲೂಕಿನ ಕಸಬಾ ಹೋಬಳಿಯ ಬಿಬಿ ಕಾವಲು ಗ್ರಾಮದಲ್ಲಿ ಹರಿಹರಪುರ ವಲಯ ವತಿಯಿಂದ ಆಯೋಜಿಸಿದ್ದ ಮಹಿಳಾ ಜ್ಞಾನ ವಿಕಾಸ ಕೇಂದ್ರ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮಹಿಳೆ ನಿಶ್ಚಿಂತೆಯಿಂದ ತನ್ನ ಬದುಕು ಕಟ್ಟಿಕೊಳ್ಳಲು ಲೋಕ ಜ್ಞಾನ ಹೊಂದಿರಬೇಕು. ಈ ಕಾರಣದಿಂದ ಮಹಿಳಾ ಜ್ಞಾನ ವಿಕಾಸ ಕೇಂದ್ರ ಶ್ರಮಿಸುತ್ತಿದೆ. ಮಹಿಳೆಯರಿಗೆ ಶಿಕ್ಷಣ, ಆರೋಗ್ಯ, ನೈರ್ಮಲ್ಯ, ಸ್ವಯಂ ಉದ್ಯೋಗ ಸೇರಿದಂತೆ ವಿವಿಧ ಸಾಮಾಜಿಕ ಜ್ಞಾನದ ಮಾಹಿತಿ ನೀಡಿ ಜಾಗೃತಿಗೊಳಿಸುವ ನಿಟ್ಟಿನಲ್ಲಿ ಶ್ರಮಿಸುತ್ತಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಗ್ರಾ.ಪಂ ಸದಸ್ಯ ಮೋಹನ್ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಈಚೆಗೆ ಪೋಕ್ಸೊ ಪ್ರಕರಣಗಳು ಹೆಚ್ಚಾಗಿ ದಾಖಲಾಗುತ್ತಿದ್ದು ಮಹಿಳೆಯರು ಎಚ್ಚರವಹಿಸಬೇಕು. ಮಕ್ಕಳು ಹೆಚ್ಚಾಗಿ ಮೊಬೈಲ್ ಫೋನ್ ಬಳಸುವುದು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಭಾಗವಹಿಸದಂತೆ ನೋಡಿಕೊಳ್ಳಬೇಕೆಂದು ಸಲಹೆ ನೀಡಿದರು.
ಮಲ್ಲಿಕಾರ್ಜುನ ಚಾರಿಟಬಲ್ ಟ್ರಸ್ಟ್ ಟ್ರಸ್ಟಿ ಗಂಜಿಗೆರೆ ಮಹೇಶ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಮಹಿಳೆಯರು ಕೂಡ ವ್ಯಾಪಾರ, ಕೈಗಾರಿಕೆಯಂತಹ ಸ್ವಯಂ ಉದ್ಯೋಗಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಆರ್ಥಿಕವಾಗಿ ಉತ್ತಮ ಸ್ಥಾನಮಾನ ಗಳಿಸುತಿದ್ದು, ಈ ನಿಟ್ಟಿನಲ್ಲಿ ಇನ್ನೂ ಹೆಚ್ಚಾಗಿ ಸಕ್ರಿಯವಾಗಬೇಕು ಎಂದರು.
ಕಾರ್ಯಕ್ರಮದಲ್ಲಿ ಕಿಕ್ಕೇರಿ ವಿಭಾಗದ ಧರ್ಮಸ್ಥಳ ಯೋಜನಧಿಕಾರಿ ಪ್ರಸಾದ್, ಪ್ರಮುಖರಾದ ಡೊಂಕಯ್ಯ, ಸಿಂಗಯ್ಯ, ಸಂಸ್ಥೆಯ ಮೇಲ್ವಿಚಾರಕಿ ಸಂಗೀತ ದಿನೇಶ್, ಸಮನ್ವಯ ಅಧಿಕಾರಿ ನಂದಿನಿ, ಸೇವಾಪ್ರತಿನಿಧಿ ವೀಣಾ, ಮಂಜುಳ, ಶ್ರುತಿ, ಪೂರ್ಣಿಮಾ, ಗೀತಾ,ರೇಖಾ, ಸೇರಿದಂತೆ ಗ್ರಾಮಸ್ಥರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.