ADVERTISEMENT

ಅತ್ಯಾಚಾರ ಖಂಡಿಸಿ ವ್ಯಾಪಕ ಪ್ರತಿಭಟನೆ, ಆಕ್ರೋಶ

​ಪ್ರಜಾವಾಣಿ ವಾರ್ತೆ
Published 22 ಡಿಸೆಂಬರ್ 2017, 4:39 IST
Last Updated 22 ಡಿಸೆಂಬರ್ 2017, 4:39 IST
ವಿಜಯಪುರದ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ ಖಂಡಿಸಿ ಗುರುವಾರ ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬಹುಜನ ವಿದ್ಯಾರ್ಥಿ ಸಂಘದ ನೇತೃತ್ವದಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು
ವಿಜಯಪುರದ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ ಖಂಡಿಸಿ ಗುರುವಾರ ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬಹುಜನ ವಿದ್ಯಾರ್ಥಿ ಸಂಘದ ನೇತೃತ್ವದಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು   

ಮೈಸೂರು: ವಿಜಯಪುರದಲ್ಲಿ ಬಾಲಕಿಯೊಬ್ಬಳ ಮೇಲೆ ನಡೆದಿರುವ ಸಾಮೂಹಿಕ ಅತ್ಯಾಚಾರ ಘಟನೆ ಖಂಡಿಸಿ ನಗರದಲ್ಲಿ ಗುರುವಾರ ವಿವಿಧ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದವು.

ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ (ಎಐಎಂಎಸ್ಎಸ್), ದಲಿತ ಸಂಘರ್ಷ ಸಮಿತಿ, ಬಹುಜನ ವಿದ್ಯಾರ್ಥಿ ಸಂಘ ಹಾಗೂ ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘದ ನೇತೃತ್ವದಲ್ಲಿ ಕಾರ್ಯಕರ್ತರು ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿದರು.

ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ (ಎಐಎಂಎಸ್ಎಸ್) ನೇತೃತ್ವದಲ್ಲಿ ಇಲ್ಲಿನ ರಾಮಸ್ವಾಮಿ ವೃತ್ತದ ಬಳಿ ಸೇರಿದ ಹಲವು ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರು ಭಿತ್ತಿಪತ್ರಗಳನ್ನು ಹಿಡಿದು ಘೋಷಣೆ ಕೂಗಿದರು.

ADVERTISEMENT

ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಸಂಧ್ಯಾ ಮಾತನಾಡಿ, ‘ಇದೊಂದು ಘೋರ ಹಾಗೂ ಅಮಾನವೀಯ ಕೃತ್ಯ. ಇಂತಹ ಘಟನೆ ಮರುಕಳಿಸದಿರುವಂತೆ ಮಾಡಲು ಕೂಡಲೇ ಆರೋಪಿಗಳನ್ನು ಬಂಧಿಸಿ, ಕಠಿಣ ಶಿಕ್ಷೆ ವಿಧಿಸಬೇಕು’ ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಆಲ್‌ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ (ಎಐಡಿಎಸ್‌ಒ), ಆಲ್‌ ಇಂಡಿಯಾ ಡೆಮಾಕ್ರಟಿಕ್ ಯೂತ್ ಆರ್ಗನೈಸೇಷನ್ (ಎಐಡಿವೈಒ) ಸಂಘಟನೆಗಳ ಕಾರ್ಯಕರ್ತರೂ ಬೆಂಬಲ ನೀಡಿದ್ದರು.

ಹೆಣ್ಣುಮಕ್ಕಳಿಗೆ ರಕ್ಷಣೆ ನೀಡದ ಸರ್ಕಾರಕ್ಕೆ ಧಿಕ್ಕಾರ, ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಿ ಎಂದು ಕಾರ್ಯಕರ್ತರು ಘೋಷಣೆಗಳನ್ನು ಮೊಳಗಿಸಿದರು. ವಿವಿಧ ಶಾಲೆಯು ವಿದ್ಯಾರ್ಥಿನಿಯರೂ ಪ್ರತಿಭಟನೆಯಲ್ಲಿದ್ದರು.

ಗಲ್ಲುಶಿಕ್ಷೆಗೆ ಒತ್ತಾಯ

ವಿಜಯಪುರದ ಶಾಲಾ ಬಾಲಕಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಬಹುಜನ ವಿದ್ಯಾರ್ಥಿ ಸಂಘ (ಬಿವಿಎಸ್‌)ದ ನೇತೃತ್ವದಲ್ಲಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಕೊಲೆಗೀಡಾದ ವಿದ್ಯಾರ್ಥಿನಿಯ ಭಾವಚಿತ್ರ ಹಿಡಿದ ಹಲವು ಕಾರ್ಯಕರ್ತರು ಶ್ರದ್ಧಾಂಜಲಿ ಸಲ್ಲಿಸಿದರು. ಸಂಘಟನೆಯ ಧ್ವಜ ಹಿಡಿದ ಇನ್ನು ಹಲವು ಕಾರ್ಯಕರ್ತರು ಘೋಷಣೆಗಳನ್ನು ಕೂಗಿದರು.

ರಾಷ್ಟ್ರೀಯ ಅಪರಾಧ ದಾಖಲೆಗಳ ಪ್ರಕಾರ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ವಿದ್ಯಾರ್ಥಿನಿಯರು ಹಾಗೂ ಮಹಿಳೆಯರ ಮೇಲೆ ದೌರ್ಜನ್ಯಗಳು ಹೆಚ್ಚಿವೆ ಎಂಬುದು ಗೊತ್ತಾಗಿದೆ. ಕೇಂದ್ರ ಸರ್ಕಾರ ‘ಬೇಟಿ ಬಚಾವೊ, ಬೇಟಿ ಪಡಾವೊ’ ಎಂದು ಹೇಳುತ್ತಿದೆ. ಆದರೆ, ಶಾಲೆಗೆ ತೆರಳಿದ ವಿದ್ಯಾರ್ಥಿನಿಯರಿಗೆ ರಕ್ಷಣೆಯೇ ಸಿಗುತ್ತಿಲ್ಲ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಮಹಿಳೆಯ ಮೇಲೆ ನಿರಂತರವಾಗಿ ನಡೆಯುತ್ತಿರುವ ದೌರ್ಜನ್ಯ ತಡೆಗಟ್ಟುವಲ್ಲಿ ಕೇಂದ್ರದ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಈಗ ಪೊಲೀಸ್ ವ್ಯವಸ್ಥೆಯೂ ಈ ನಿಟ್ಟಿನಲ್ಲಿ ತನ್ನ ವೈಫಲ್ಯತೆ ತೋರಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಪ್ರಕರಣದಲ್ಲಿ ಆರೋಪಿಗಳನ್ನು ಪೊಲೀಸರು ಶೀಘ್ರದಲ್ಲೇ ಬಂಧಿಸಬೇಕು. ಅವರಿಗೆ ಗಲ್ಲು ಶಿಕ್ಷೆ ವಿಧಿಸಿ ಮತ್ತೆ ಇಂತಹ ಘಟನೆಗಳು ಮರುಕಳಿಸದಂತೆ ತಡೆಯಬೇಕು ಎಂದು ಅವರು ಒತ್ತಾಯಿಸಿದರು.

ಸಂಘಟನೆಯ ಜಿಲ್ಲಾ ಸಂಯೋಜಕರಾದ ಗಣೇಶ್‌ ಮೂರ್ತಿ, ಸೋಸಲೆ ಸಿದ್ಧರಾಜು, ಜಿಲ್ಲಾ ಘಟಕದ ಅಧ್ಯಕ್ಷ ನವೀನ್ ಮೌರ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೇಮಂತ್, ಬಹುಜನ ಸಮಾಜ ಪಕ್ಷದ ನಗರ ಘಟಕದ ಅಧ್ಯಕ್ಷ ಪ್ರತಾಪ್ ಹಾಗೂ ಇತರರು ಪ್ರತಿಭಟನೆಯಲ್ಲಿದ್ದರು.

ಜಿಲ್ಲಾಧಿಕಾರಿಗೆ ಮನವಿ

ದಲಿತ ಸಂಘರ್ಷ ಸಮಿತಿ ನೇತೃತ್ವ ದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಆರೋಪಿಗಳನ್ನು ಶೀಘ್ರ ಬಂಧಿಸುವಂತೆ ಜಿಲ್ಲಾಧಿಕಾರಿಗೆ ಮನವಿಪತ್ರ ಸಲ್ಲಿಸಿದರು. ಬಾಲಕಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರದಲ್ಲಿ ಭಾಗಿಯಾಗಿರುವ ಎಲ್ಲರ ಮೇಲೂ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

ಆರೋಪಿಗಳ ರಕ್ಷಣೆಗೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕರಿಸುವ ಎಲ್ಲರ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಬೇಕು. ಬಾಲಕಿಯ ಕುಟುಂಬಕ್ಕೆ ಸೂಕ್ತ ರಕ್ಷಣೆ ಹಾಗೂ ಪರಿಹಾರವನ್ನು ನೀಡಬೇಕು ಎಂದು ಅವರು ಆಗ್ರಹಿಸಿದರು. ಕೃಷ್ಣಮೂರ್ತಿ ಚಮರಂ, ಯಡದೊರೆ ಮಹದೇವಯ್ಯ, ಕಲ್ಲಹಳ್ಳಿ ಕುಮಾರ್, ಹಿನಕಲ್ ಸೋಮು, ಶ್ರೀನಿವಾಸ್, ಮಹೇಶ್, ಡಾ.ಆನಂದ್ ಪ್ರತಿಭಟನೆಯಲ್ಲಿದ್ದರು.

ವಿ.ವಿಯಲ್ಲಿ ಪ್ರತಿಭಟನೆ

ವಿಜಯಪುರದ ಘಟನೆ ಖಂಡಿಸಿ ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘದ ನೇತೃತ್ವದಲ್ಲಿ ಮಾನಸಗಂಗೋತ್ರಿಯಲ್ಲಿ ಪ್ರತಿಭಟನೆ ನಡೆಯಿತು. ಶತಮಾನೋತ್ಸವ ಗೋಪುರ ಗಡಿಯಾರದ ಬಳಿ ಸೇರಿದ ಕಾರ್ಯ ಕರ್ತರು ಆರೋಪಿಗಳನ್ನು ಬಂಧಿಸುವಂತೆ ಘೋಷಣೆಗಳನ್ನು ಕೂಗಿದರು. ನಂತರ ಬಾಲಕಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.ಸಂಘದ ಅಧ್ಯಕ್ಷ ಬಿ.ಮೂರ್ತಿ, ಜೆ.ಶಿವಮೂರ್ತಿ, ಉಮೇಶ್, ಪ್ರಸಿದ್ಧ್, ಶಿವಶಂಕರ್, ನಾಗರತ್ನಾ, ರಂಗಸ್ವಾಮಿ ಪ್ರತಿಭಟನೆಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.